ಬಜೆಟ್‌ ಅಧಿವೇಶನದ ನಡುವೆಯೇ ಜು.19ರಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಭಾಗವಹಿಸಲಿದ್ದಾರೆ.

ಬೆಂಗಳೂರು (ಜು.15):  ಬಜೆಟ್‌ ಅಧಿವೇಶನದ ನಡುವೆಯೇ ಜು.19ರಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಭಾಗವಹಿಸಲಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಜು.19ರಂದು ಸಂಜೆ 6.30 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಸಚಿವರು, ಶಾಸಕರು ಹಾಗೂ ಪರಿಷತ್‌ ಸದಸ್ಯರೆಲ್ಲರಿಗೂ ಭಾಗವಹಿಸಲು ಸೂಚನೆ ನೀಡಲಾಗಿದೆ.

45 ದಿನದಲ್ಲೇ ಪಕ್ಷದ ಭರವಸೆ ಈಡೇರಿಕೆ, ಎದೆ ಎತ್ತಿ ಉತ್ತರಿಸಿ: ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳು ಕಳೆಯಲಿದ್ದು, ಎರಡು ತಿಂಗಳಲ್ಲೇ ಕಾಂಗ್ರೆಸ್‌ ನೀಡಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ನಾಲ್ಕು ಗ್ಯಾರಂಟಿಗಳನ್ನು ಈಡೇರಿಸಿದಂತಾಗಿದೆ. ಈ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಹಾಗೂ ಅದರ ಲಾಭವನ್ನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಕೊಡಿಸುವ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ.

ಜತೆಗೆ ಜು.17 ಹಾಗೂ 18ರಂದು ಬೆಂಗಳೂರಿನಲ್ಲಿ ರಾಷ್ಟ್ರಮಟ್ಟದ ಪ್ರತಿಪಕ್ಷಗಳ ನಾಯಕರ ಸಭೆ ನಡೆಯಲಿದೆ. ಜತೆಗೆ ಜು. 19 ರಂದು ಕಾಂಗ್ರೆಸ್‌ ಹಿರಿಯ ನಾಯಕ ರಾಹುಲ್‌ಗಾಂಧಿ ಅವರು ರಾಜ್ಯದ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ. ಈ ಎಲ್ಲಾ ವಿಚಾರಗಳ ಹಿನ್ನೆಲೆಯಲ್ಲಿ ಈ ಬಾರಿಯ ಶಾಸಕಾಂಗ ಪಕ್ಷದ ಸಭೆ ಮಹತ್ವ ಪಡೆದುಕೊಂಡಿದೆ. ಸಭೆಯಲ್ಲಿ ಲೋಕಸಭೆ ಚುನಾವಣೆ ತಯಾರಿ ಬಗ್ಗೆಯೂ ಮಲ್ಲಿಕಾರ್ಜುನ ಖರ್ಗೆ ಸಲಹೆ-ಸೂಚನೆ ನೀಡಲಿದ್ದಾರೆ ಎಂದು ಹೇಳಲಾಗಿದೆ.

ಇನ್ನು ಅಧಿವೇಶನದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2023-24ನೇ ಸಾಲಿನ ಬಜೆಟ್‌ಗೆ ಉಭಯ ಸದನಗಳಲ್ಲಿ ಒಪ್ಪಿಗೆ ಪಡೆಯುವ ಬಗ್ಗೆ ಸೇರಿದಂತೆ ಹಲವು ವಿಚಾರಗಳು ಚರ್ಚೆಗೆ ಬರಲಿವೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ವಿಪಕ್ಷ ನಾಯಕ ಯಾರಾಗ್ತಾರೆ?: ಸೋಲಿನ ಬಳಿಕ ನಾಳೆ ಬಿಜೆಪಿ ಮೊದಲ ಶಾಸಕಾಂಗ ಪಕ್ಷದ ಸಭೆ!