ಇತ್ತೀಚೆಗಷ್ಟೇ ಬಿಜೆಪಿ ತೊರೆದು ಸಾಂಕೇತಿಕವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡರ್ ಅವರು ಮತ್ತೆ ಬಿಜೆಪಿಗೆ ವಾಪಸಾಗುವ ಸಾಧ್ಯತೆಯಿದೆ.
ಬೆಂಗಳೂರು (ನ.24) : ಇತ್ತೀಚೆಗಷ್ಟೇ ಬಿಜೆಪಿ ತೊರೆದು ಸಾಂಕೇತಿಕವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡರ್ ಅವರು ಮತ್ತೆ ಬಿಜೆಪಿಗೆ ವಾಪಸಾಗುವ ಸಾಧ್ಯತೆಯಿದೆ. ಗುರುವಾರ ದಿಢೀರನೆ ಬಿಜೆಪಿ ಕಚೇರಿಗೆ ಆಗಮಿಸಿದ ಅವರು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಮಾತುಕತೆ ನಡೆಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಂಬಂಧಿಯೂ ಆಗಿರುವ ಚಿಕ್ಕನಗೌಡರ್ ಅವರು ಇದೀಗ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ಪಕ್ಷಕ್ಕೆ ಮರಳುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರೇಶನ್ ಕಾರ್ಡಲ್ಲಿ ಹೆಸರಿರುವ ಒಡತಿಗೆ ಗೃಹಲಕ್ಷ್ಮಿ, ಅನ್ನಭಾಗ್ಯ ಹಣ: ಸಂಪುಟ ಸಭೆ ತೀರ್ಮಾನ
ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಂಬಂಧಿ ಎಸ್.ಐ. ಚಿಕ್ಕನಗೌಡರ ಅವರು ಭಾನುವಾರ ಕೇಸರಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದರು. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಕಾಂಗ್ರೆಸ್ ಸೇರಿದ್ದರು. ಚಿಕ್ಕನಗೌಡರ ಅವರೊಂದಿಗೆ ಶಿಗ್ಗಾವಿಯ ಬಿಜೆಪಿಯ ಕೆಲವು ಮುಖಂಡರು ಸಹ ಕಾಂಗ್ರೆಸ್ ಸೇರಿದ್ದರು.
ಪಕ್ಷ ತೊರೆಯುವುದು ವಾಪಸ್ ಬರುವುದು ಇದೇ ಮೊದಲೇನಲ್ಲ. ಈ ಹಿಂದೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಚುನಾವಣೆ ಬಳಿಕ ಸೈಲೆಂಟ್ ಆಗಿದ್ದ ಅವರು ಕಳೆದ ಕೆಲ ದಿನಗಳ ಹಿಂದೆ ತಾವು ಕಾಂಗ್ರೆಸ್ ಸೇರುವುದಾಗಿ ಬಹಿರಂಗವಾಗಿ ಹೇಳಿದ್ದರು. ಎರಡು ವಾರಗಳ ಹಿಂದಷ್ಟೇ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು. ಇದಕ್ಕೂ ಮುನ್ನ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
ಗೃಹಲಕ್ಷ್ಮೀ ಯೋಜನೆ: ನಾಡದೇವತೆ ಚಾಮುಂಡೇಶ್ವರಿಗೂ ಪ್ರತಿತಿಂಗಳ ₹2000 ನೀಡಲು ಸರ್ಕಾರ ಅಸ್ತು
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ(BS Yadiyurappa) ಅವರ ಸಂಬಂಧಿಯೂ ಆಗಿರುವ ಚಿಕ್ಕನಗೌಡರ, ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು. ಹಿಂದೆ ಯಡಿಯೂರಪ್ಪ ಕೆಜೆಪಿ ಹುಟ್ಟುಹಾಕಿದಾಗ ಬಿಜೆಪಿ ಬಿಟ್ಟು ಕೆಜೆಪಿಗೆ ತೆರಳಿದ್ದರು. ಬಳಿಕ ಯಡಿಯೂರಪ್ಪ ಜತೆಗೆ ಮರಳಿ ಬಿಜೆಪಿ ಸೇರಿದ್ದರು. ಮತ್ತೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಇದೀಗ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮತ್ತೆ ಬಿಜೆಪಿ ಸೇರುವ ಸಾಧ್ಯತೆಯಿದೆ ಮೂಲಗಳು ತಿಳಿಸಿವೆ.
