ಕಲಬುರಗಿ ಜಿಲ್ಲೆಯ ಸೇಡಂ ತಹಶೀಲ್ದಾರ್ ಕಚೇರಿಗೆ ಅನಾಮಧೇಯ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ. ಆತಂಕ ಸೃಷ್ಟಿಯಾಗಿತ್ತು. ತಕ್ಷಣ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಭೇಟಿ ನೀಡಿ ತಪಾಸಣೆ ನಡೆಸಿದಾಗ, ಇದು ಹುಸಿ ಬೆದರಿಕೆ ಎಂಬುದು ದೃಢಪಟ್ಟಿದೆ. ಈ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಕಲಬುರಗಿ(ಜ.4): ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳನ್ನೇ ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಹಾಕುವ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ಇದೀಗ ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ತಹಶೀಲ್ದಾರ್ ಕಚೇರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾನೆ. ಕಳೆದ ತಿಂಗಳು ಡಿಸೆಂಬರ್ 22ರಂದೇ ಈ ಇ-ಮೇಲ್ ಬಂದಿದ್ದರೂ, ತಹಶೀಲ್ದಾರರು ಇಂದು (ಜ.6) ಇದನ್ನು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸಿಬ್ಬಂದಿ ಹೊರಕ್ಕೆ: ಕಚೇರಿಯಲ್ಲಿ ತೀವ್ರ ತಪಾಸಣೆ
ಬಾಂಬ್ ಬೆದರಿಕೆ ಬಂದ ವಿಷಯ ತಿಳಿಯುತ್ತಿದ್ದಂತೆ ಕಚೇರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಕಚೇರಿಯಲ್ಲಿದ್ದ ಎಲ್ಲಾ ಸಿಬ್ಬಂದಿ ಮತ್ತು ಸಾರ್ವಜನಿಕರನ್ನು ತಕ್ಷಣವೇ ಹೊರಕ್ಕೆ ಕಳುಹಿಸಲಾಯಿತು. ಸ್ಥಳಕ್ಕೆ ಧಾವಿಸಿದ ಬಾಂಬ್ ಪತ್ತೆ ದಳ (BDDS), ಶ್ವಾನ ದಳ ಮತ್ತು ಸ್ಥಳೀಯ ಪೊಲೀಸರು ಕಚೇರಿಯ ಮೂಲೆ ಮೂಲೆಯನ್ನೂ ಜಾಲಾಡಿದರು. ಫೈಲ್ ಪ್ಯಾಕ್‌ಗಳು, ಕಪಾಟುಗಳು ಹಾಗೂ ಕಚೇರಿಯ ಆವರಣವನ್ನು ಸಂಪೂರ್ಣವಾಗಿ ಪರಿಶೀಲಿಸಲಾಯಿತು.
ಕೊನೆಗೂ ನಿಟ್ಟುಸಿರು ಬಿಟ್ಟ ಅಧಿಕಾರಿಗಳು: ಇದು 'ಹುಸಿ' ಬೆದರಿಕೆ
ಸುಮಾರು ಗಂಟೆಗಳ ಕಾಲ ನಡೆದ ತೀವ್ರ ತಪಾಸಣೆಯ ನಂತರ ಪೊಲೀಸರು ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ಖಚಿತಪಡಿಸಿದರು. ಇದರಿಂದಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಟ್ಟುಸಿರು ಬಿಡುವಂತಾಯಿತು. ಪದೇಪದೆ ಸರ್ಕಾರಿ ಕಚೇರಿಗಳನ್ನು ಗುರಿಯಾಗಿಸಿಕೊಂಡು ಇಂತಹ ಇ-ಮೇಲ್ ಕಳುಹಿಸಿ ಸಾರ್ವಜನಿಕ ಶಾಂತಿಗೆ ಭಂಗ ತರುತ್ತಿರುವ ಆಗಂತುಕರು ಯಾರು ಎಂಬ ಪ್ರಶ್ನೆ ಈಗ ಮೂಡಿದೆ.
ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಸೇಡಂ ತಹಶೀಲ್ದಾರರು ಪೊಲೀಸರಿಗೆ ಅಧಿಕೃತವಾಗಿ ದೂರು ನೀಡಿದ್ದಾರೆ. ದೂರಿನ ಅನ್ವಯ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇ-ಮೇಲ್ ಬಂದ ಮೂಲವನ್ನು ಪತ್ತೆಹಚ್ಚಲು ಸೈಬರ್ ಕ್ರೈಂ ಪೊಲೀಸರ ನೆರವು ಪಡೆಯಲಾಗುತ್ತಿದೆ. ರಾಜ್ಯಾದ್ಯಂತ ಹರಡುತ್ತಿರುವ ಈ 'ಇ-ಮೇಲ್ ಬಾಂಬ್' ಜಾಲದ ಹಿಂದೆ ಯಾರಿದ್ದಾರೆ ಎಂಬುದು ತನಿಖೆಯಿಂದ ತಿಳಿಯಬೇಕಿದೆ.


