ಗುತ್ತಿಗೆದಾರ ಆತ್ಮಹತ್ಯೆ: ಪ್ರಿಯಾಂಕ್ ರಾಜೀನಾಮೆಗೆ ವಿಜಯೇಂದ್ರ ಆಗ್ರಹ
ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರನ ಕಿರುಕುಳ ಹಾಗೂ ಬೆದರಿಕೆಯಿಂದ ತತ್ತರಿಸಿದ್ದ ಬೀದರ್‌ನ ಗುತ್ತಿಗೆದಾರ ಸಚಿನ್ ಸುದೀರ್ಘ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು(ಡಿ.27): ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕೆಲ ಸಚಿವರು ತಮ್ಮ ಬಲಗೈ ಬಂಟರು ಹಾಗೂ ಆಪ್ತ ಸಹಾ ಯಕರಿಗೆ ಜನರಲ್ ಪವರ್ ಆಫ್ ಅಟಾರ್ನಿ ನೀಡಿದಂತಿದ್ದು, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು, ಇತ್ತೀಚೆಗಷ್ಟೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರ ಆಪ್ತಸಹಾಯಕನ ಕಿರುಕುಳಕ್ಕೆ ತಹಸೀಲ್ದಾರ್ ಕಚೇರಿಯ ಎಸ್‌ಡಿಎ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ವಿಧಾನ ಮಂಡಲದ ಸುವರ್ಣಸೌಧಕ್ಕೆ ನುಗ್ಗಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಮೇಲೆ ಗೂಂಡಾಗಿರಿ ಪ್ರದರ್ಶಿಸಿದ್ದ ಸುದ್ದಿ ಹಸಿಯಾಗಿರುವಾಗಲೇ ಇದೀಗ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರನ ಕಿರುಕುಳ ಹಾಗೂ ಬೆದರಿಕೆಯಿಂದ ತತ್ತರಿಸಿದ್ದ ಬೀದರ್‌ನ ಗುತ್ತಿಗೆದಾರ ಸಚಿನ್ ಸುದೀರ್ಘ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Breaking News: ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ, ರೈಲಿಗೆ ತಲೆಕೊಟ್ಟು ಜೀವ ಬಿಟ್ಟ ಗುತ್ತಿಗೆದಾರ!
ನನ್ನ ಕುಗ್ಗಿಸುವ ಬಿಜೆಪಿ ಯತ್ನ ಫಲ ನೀಡಲ್ಲ
ಬೀದರ್: ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ (28) ಸಾವು ದುರದೃಷ್ಟಕರ ವಾದುದು. ಸಚಿನ್ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿದ್ದಾರೆ.
ಸಚಿನ್ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, ಆರೋಪಿಗಳ ಹೇಳಿಕೆಗಳು ಒಂದು ಬಗೆಯಲ್ಲಿವೆ, ಸಚಿನ್ ಬರೆದಿದ್ದೆನ್ನಲಾಗಿರುವ ಡೆತ್‌ನೋಟ್‌ನಲ್ಲಿ ಇನ್ನೊಂದು ಬಗೆಯ ವಿಷಯ ಕಂಡು ಬರುತ್ತವೆ. ಮಿಥ್ಯಾರೋಪ ಮಾಡುವುದು ಬಿಜೆಪಿಯವರ ಹಳೆಯ ಅಭ್ಯಾಸ, ಈ ಹಿಂದೆಯೂ ನನ್ನ ಮೇಲೆ ನಿರಾಧರ ಆರೋಪ ಮಾಡಿದ್ದರು, ಈಗಲೂ ಮಾಡುತ್ತಿದ್ದಾರೆ, ಮುಂದೆಯೂ ಮಾಡುತ್ತಿರುತ್ತಾರೆ. ಆದರೆ ಆಧಾರ ರಹಿತ ಆರೋಪಗಳಿಂದ ನನ್ನನ್ನು ಕುಗ್ಗಿಸುವ ಬಿಜೆಪಿ ಪ್ರಯತ್ನ ಯಶಸ್ವಿಯಾಗಲ್ಲ ಎಂದಿದ್ದಾರೆ.