ಅಕ್ರಮವಾಗಿ ವನ್ಯಜೀವಿ ಉತ್ಪನ್ನಗಳನ್ನು ಇಟ್ಟುಕೊಂಡಿರುವವರು ಅವುಗಳನ್ನು ಸರ್ಕಾರಕ್ಕೆ ಮರಳಿಸಲು ಕೊನೆಯ ಅವಕಾಶ ನೀಡುವ ಕಾನೂನು ಸಾಧ್ಯತೆಗಳನ್ನು ಪರಾಮರ್ಶಿಸಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರು (ಅ.27): ಹುಲಿ ಉಗುರಿನ ಲಾಕೆಟ್ ಧರಿಸಿರುವವರ ವಿರುದ್ಧ ದೂರುಗಳು ಬರುತ್ತಿದ್ದು, ಬಹುತೇಕರಿಗೆ ಇದು ಅಪರಾಧ ಎಂಬ ಅರಿವಿಲ್ಲ ಎಂಬುದು ಗೊತ್ತಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಕ್ರಮವಾಗಿ ವನ್ಯಜೀವಿ ಉತ್ಪನ್ನಗಳನ್ನು ಇಟ್ಟುಕೊಂಡಿರುವವರು ಅವುಗಳನ್ನು ಸರ್ಕಾರಕ್ಕೆ ಮರಳಿಸಲು ಕೊನೆಯ ಅವಕಾಶ ನೀಡುವ ಕಾನೂನು ಸಾಧ್ಯತೆಗಳನ್ನು ಪರಾಮರ್ಶಿಸಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಗುರುವಾರ ವಿಕಾಸಸೌಧದಲ್ಲಿ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಣ್ಯ ಇಲಾಖೆಯ ಕಾನೂನಿನ ಬಗ್ಗೆ ಮಾಹಿತಿ ಕೊರತೆ ಇರುವ ಕಾರಣ, ಕಾಯ್ದೆ ಸೇರಿದಂತೆ ಇತರೆ ಕಾನೂನಿನ ಉಲ್ಲಂಘನೆ ಸಾರ್ವಜನಿಕ ವಲಯದಲ್ಲಿ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಅರಿವು ಮೂಡಿಸುವ ವ್ಯಾಪಕ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕ್ರಮವಹಿಸಲಾಗುವುದು ಎಂದು ಹೇಳಿದರು.
ನನಗೆ 61 ಮುಂದೆ 100 ಆದರು ನನ್ನ ಅಮ್ಮನೇ ನನ್ನ ದೇವರು: ಹುಲಿ ಉಗುರು ಸಂಕಟ ಬಿಚ್ಚಿಟ್ಟ ನಟ ಜಗ್ಗೇಶ್!
ತಮ್ಮ ಪೂರ್ವಜರು ಹೊಂದಿದ್ದ ವನ್ಯಜೀವಿ ಅಂಗಾಂಗದಿಂದ ಮಾಡಿದ ಟ್ರೋಫಿ, ಫಲಕ, ಪೆಂಡೆಂಟ್ ಸೇರಿದಂತೆ ಯಾವುದೇ ಉತ್ಪನ್ನಗಳನ್ನು ಅರಣ್ಯ ಇಲಾಖೆಯಿಂದ ದೃಢೀಕರಿಸಿಕೊಂಡು ಮಾಲಿಕತ್ವದ ಹಕ್ಕು ಪಡೆದುಕೊಳ್ಳಲು 2003ರ ವರೆಗೆ ಹಲವು ಅವಕಾಶ ನೀಡಲಾಗಿತ್ತು. ಹಲವರು ತಮ್ಮ ಬಳಿ ಇದ್ದ ವನ್ಯಜೀವಿ ಉತ್ಪನ್ನಗಳಿಗೆ ಮಾಲಿಕತ್ವದ ಹಕ್ಕು ಪಡೆದಿದ್ದಾರೆ. ಇನ್ನೂ ಅನೇಕರು ದೃಢೀಕರಣ ಮತ್ತು ಪ್ರಮಾಣಪತ್ರ ಪಡೆದಿಲ್ಲ ಎಂದರು.
ಗ್ರಾಮೀಣ ಪ್ರದೇಶದ ಕೆಲವರ ಮನೆಗಳಲ್ಲಿ ಜಿಂಕೆ ಚರ್ಮ, ಆನೆ ದಂತದಿಂದ ಮಾಡಿದ ಕಲಾಕೃತಿಗಳು, ಜಿಂಕೆ ಮತ್ತು ಸಾರಂಗದ ಕೊಂಬು ಇತ್ಯಾದಿಗಳನ್ನು ಇಟ್ಟುಕೊಂಡಿರುತ್ತಾರೆ. ಇದು ಅಪರಾಧ ಎಂಬುದೂ ಅವರಿಗೆ ತಿಳಿದಿಲ್ಲ. ವರ್ತೂರು ಸಂತೋಷ ಪ್ರಕರಣ ವರದಿಯಾದ ಬಳಿಕ, ವನ್ಯಜೀವಿ ಉತ್ಪನ್ನಗಳ ಅಕ್ರಮ ದಾಸ್ತಾನಿನ ಬಗ್ಗೆ ಹೆಚ್ಚಾಗಿ ದೂರುಗಳು ಬರುತ್ತಿವೆ. ಕಾನೂನಿನ ಅರಿವಿಲ್ಲದವರಿಗೆ ಆಗುವ ಸಮಸ್ಯೆಯನ್ನು ತಪ್ಪಿಸಲು ಒಂದು ಬಾರಿ ಕೊನೆಯದಾಗಿ ಇಂತಹ ಅಕ್ರಮ ಸಂಗ್ರಹಣೆ ದಾಸ್ತಾನಿನ ಬಗ್ಗೆ ಘೋಷಣೆ ಮಾಡಿಕೊಳ್ಳಲು ಮತ್ತು ಸರ್ಕಾರಕ್ಕೆ ಮರಳಿಸಲು ಅವಕಾಶ ನೀಡುವ ಬಗ್ಗೆ ಪರಾಮರ್ಶಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸ್ಪರ್ಧಿಯಾದ ವರ್ತೂರು ಸಂತೋಷ ಅವರ ಹುಲಿ ಉಗುರು ಧಾರಣೆಯ ಪ್ರಕರಣದ ನಂತರ ಇಲ್ಲಿಯವರೆಗೆ 8 ದೂರುಗಳು ಸಾರ್ವಜನಿಕರ ಕಡೆಯಿಂದ ಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನಾ ಕಾರ್ಯ ನಡೆಯುತ್ತಿದ್ದು, ಕಾನೂನಿನ ಪ್ರಕಾರ ಕ್ರಮ ವಹಿಸಲಾಗುವುದು ಎಂದರು.
ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ: ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರಿಗೂ ಕಾನೂನು ಸಮಾನವಾಗಿರುತ್ತದೆ. ಗಣ್ಯಮಾನ್ಯರು, ಸೆಲಿಬ್ರೆಟಿಗಳ ಮನೆಗೆ ಪೊಲೀಸರು ಹೋಗಿದ್ದಾರೆ. ನಟ ಜಗ್ಗೇಶ್ 20-30 ವರ್ಷದ ಹಿಂದೆ ಉಗುರನ್ನು ತಮ್ಮ ತಾಯಿ ಕೊಟ್ಟಿದ್ದರು ಎಂದಿದ್ದಾರೆ. ಈಗ ಅದನ್ನು ಎಫ್ಎಸ್ಎಲ್‌ಗೆ ಕಳುಹಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಗಣ್ಯರೂ ಸೇರಿದಂತೆ ಹಲವರಿಗೆ ನೋಟಿಸ್ ನೀಡಲಾಗಿದೆ. ಅಧಿಕಾರಿಗಳು ಕಾನೂನು ರೀತ್ಯ ಮತ್ತು ಆಯಾ ಸಂದರ್ಭಕ್ಕೆ ಅನುಗುಣವಾಗಿ ತಮ್ಮ ವಿವೇಚನಾಧಿಕಾರ ಬಳಸಿ ಕ್ರಮ ಜರುಗಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ನಕಲಿ ಲಾಕೆಟ್ ಕೂಡ ಧರಿಸದಂತೆ ಮನವಿ: ಚಿತ್ರನಟರು, ಗಣ್ಯರು ನಕಲಿ ಹುಲಿ ಉಗುರಿನ ಲಾಕೆಟ್ ಕೂಡ ಧರಿಸಿದರೂ ಇತರರಿಗೆ ಪ್ರೇರಣೆ ಸಿಗುತ್ತದೆ. ಅವರಿಗೆ ಸಾವಿರಾರು ಅಭಿಮಾನಿಗಳು ಇರುತ್ತಾರೆ. ಅವರು ಕೂಡ ತಮ್ಮ ನಾಯಕನಂತೆ ಹುಲಿ ಉಗುರಿನ ಲಾಕೆಟ್ ಧರಿಸಲು ಬಯಸುತ್ತಾರೆ. ಆಗ ಬೇಡಿಕೆ ಹೆಚ್ಚುತ್ತದೆ. ವನ್ಯಜೀವಿಗಳ ಹತ್ಯೆಯಾಗುತ್ತದೆ. ಇದಕ್ಕೆ ಪರೋಕ್ಷ ಕುಮ್ಮಕ್ಕು ನೀಡಿದಂತಾಗುತ್ತದೆ. ಹೀಗಾಗಿ ಸಾಮಾಜಿಕ ಬದ್ಧತೆಯ ದೃಷ್ಟಿಯಿಂದ ಗಣ್ಯರು, ನಟರು ನಕಲಿ ಪೆಂಡೆಂಟ್ ಕೂಡ ಧರಿಸಬಾರದು ಎಂದು ಮನವಿ ಮಾಡಿದರು. ಇದೇ ವೇಳೆ ತಮ್ಮಲ್ಲಿ ವನ್ಯಜೀವಿಯ ಯಾವುದೇ ಆಭರಣ ತಯಾರಿಸುವುದಿಲ್ಲ, ಮಾರಾಟ ಮಾಡುವುದಿಲ್ಲ. ಇದು ಶಿಕ್ಷಾರ್ಹ ಅಪರಾಧ ಎಂಬ ಫಲಕ ಹಾಕುವಂತೆ ಎಲ್ಲಾ ಚಿನ್ನಾಭರಣ ಮಳಿಗೆಗಳಿಗೆ ಸೂಚಿಸಲಾಗುವುದು ಎಂದರು.
ನಾಲ್ಕು ಸಾವಿರ ಹುದ್ದೆ ಖಾಲಿ: ಅರಣ್ಯ ಇಲಾಖೆಯಲ್ಲಿ ಸುಮಾರು ನಾಲ್ಕು ಸಾವಿರ ಹುದ್ದೆ ಖಾಲಿ ಇದ್ದು, ಈಗಾಗಲೇ ಹಣಕಾಸು ಇಲಾಖೆ 800 ಹುದ್ದೆ ಭರ್ತಿಗೆ ಅನುಮತಿ ನೀಡಿದೆ. ಶೀಘ್ರವೇ ಇದರ ಭರ್ತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದರು.
ಜೆಡಿಎಸ್ ಜೊತೆ ಮೈತ್ರಿಯಾದ್ರೆ ನಮ್ಮ ಹಕ್ಕು ಬಿಟ್ಟು ಕೊಡುವ ಸಂದರ್ಭ ಬರೋದಿಲ್ಲ: ಸಿ.ಟಿ.ರವಿ
ಅರಣ್ಯ ಕಾಯ್ದೆಯಡಿ ಇವೂ ಅಪರಾಧ
- ಅರಣ್ಯದಲ್ಲಿ ಸಸಿ, ಮರ ಕಡಿಯುವುದು, ಕೀಳುವುದು
- ಕಾಡು ಪ್ರಾಣಿಗಳ ಬೇಟೆ, ಅಂಗಾಂಗ ಶೇಖರಣೆ
- ಅನುಮತಿ ಇಲ್ಲದೆ ಅಭಯಾರಣ್ಯಗಳಿಗೆ ಪ್ರವೇಶ
- ಪ್ರವೇಶಿಸಿದರೂ ಆಯುಧ ಹೊಂದಿರುವುದು
- ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಮೀನುಗಾರಿಕೆ
