ಸಾಮೂಹಿಕ ಅ*ಚಾರ ನಡೆಸಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಹಾಗೂ ಪ್ರಕರಣದ ಇತರ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು (ಸೆ.18): ಸಾಮೂಹಿಕ ಅ*ಚಾರ ನಡೆಸಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಹಾಗೂ ಪ್ರಕರಣದ ಇತರ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಕರಣ ಸಂಬಂಧ ತನಿಖೆ ನಡೆಸಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ವಿಚಾರಣಾಧೀನ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿರುವುದನ್ನು ಪರಿಗಣಿಸಿರುವ ಹೈಕೋರ್ಟ್, ಎಸ್‌ಐಟಿಯು 42ನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಸಿರುವ ಬಿ ರಿಪೋರ್ಟ್ ಅನ್ನು ನ್ಯಾಯಾಲಯ ಒಪ್ಪಿಕೊಂಡಿರುವುದರಿಂದ ಅರ್ಜಿಯು ವಿಚಾರಣಾ ಮಾನ್ಯತೆ ಕಳೆದುಕೊಂಡಿದ್ದು, ವಜಾಗೊಳಿಸಲಾಗುತ್ತಿದೆ ಎಂದು ಆದೇಶಿಸಿದೆ.
ಬೆಂಗಳೂರಿನ ಯಶವಂತಪುರದ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಮುನಿರತ್ನ, ವಸಂತ ಕುಮಾರ್, ಚನ್ನಕೇಶವ್ ಮತ್ತು ಕಮಲ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳು, ನ್ಯಾಯಮೂರ್ತಿ ಎಂ.ಐ.ಅರುಣ್ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಸಿಒಡಿ-ಎಸ್‌ಐಟಿ ಪರ ಹಾಜರಿದ್ದ ವಿಶೇಷ ಸರ್ಕಾರಿ ಅಭಿಯೋಜಕರು, ಎಸ್‌ಐಟಿಯು ವಿಚಾರಣಾಧೀನ ನ್ಯಾಯಾಲಯಕ್ಕೆ ಪ್ರಕರಣದ ಸಂಬಂಧ ಬಿ ರಿಪೋರ್ಟ್ ಸಲ್ಲಿಸಿದ್ದು, ನ್ಯಾಯಾಲಯ ಒಪ್ಪಿಕೊಂಡಿದೆ ಎಂದು ಮಾಹಿತಿ ನೀಡಿದರು.
ಆದರೆ, ಅರ್ಜಿದಾರರ ಪರ ವಕೀಲರು, ಬಿ ರಿಪೋರ್ಟ್ ಅನ್ನು ನ್ಯಾಯಾಲಯ ಒಪ್ಪಿಕೊಂಡಿರುವ ಬಗ್ಗೆ ಮಾಹಿತಿ ಇಲ್ಲ. ವಿಶೇಷ ಸರ್ಕಾರಿ ಅಭಿಯೋಜಕರ ಹೇಳಿಕೆಯ ಅನ್ವಯ ಅರ್ಜಿ ವಜಾಗೊಳಿಸಬಹುದು ಎಂಬ ಮಾತನ್ನು ಪುರಸ್ಕರಿಸಿದ ನ್ಯಾಯಾಲಯ ಅರ್ಜಿಗಳನ್ನು ವಜಾಗೊಳಿಸಿತು.
ಪ್ರಕರಣದ ಹಿನ್ನೆಲೆ
ಪ್ರಕರಣದ ಸಂತ್ರಸ್ತೆಯು ಮೇ 20ರಂದು ಪೊಲೀಸ್ ಠಾಣೆಗೆ ದೂರು ದಾಖಲಿಸಿ, ಬಿಜೆಪಿ ಕಾರ್ಯಕರ್ತೆಯಾಗಿದ್ದ ತನ್ನ ಮೇಲೆ ಮುನಿರತ್ನ ಅವರು ತಮ್ಮ ಸಹಚರರಿಂದ 2023ರ ಜೂ.11ರಂದು ಅವರ ಕಣ್ಣೇದುರಲ್ಲೇ ಅ*ಚಾರ ಮಾಡಿಸಿದ್ದಾರೆ. ಅ*ಚಾರದ ನಂತರ ಬಾಯಿಗೆ ಮೂತ್ರ ವಿಸರ್ಜಿಸಿದ್ದಾರೆ. ಜೀವನ ಪರ್ಯಂತ ನರಳುವಂತಹ ಅಪಾಯಕಾರಿ ಚುಚ್ಚುಮದ್ದೊಂದನ್ನು ಕೊಡಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ಕ್ರಿಮಿನಲ್ ಪ್ರಕರಣದಲ್ಲಿ ಮುನಿರತ್ನ ಸೇರಿದಂತೆ ಇತರ ಅರ್ಜಿದಾರರು ಆರೋಪಿಗಳಾಗಿದ್ದರು. ರಾಜ್ಯ ಸರ್ಕಾರವು ಪ್ರಕರಣವನ್ನು ಎಸ್‌ಐಟಿಗೆ ತನಿಖೆಗೆ ವರ್ಗಾಯಿಸಿತ್ತು.
