ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಕೋರ್ಟ್, ಮುರುಘಾ ಶ್ರೀಗಳಿಗೆ ಮತ್ತೆ ನಿರಾಸೆ
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ನಿರೀಕ್ಷೆಯಲ್ಲಿರುವ ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಮತ್ತೆ ನಿರಾಸೆಯಾಗಿದೆ.
ಚಿತ್ರದುರ್ಗ, ಸೆಪ್ಟೆಂಬರ್. 19): ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಫೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಚಿತ್ರದುರ್ಗದ ಮುರೂಘಾ ಶರಣರ ಜಾಮೀನು ಅರ್ಜಿಯನ್ನು ಕೋರ್ಟ್ ಮತ್ತೆ ಮುಂದೂಡಿದೆ.
ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಿ ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ನಿರೀಕ್ಷೆಯಲ್ಲಿರುವ ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಮತ್ತೆ ನಿರಾಸೆಯಾಗಿದೆ.
ಕಳೆದ ಹಲವು ದಿನಗಳಿಂದ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಕೋರ್ಟ್ ಪದೇ-ಪದೇ ಮುಂದೂಡುತ್ತಲೇ ಇದೆ. ಇಂದು(ಸೋಮವಾರ) ಬೆಳಗ್ಗೆ ಶ್ರೀಗಳ ಅರ್ಜಿ ವಿಚಾರಯನ್ನು ಕೋರ್ಟ್ ಮಧ್ಯಾಹ್ನಕ್ಕೆ ಮುಂದೂಡಿತ್ತು. ಇದರಿಂದ ಇವತ್ತು ಅವರಿಗೆ ಬೇಲಾ? ಜೈಲಾ ಎನ್ನುವ ತೀರ್ಮಾನ ಕೋರ್ಟ್‌ನಿಂದ ಹೊರಬೀಳಲಿದೆ ಎನ್ನುವುದಿತ್ತು. ಇದರಿಂದ ಅವರ ಭಕ್ತರ ಚಿತ್ತ ಕೋರ್ಟ್‌ನತ್ತ ನೆಟ್ಟಿತ್ತು. ಆದ್ರೆ, ಇದೀಗ ಕೋರ್ಟ್ ಮತ್ತೆ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿದೆ.
ಮುರುಘಾ ಶ್ರೀ ಪ್ರಕರಣದಲ್ಲಿ ಬಿಜೆಪಿ ಶಾಸಕ ಎಂಟ್ರಿ, ಹೈಕೋರ್ಟ್ ಜಡ್ಜ್‌ಗೆ ಪತ್ರ ಬರೆದ ಯತ್ನಾಳ್!
ಮಠದ ಹಾಸ್ಟೆಲ್ನಲ್ಲಿರುವ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಇದರಲ್ಲಿ ಶ್ರೀಗಳು ಎ1 ಆರೋಪಿಯಾಗಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ನಿರೀಕ್ಷಣ ಜಾಮೀನು ಕೋರಿ ಅರ್ಜಿಯನ್ನೂ ಸಲ್ಲಿಸಿದ್ದರು. ಈಗಾಗಲೇ ಶ್ರೀಗಳ ಪರ ವಕೀಲರ ವಾದ ಮಂಡಿಸುವುದು ಮುಗಿದಿದೆ. ಈಗ ಸರ್ಕಾರಿ ಪರ ವಕೀಲರ ವಾದ ನಡೆದಿದೆ.
ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗೆ ಪತ್ರ ಯತ್ನಾಳ್ ಪತ್ರ
ಚಿತ್ರದುರ್ಗದ ಮುರುಘಾ ಮಠದ ಶರಣರು ಲೈಂಗಿಕ ಕಿರುಕುಳ ಆರೋಪದ ಮೇಲೆ ಜೈಲುಪಾಲಾಗಿದ್ದಾರೆ. ಈ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದೆ. ಇನ್ನ ಈ ಕೇಸ್‌ನಲ್ಲಿ ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಂಟ್ರಿ ಕೊಟ್ಟಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗೆ ಪತ್ರ ಬರೆದಿದ್ದಾರೆ.
ಶಿವಮೂರ್ತಿ ಮರುಘಾ ಶರಣರನ್ನು ಗದ್ದುಗೆಯಿಂದ ಕೆಳಗಿಳಿಸಬೇಕು. ಚಿತ್ರದುರ್ಗದ ಮುರುಘಾ ಮಠದ ಆಡಳಿತಾಧಿಕಾರಿ ಮಠವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ.
ಶರಣರು ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ
ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಶ್ರೀಗಳಿಗೆ ಇಂದು ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದರು. ಆದ್ರೆ, ನ್ಯಾಯಾಲಯ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಏನಿದು ಪ್ರಕರಣ?:
ಕಳೆದ ವಾರ ಮುರುಘಾ ಶರಣರ ವಿರುದ್ಧ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಮಠದ ಶಾಲೆಯಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯಿರಿಂದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂಬ ಕಾರಣ ನೀಡಿ ಮೈಸೂರಿನಿಂದ ಚಿತ್ರದುರ್ಗಕ್ಕೆ ಪ್ರಕರಣದ ವಿಚಾರಣೆಯನ್ನು ಹಸ್ತಾಂತರಿಸಲಾಗಿತ್ತು. ಅದಾದ ನಂತರ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆದ ಬಳಿಕ ಮುರುಘಾ ಶರಣರನ್ನು ಗುರುವಾರ ತಡರಾತ್ರಿ ಪೊಲೀಸರು ಬಂಧಿಸಿದ್ದರು. ಪ್ರಕರಣ ದಾಖಲಾಗಿ ವಾರ ಕಳೆದರೂ ಬಂಧನವಾಗದಿರುವುದಕ್ಕೆ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಹ ಶ್ರೀಗಳ ಪರ ಹೇಳಿಕೆ ನೀಡಿದ್ದರು. ಇದಕ್ಕೂ ಆಕ್ರೋಶ ಕೇಳಿ ಬಂದಿತ್ತು. ಸದ್ಯ ಆಸ್ಪತ್ರೆಯಲ್ಲಿರುವ ಶರಣರಿಗೆ 14 ದಿನಗಳ ನ್ಯಾಯಾಂಗ ಬಂಧನವಾಗಿದೆ.