ಸರ್ಕಾರದ ವಿರುದ್ಧ ಬಿಜೆಪಿ ಬಂಡೇಳಲು ತಯಾರಿ ಮಾಡಿಕೊಂಡಿದೆ. ಈಗಾಗಲೇ ಕಬ್ಬು ಪ್ರತಿಭಟನೆಯಲ್ಲಿ ನಿರತರಾಗಿರುವ ಕಬ್ಬು ಬೆಳೆಗಾರರ ಸಮಸ್ಯೆ ಸೇರಿದಂತೆ ವಿವಿಧ ರೀತಿಯ ಸಮಸ್ಯೆಗಳನ್ನು ಪರಿಹರಿಸುವಂತೆ ಪ್ರತಿಭಟನೆಗೆ ಇಳಿಯುತ್ತಿದೆ. 

ಬೆಂಗಳೂರು :  ರೈತರ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಬಿಜೆಪಿ ವತಿಯಿಂದ ಬುಧವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ.

ಮಂಗಳವಾರ ಸಂಜೆ ನಡೆದ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದ್ದು, ಬೆಂಗಳೂರಿನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಖುದ್ದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ.

ಅಲ್ಲದೆ, ರೈತರ ಸಾಲಮನ್ನಾದಲ್ಲಿ ವಿಫಲವಾಗಿದೆ ಎಂಬ ಆರೋಪವೂ ಸೇರಿದಂತೆ ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸುವಲ್ಲಿನ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಬೆಳಗಾವಿ ಅಧಿವೇಶನದ ಮೊದಲ ದಿನವಾದ ಡಿ.10ರಂದು ಸುವರ್ಣ ವಿಧಾನಸೌಧದ ಮುಂಭಾಗ ಬೃಹತ್‌ ರಾರ‍ಯಲಿ ನಡೆಸಲು ತೀರ್ಮಾನಿಸಲಾಗಿದೆ.

ಕಬ್ಬು ಬೆಳೆಗಾರರೂ ಸೇರಿದಂತೆ ರೈತರ ಸಮಸ್ಯೆಗಳ ಕುರಿತು ಕೋರ್‌ ಕಮಿಟಿ ಸಭೆಯಲ್ಲಿ ಸುದೀರ್ಘವಾಗಿ ಸಮಾಲೋಚನೆ ನಡೆಸಿ ಬೆಳಗಾವಿಯ ಅಧಿವೇಶನದಲ್ಲಿ ರೈತರ ಸಮಸ್ಯೆಗಳನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ.