ಜೆನ್‌ಝೀ ಹೋರಾಟದ ಪರೋಕ್ಷ ಪರಿಣಾಮವೋ ಎಂಬಂತೆ ಕೆಪಿಎಸ್ಸಿ ಹಾಗೂ ಕೆಇಎ ನಡೆಸುವ ನೇಮಕಾತಿ ಪರೀಕ್ಷೆ ಸಮರ್ಪಕತೆ ಪರಿಶೀಲನೆಗಾಗಿ ರಾಜ್ಯ ಸರ್ಕಾರ ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿದೆ.
ಬೆಂಗಳೂರು (ಆ.1) ಜೆನ್‌ಝೀ ಹೋರಾಟ(Gen-z protest)ದ ಪರೋಕ್ಷ ಪರಿಣಾಮವೋ ಎಂಬಂತೆ ಕೆಪಿಎಸ್ಸಿ ಹಾಗೂ ಕೆಇಎ(KPSC KEA) ನಡೆಸುವ ನೇಮಕಾತಿ ಪರೀಕ್ಷೆ ಸಮರ್ಪಕತೆ ಪರಿಶೀಲನೆಗಾಗಿ ರಾಜ್ಯ ಸರ್ಕಾರ ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಅಧ್ಯಕ್ಷತೆಯಲ್ಲಿ ಸಮಿತಿ(Ranganath Committee)ಯೊಂದನ್ನು ರಚಿಸಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ(NEEET Paper Leak) ವಿರುದ್ಧ ದೇಶಾದ್ಯಂತ ನಡೆದ ಜೆನ್‌ಝೀ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ನಡೆಯಲಿರುವ 70 ಸಾವಿರಕ್ಕೂ ಹೆಚ್ಚಿನ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ತಡೆಯಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ಇದನ್ನೂ ಓದಿ:ನಾಳೆ 3991 ಪೇದೆ ನೇಮಕಾತಿ ಪರೀಕ್ಷೆ: ಮೊದಲ ಬಾರಿಗೆ ಒಎಂಆರ್ ದೊಡ್ಡ ಬದಲಾವಣೆ, ಅಭ್ಯರ್ಥಿಗಳೇ ಈ ವಿಷಯ ತಿಳಿದಿರಲಿ!
ಮುಂಬರುವ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿ ವಿಧಾನಸೌಧದಲ್ಲಿ ಶುಕ್ರವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚಿನ ಹುದ್ದೆಗಳ ನೇಮಕಾತಿಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ, ಕಟ್ಟುನಿಟ್ಟಿನಿಂದ ನಡೆಸಬೇಕು. ಆ ಮೂಲಕ ದೇಶಕ್ಕೇ ಮಾದರಿಯಾಗಬೇಕು. ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿ ದೇಶದೆಲ್ಲೆಡೆ ಜೆನ್‌ಝೀಗಳು ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಲೋಪವಾಗದಂತೆ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ತಜ್ಞರ ಸಮಿತಿ ರಚನೆಗೆ ಸೂಚನೆ:
ನೇಮಕಾತಿ ಪ್ರಕ್ರಿಯೆ ನಡೆಸಲು ಕೆಪಿಎಸ್‌ಸಿ ಮತ್ತು ಕೆಇಎ ಕೈಗೊಂಡಿರುವ ಕ್ರಮಗಳ ಪರಿಶೀಲನೆಗಾಗಿ ಹಿರಿಯ ಅಧಿಕಾರಿಗಳನ್ನೊಳಗೊಂಡ ತಜ್ಞರ ಸಮಿತಿ ರಚಿಸಬೇಕು ಎಂದು ಡಿ.ಕೆ.ಶಿವಕುಮಾರ್ ನಿರ್ದೇಶಿಸಿದರು. ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ನೇಮಕಾತಿ ವ್ಯವಸ್ಥೆಯನ್ನು ಹೆಚ್ಚು ಪರಿಣಾಮಕಾರಿ, ಪಾರದರ್ಶಕ ಹಾಗೂ ವಿಶ್ವಾಸಾರ್ಹವಾಗಿಸಲು ಅಗತ್ಯ ಸುಧಾರಣೆಗಳನ್ನು ಅಧ್ಯಯನ ಮಾಡಿ ಶಿಫಾರಸು ಸಲ್ಲಿಸುವ ಹೊಣೆಗಾರಿಕೆಯನ್ನು ಸಮಿತಿಗೆ ವಹಿಸಬೇಕು ಎಂದು ತಿಳಿಸಿದರು.
ಅದರಂತೆ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿಯಲ್ಲಿ ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ವಿಜಯ್ ಭಾಸ್ಕರ್, ವಂದಿತಾ ಶರ್ಮಾ, ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ, ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.
ಇದನ್ನೂ ಓದಿ: Ujire: ಉಜಿರೆಯಲ್ಲಿ ರಾಷ್ಟ್ರಪತಿಗಳ ಹೆಸರಲ್ಲಿದೆ 6.20 ಎಕ್ರೆ ಜಮೀನು!
ತಾಂತ್ರಿಕತೆ ಬಳಸಿಕೊಳ್ಳಿ:
ಖಾಲಿ ಹುದ್ದೆ ನೇಮಕಾತಿಯಲ್ಲಿ ನಾವು ದೇಶಕ್ಕೇ ಮಾದರಿಯಾಗಬೇಕು. 70 ಸಾವಿರಕ್ಕೂ ಹೆಚ್ಚಿನ ಹುದ್ದೆಗಳಿಗೆ ನೇಮಕಾತಿ ಮಾಡುವ ದೊಡ್ಡ ಕಾರ್ಯ ಕೈಗೆತ್ತಿಕೊಳ್ಳಲಾಗಿದ್ದು, ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ತಾಂತ್ರಿಕತೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಇತಿಹಾಸವಿದೆ. ತಾಂತ್ರಿಕತೆಯಲ್ಲಿ ನಾವು ತುಂಬಾ ಮುಂದಿದ್ದೇವೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡು ವೃತ್ತಿಪರವಾಗಿ ನೇಮಕಾತಿ ಪ್ರಕ್ರಿಯೆ ನಡೆಸಬೇಕು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಮುಂದಿನ ಆರು ತಿಂಗಳಲ್ಲಿ 36773 ಹುದ್ದೆಗಳ ಭರ್ತಿಗೆ ಕೆಪಿಎಸ್ಸಿ ಮತ್ತು ಕೆಇಎ ಈಗಾಗಲೇ ವೇಳಾಪಟ್ಟಿ ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಅಂದಾಜು 35 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುವ ನಿರೀಕ್ಷೆಯಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವೆಲ್ಲ ಕ್ರಮ ಅನುಸರಿಸಬೇಕು ಎಂಬ ಸಮಗ್ರ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಆ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪರೀಕ್ಷೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ಕೈಗೊಳ್ಳಲಾದ ಕ್ರಮಗಳ ಕುರಿತು ಅಭ್ಯರ್ಥಿಗಳಿಗೆ ಮಾಹಿತಿ ಒದಗಿಸಬೇಕು. ಪರೀಕ್ಷಾ ಪ್ರಕ್ರಿಯೆಯಲ್ಲಿ ಇನ್ನಷ್ಟು ಸುಧಾರಿಸಲು ಯುಪಿಎಸ್‌ಸಿಯಲ್ಲಿ ಅನುಸರಿಸುವ ಉತ್ತಮ ಅಂಶಗಳನ್ನು ಇಲ್ಲಿಯೂ ಅಳವಡಿಸಬೇಕು ಎಂದು ನಿರ್ದೇಶಿಸಿದರು.
ಜಿಲ್ಲೆ ಅಧಿಕಾರಿಗಳೇ ಹೊಣೆ:
ಜಿಲ್ಲಾ ಮಟ್ಟದಲ್ಲಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುವುದು ಆಯಾ ಜಿಲ್ಲೆಗಳ ಹಿರಿಯ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿಸಲಾಗುವುದು. ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಶಿಕ್ಷಣ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಪ್ರತಿಯೊಬ್ಬರಿಗೂ ಜವಾಬ್ದಾರಿ ನಿಗದಿಪಡಿಸಲಾಗಿದ್ದು, ಅದನ್ನು ಸಮರ್ಪಕವಾಗಿ ನಿಭಾಯಿಸಬೇಕು. ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತದಲ್ಲೂ ಎಚ್ಚರ ವಹಿಸಬೇಕು. ಪ್ರತಿ ಹಂತವನ್ನೂ ವಿಡಿಯೋ ಚಿತ್ರೀಕರಣ ಮಾಡಬೇಕು. ಪರೀಕ್ಷೆ ನಡೆಸುವ ಶಿಕ್ಷಣ ಸಂಸ್ಥೆ ಸೇರಿ ಇತರ ಸಂಸ್ಥೆಗಳು ಕಟ್ಟೆಚ್ಚರ ವಹಿಸಬೇಕು. ಯಾವುದೇ ಅಧಿಕಾರಿ, ಸಿಬ್ಬಂದಿ ಬಳಿ ಮೊಬೈಲ್ ಇರದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಮುಖ್ಯ ಸಲಹೆಗಾರ ಜಿ.ಸಿ. ಚಂದ್ರಶೇಖರ್, ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಇತರರಿದ್ದರು.


