ನಾನು ಇಟ್ಟ ಗುರಿ, ಮುಂದಿಟ್ಟ ಹೆಜ್ಜೆ ಯಾವತ್ತೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಯಚೂರಿನಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿ, ತಮ್ಮ ಗುರಿ ಮತ್ತು ಮುಂದಿಟ್ಟ ಹೆಜ್ಜೆಗಳಿಂದ ಹಿಂದೆ ಸರಿಯುವುದಿಲ್ಲ ಎಂದು ಅಬ್ಬರಿಸಿದರು. ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುತ್ತಿರುವುದಾಗಿ ತಿಳಿಸಿದರು.

ರಾಯಚೂರು (ಜ.19): ನಾನು ಇಟ್ಟ ಗುರಿ, ಮುಂದಿಟ್ಟ ಹೆಜ್ಜೆ ಯಾವತ್ತೂ ಹಿಂದೆ ಸರಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅಬ್ಬರಿಸಿದರು.
ಇಂದು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಬಿಜೆಪಿ ಮಾಜಿ ಸಚಿವ ಕೆ ಶಿವನಗೌಡ ನಾಯಕರಿಂದ ಆಯೋಜಿಸಲಾಗಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ವಿಜಯೇಂದ್ರ ಅವರು, ನಾನು ರೈತ ನಾಯಕ ಯಡಿಯೂರಪ್ಪನ ಮಗನಾಗಿ ಹೇಳುತ್ತೇನೆ ಶಿಕಾರಿಪುರ ತಾಲೂಕಿಗೆ ಮಾತ್ರ ಸೀಮಿತವಾಗಿಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ ಎಂದರು.
ಇದನ್ನೂ ಓದಿ: ವಿಜಯೇಂದ್ರ ಮುಂದಿನ ಸಿಎಂ ಆಗೋದನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ: : ಶಿವನಗೌಡ ನಾಯಕ ಭವಿಷ್ಯ
ಗುರು-ಹಿರಿಯರ ಆಶಿರ್ವಾದದಿಂದ ಮುನ್ನಡೆಯುತ್ತೇನೆ. ಭಗವಂತನ ಕೃಪೆ, ಹರಗುರು ಚರಮೂರ್ತಿಗಳ ಆಶಿರ್ವಾದ ನನ್ನ ಮೇಲಿದೆ. ಮುಂದೆ ಭಗವಂತ ಶಕ್ತಿ ಕೊಟ್ಟಾಗ ಜಿಲ್ಲೆಯ ನೀರಾವರಿ ಯೋಜನೆಗಳು, ಯುವಕರಿಗೆ ಉದ್ಯೋಗ ಕೊಡುವ ಕೆಲಸ ಮಾಡುತ್ತೇನೆ. ಈಗಲೂ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿದೆ. ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ಭಗವಂತ ಶಕ್ತಿ ಕೊಟ್ಟರೆ ಈ ಭಾಗದ ಜನರ ಸರ್ವಾಂಗೀಣ ಅಭಿವೃದ್ಧಿಗೆ ನಾನು ಶ್ರಮವಹಿಸಿ ಕೆಲಸ ಮಾಡುತ್ತೇನೆ. ಜಿಲ್ಲೆಯಲ್ಲಿ ಏಮ್ಸ್ ಬೇಡಿಕೆ ಇದೆ ಅದಕ್ಕಾಗಿ ನಿರಂತರ ಹೋರಾಟ ನಡೆದಿದೆ. ನೀರಾವರಿ ಯೋಜನೆ ಬಗ್ಗೆಯೂ ಕೇಳುತ್ತಿದ್ದಾರೆ. ಈ ವಿಚಾರವಾಗಿ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.