ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೂರ್ವ ತಯಾರಿ ಇಲ್ಲದ ಕಾರಣ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ ಘಟನೆಗೆ ಸರ್ಕಾರದ ಬೇಜವಾಬ್ದಾರಿತನವೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಆರೋಪಿಸಿದ್ದಾರೆ. ಈ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಬೆಂಗಳೂರು (ಜೂ.04): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಪೂರ್ವ ತಯಾರಿ ಇಲ್ಲದೇ ಇಂತಹ ಒಂದು ಕಾರ್ಯಕ್ರಮ ಆಯೋಜನೆ ಮಾಡಿರುವುದೇ ಕಾಲ್ತುಳಿತಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದ ನಾಯಕರ ಪ್ರಚಾರದ ಹುಚ್ಚಿಗಾಗಿ ಈ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹ ಮಾಡಿದ್ದಾರೆ.
ಇದು ಸರ್ಕಾರದ ಬೇಜವಬ್ದಾರಿ ಆಗಿದೆ. ಸರ್ಕಾರವೇ ನೇರ ಹೊಣೆ. ನ್ಯಾಯಾಂಗ ತನಿಖೆ ಆಗಬೇಕು. ಯಾಕೆ ಇವತ್ತೆ ಕಾರ್ಯಕ್ರಮ ಆಗಬೇಕಿತ್ತಾ? ಪೊಲೀಸ್ ಇಲಾಖೆಯಿಂದ ಪರ್ಮಿಶನ್ ನೀಡಿಲ್ಲ. ವಿಧಾನಸೌಧದ ಮುಂದೆ ಸಹ ಕಾರ್ಯಕ್ರಮಕ್ಕೆ ಪೊಲೀಸರು ಒಪ್ಪಿಗೆ ನೀಡಿರಲಿಲ್ಲ. ಸಿಎಂ ಒತ್ತಾಯ ಮಾಡಿ ಅನುಮತಿ ಕೊಡಿಸಿದ್ದಾರೆ. ಇದಕ್ಕೆ ಸರಕಾರ ಹೊಣೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಮಾಯಕರ ಸಾವಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ 7 ಜನ ಹಾಗೂ ವೈದೇಹಿ ಆಸ್ಪತ್ರೆಯಲ್ಲಿ 4 ಜನ ಸಾವನ್ನಪ್ಪಿದ್ದಾರೆ. ಇನ್ನು ಬಿದ್ದವರ ಆಸ್ಪತ್ರೆ ಹಾಕಲು ಯಾರು ರೆಡಿ ಇರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ಎಲ್ಲಿಯೂ ದೊಡ್ಡ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬಾರದು ಎಂದು ಮನವಿ ಮಾಡಿದ್ದಾರೆ. ಆದರೆ, ಸರ್ಕಾರದ ನಾಯಕರು ಪ್ರಚಾರದ ಹುಚ್ಚಿಗಾಗಿ ವಿಧಾನಸೌಧ ಮೆಟ್ಟಿಲ ಮೇಲೆ ಆರ್‌ಸಿಬಿ ತಂಡದ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದಾರೆ. ಇದರ ಬಗ್ಗೆ ಯಾವುದೇ ಗಂಭೀರವಾದ ಕ್ರಮ ಕೈಗೊಂಡಿಲ್ಲ. ಅಲ್ಲಿ ಜನರು ನೂಕು ನುಗ್ಗಲಿನಲ್ಲಿ ಸಿಲುಕಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಚಪ್ಪಲಿ, ಕಲ್ಲುಗಳನ್ನು ತೂರಿದ್ದಾರೆ ಎಂದು ತಿಳಿಸಿದರು.
ಈ ಕುರಿತು ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಇದು ದೊಡ್ಡ ದುರಂತ. ಸಿಎಂ ಸಿದ್ದರಾಮಯ್ಯ ಅವರಿಗೆ ಮೊದಲೆ ಗೊತ್ತಿತ್ತು. ಅವರಿಗೆ ಮೆಸೇಜ್ ಬಂದಿತ್ತು. ಸಾವಿನ ಮೆಸೇಜ್ ಬಂದ ಮೇಲೆ ಸನ್ಮಾನ ಮಾಡಿದ್ದು ಸರಿನಾ. ಇಲ್ಲಿ ರಾಜಕೀಯ ನಾಯಕರು, ವಿಧಾನಸೌಧ ಸಿಬ್ಬಂದಿ ಅವರ ಮಕ್ಕಳು, ಮೊಮ್ಮಕ್ಕಳು ಬಂದು ಸೆಲ್ಫಿ ತೆಗೆದುಕೊಂಡು ಎಂಜಾಯ್ ಮಾಡುತ್ತಿದ್ದರು. ಇಲ್ಲಿ ಅಮಾಯಕರ ಸಾವು ಸಂಭವಿಸಿದೆ. ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು ಎಂದು ಆಗ್ರಹ ಮಾಡಿದರು.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, 'ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ. ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರವೇ ಹೊತ್ತುಕೊಳ್ಳಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು. ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು' ಎಂದು ಪೋಸ್ಟ್ ಮಾಡಿದ್ದಾರೆ.
