ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣದ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಚಿಕಿತ್ಸೆ ನಂತರ ಮಕ್ಕಳು ಚೇತರಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಶಾಲಾ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.
ಚಿಕ್ಕಮಗಳೂರು(ಆ.9): ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣದ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶುಕ್ರವಾರ ಕಲುಷಿತ ಆಹಾರ ಸೇವನೆಯಿಂದ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಶಾಲೆಯಲ್ಲಿ ಊಟ ಸೇವಿಸಿದ ಬಳಿಕ ಮಕ್ಕಳಿಗೆ ಫುಡ್ ಪಾಯ್ಸನಿಂಗ್ ಆಗಿರುವ ಶಂಕೆ ವ್ಯಕ್ತವಾಗಿದೆ.
ಅಸ್ವಸ್ಥರಾದ ಎಲ್ಲಾ ಮಕ್ಕಳನ್ನು ಚಿಕ್ಕಮಗಳೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಯ ನಂತರ ಅವರೆಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ನಿನ್ನೆ ವರಮಹಾಲಕ್ಷ್ಮಿ ಹಬ್ಬದ ರಜೆ ಹಿನ್ನಲೆ ಹಾಸ್ಟೆಲ್ ಸಿಬ್ಬಂದಿ ರಜೆಯ ಮೇಲೆ ತೆರಳಿದ್ದರು ಎನ್ನಲಾಗಿದೆ. ಇದರಿಂದ ಆಹಾರ ತಯಾರಿಕೆಯಲ್ಲಿ ಸೂಕ್ತ ನಿಗಾ ವಹಿಸದಿರುವುದೇ ಈ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲರು ಹಾಗೂ ವಾರ್ಡನ್ ಮೇಲೆ ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘಟನೆಗಳು ಆಗ್ರಹಿಸಿವೆ. ಜಿಲ್ಲಾ ಆಸ್ಪತ್ರೆಯ ವೈದ್ಯರು ಮಕ್ಕಳಿಗೆ ತಕ್ಷಣದ ಚಿಕಿತ್ಸೆ ಒದಗಿಸಿದ್ದು, ಮಕ್ಕಳು ಚೇತರಿಸಿಕೊಂಡಿದ್ದಾರೆ. ಆದರೆ, ಈ ಘಟನೆಯಿಂದ ವಸತಿ ಶಾಲೆಗಳಲ್ಲಿ ಆಹಾರದ ಗುಣಮಟ್ಟ ಮತ್ತು ಸುರಕ್ಷತೆಯ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ. ಜಿಲ್ಲಾಡಳಿತವು ಈ ಬಗ್ಗೆ ವಿಚಾರಣೆ ನಡೆಸಿ ನಿರ್ಲಕ್ಷ್ಯವಹಿಸಿದ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.
