Asianet Suvarna News Asianet Suvarna News

ಕನ್ನಡಿಗರ ಕತ್ತು ಹಿಚುಕುವುದಕ್ಕೆಂದೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಂತಿದೆ: ಹೆಚ್ಡಿಕೆ

ನಾವು ಕುಡಿಯಲು ನೀರು ಕೇಳುತ್ತಿದ್ದೇವೆ, ತಮಿಳುನಾಡು ಅಕ್ರಮವಾಗಿ ಮಿತಿಮೀರಿದ ವಿಸ್ತೀರ್ಣದಲ್ಲಿ ಬೆಳೆದ ಕುರುವೈ ಬೆಳೆಗೆ ನೀರು ಕೇಳುತ್ತಿದೆ. ಅಲ್ಲಿ ಸ್ವಾರ್ಥ ಇದೆ, ಇಲ್ಲಿ ಜನರ ಬದುಕಿದೆ. ಮಾನವೀಯ ನ್ಯಾಯಕ್ಕೆ ವಿರುದ್ಧವಾದ ತಮಿಳುನಾಡು ನಡೆಯನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ

Cauvery water dispute hd kumaraswamy tweet agains congress government at bengaluru rav
Author
First Published Sep 26, 2023, 8:34 PM IST

ಬೆಂಗಳೂರು (ಸೆ.26): ಕಾವೇರಿ ಜಲವಿವಾದ ವಿಚಾರದಲ್ಲಿ ಕರ್ನಾಟಕಕ್ಕೆ ಪದೇಪದೆ ಅನ್ಯಾಯವಾಗುತ್ತಿದೆ.  ತಮಿಳನಾಡಿಗೆ ಇನ್ನೂ 18 ದಿನಗಳ ಕಾಲ ಪ್ರತಿನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ಇಂದು ಆದೇಶ ನೀಡುವ ಮೂಲಕ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕನ್ನಡಿಗರಿಗೆ ಮತ್ತೊಂದು ಆಘಾತ ನೀಡಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ  ಅವರು ಟ್ವೀಟ್ ಮಾಡಿದ್ದು, ಇದು ನಿಜಕ್ಕೂ ಆಘಾತಕಾರಿ, ಕಾವೇರಿ ಕನ್ನಡಿಗರ ಪಾಲಿಗೆ ಮರಣಶಾಸನ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕಾವೇರಿ ಕೊಳ್ಳ ಮತ್ತು ಬೆಂಗಳೂರು ನಗರದ ಜನರ ಕತ್ತು ಹಿಚುಕುವುದಕ್ಕೆಂದೇ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದೆಯೇನೋ ಎಂದು ಬಹಳ ನೋವಿನಿಂದ ಹೇಳಲೇಬೇಕಾಗಿದೆ ಎಂದಿರುವ ಎಚ್‌ಡಿ ಕುಮಾರಸ್ವಾಮಿಯವರು, ಕೆಆರ್ ಎಸ್ ಜಲಾಶಯಕ್ಕೆ ನಿತ್ಯವೂ 10,000 ಕ್ಯೂಸೆಕ್ ಒಳಹರಿವು ಇದೆ ಎನ್ನುತ್ತಾರೆ ಜಲ ಸಂಪನ್ಮೂಲ ಸಚಿವರು. ಇದಕ್ಕೆ ತದ್ವಿರುದ್ಧವಾಗಿ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು "ನಮ್ಮಲ್ಲಿ ನೀರೇ ಇಲ್ಲ" ಎಂಬ ಮಾಹಿತಿ ನೀಡುತ್ತಾರೆ. ಇನ್ನೊಂದೆಡೆ ಹಿರಿಯ ಅಧಿಕಾರಿಯೊಬ್ಬರು "ಈ ಆದೇಶದಿಂದ ರಾಜ್ಯಕ್ಕೆ 2.5 ಟಿಎಂಸಿ ನೀರು ಉಳಿತಾಯವಾಗಿದೆ" ಎನ್ನುತ್ತಾರೆ. 'ಎತ್ತು ಏರಿಗೆ, ಕೋಣ ನೀರಿಗೆ' ಎನ್ನುವಂತಿದೆ ಜಲ ಸಂಪನ್ಮೂಲ ಇಲಾಖೆ ಮತ್ತು ಸರಕಾರದ ಪರಿಸ್ಥಿತಿ. ಹೆಜ್ಜೆಹೆಜ್ಜೆಗೂ ಅನರ್ಥಗಳನ್ನೇ ಮಾಡುತ್ತಿರುವ ಈ ಸರಕಾರದ ವೈಫಲ್ಯದ ಲಾಭವನ್ನು ತಮಿಳುನಾಡು ಅತ್ಯಂತ ಜಾಣತನದಿಂದ ಪಡೆದುಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.

ಕೆಆರ್‌ಎಸ್‌ ಜಲಾಶಯ ಪರಿಶೀಲಿಸಿ ಕೇಂದ್ರವೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿ: ಮಾಜಿ ಪ್ರಧಾನಿ ದೇವೇಗೌಡರ ಆಗ್ರಹ

ನಾವು ಕುಡಿಯಲು ನೀರು ಕೇಳುತ್ತಿದ್ದೇವೆ, ತಮಿಳುನಾಡು ಅಕ್ರಮವಾಗಿ ಮಿತಿಮೀರಿದ ವಿಸ್ತೀರ್ಣದಲ್ಲಿ ಬೆಳೆದ ಕುರುವೈ ಬೆಳೆಗೆ ನೀರು ಕೇಳುತ್ತಿದೆ. ಅಲ್ಲಿ ಸ್ವಾರ್ಥ ಇದೆ, ಇಲ್ಲಿ ಜನರ ಬದುಕಿದೆ. ಮಾನವೀಯ ನ್ಯಾಯಕ್ಕೆ ವಿರುದ್ಧವಾದ ತಮಿಳುನಾಡು ನಡೆಯನ್ನು ಒಪ್ಪಲು ಸಾಧ್ಯವೇ ಇಲ್ಲ. ಆ ರಾಜ್ಯದ ಇಂಥ ಮನಃಸ್ಥಿತಿಯ ವಿರುದ್ಧ ಪ್ರಬಲ ಹೋರಾಟ ಮಾಡುವ ಇಚ್ಛಾಶಕ್ತಿ ಈ ಸರಕಾರಕ್ಕೆ ಇಲ್ಲದಾಗಿದೆ. ಕೇವಲ ಪಾಲುದಾರ ಪಕ್ಷ ಡಿಎಂಕೆಯ ಯೋಗಕ್ಷೇಮವನ್ನೇ ಕೈ ಸರಕಾರ ನೋಡುತ್ತಾ, ಕರ್ನಾಟಕದ ಹಿತವನ್ನು ಸಂಪೂರ್ಣ ಬಲಿ ಕೊಟ್ಟಿದೆ. ಕನ್ನಡಿಗರ ಮೇಲೆ 'ಬಂಡೆ' ಎಳೆದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರೂ ಸಮಾನರು. ಈಗಾಗಲೇ ಕಾವೇರಿ ನೀರು ಹಂಚಿಕೆಯನ್ನು ನ್ಯಾಯಾಧಿಕರಣ ಅಖೈರುಗೊಳಿಸಿದ್ದು, ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ, ಸಂಕಷ್ಟ ಕಾಲದಲ್ಲಿ ಪರಿಹಾರವೇನು? ಮಾತೆತ್ತಿದರೆ ನೀರು ಬಿಡಿ ಎಂದು ಆದೇಶಿಸುವ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) & ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಈ ಕೂಡಲೇ 'ಸಂಕಷ್ಟ ಹಂಚಿಕೆ ಸೂತ್ರ'ವನ್ನು ರೂಪಿಸಲೇಬೇಕು. ಆ ನಿಟ್ಟಿನಲ್ಲಿ ಸರಕಾರ ಒತ್ತಡ ಹೇರಿ, ಆ ಸೂತ್ರ ರೂಪಿಸದ ಹೊರತು ತಮಿಳುನಾಡಿಗೆ ನೀರು ಹರಿಸುವ ಪ್ರಶ್ನೆಯೇ ಇಲ್ಲವೆಂದು ಕಡ್ಡಿ ತುಂಡು ಮಾಡಿದಂತೆ ಸ್ಪಷ್ಟವಾಗಿ ಹೇಳಲೇಬೇಕು. ಯಾವುದೇ ಕಾರಣಕ್ಕೂ ಈಗ ನೀರು ಹರಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

ಡಿಕೆಶಿ ಮುಚ್ಚಿಟ್ಟಿರುವ ಸತ್ಯ ಏನು? ಬಹಿರಂಗಪಡಿಸಲಿ: ಎಚ್‌ಡಿಕೆ ಸವಾಲು

Follow Us:
Download App:
  • android
  • ios