ಬೆಂಗಳೂರು(ಸೆ.12): ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರ ನಾಮನಿರ್ದೇಶನ ಮಾಡುವ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಯಾವುದೇ ಕಳಂಕ ಇಲ್ಲದವರನ್ನು ಈ ಹುದ್ದೆಗೆ ನೇಮಕ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶುಕ್ರವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಅಧ್ಯಕ್ಷರ ನೇಮಕಾತಿ ಕುರಿತು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಹೆಜ್ಜೆ ಯಾವ ರೀತಿಯಲ್ಲಿಡಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸಲಾಯಿತು ಎಂದು ತಿಳಿದು ಬಂದಿದೆ.

ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೂಚನೆಯಂತೆ ನೇಮಕಾತಿ ನಿಯಮವನ್ನು ತಿದ್ದುಪಡಿ ಮಾಡುವ ಬಗ್ಗೆ ಚರ್ಚೆ ನಡೆಸಲಾಯಿತು. ಪರಿಸರ ಸಂರಕ್ಷಣೆಯಲ್ಲಿ ವಿಶೇಷ ಪರಿಜ್ಞಾನ, ಪ್ರಾಯೋಗಿಕ ಅನುಭವ ಮತ್ತು ಪರಿಸರ ಸಂಬಂಧಿ ಸಂಸ್ಥೆಯಲ್ಲಿ ಆಡಳಿತದಲ್ಲಿ ಅನುಭವ ಹೊಂದಿರುವ ವ್ಯಕ್ತಿಗಳನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ಹುದ್ದೆಗಳಿಗೆ ನೇಮಕ ಮಾಡಬೇಕು ಎಂದು ಎನ್‌ಜಿಟಿ ತಿಳಿಸಿದೆ. ಅದರಂತೆ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಸಿಎಂ ಬದಲಾವಣೆ ವಿಚಾರ: ಬಿಜೆಪಿ ನಾಯ​ಕ​ರ ಪ್ರತಿಕ್ರಿಯೆ

ಅಧ್ಯಕ್ಷರ ಹುದ್ದೆಗೆ 100ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದು, 20 ಅರ್ಜಿಗಳನ್ನು ಅನರ್ಹಗೊಳಿಸಲಾಗಿದೆ. ಅರಣ್ಯ ಸಚಿವ ಆನಂದ್‌ ಸಿಂಗ್‌ ಮತ್ತು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಆಪ್ತರು ಅಧ್ಯಕ್ಷರ ಹುದ್ದೆಗೆ ಲಾಬಿ ನಡೆಸಿದ್ದಾರೆ. ಜೊತೆಗೆ ಕೇಂದ್ರದಿಂದಲೂ ಒಂದು ಹೆಸರನ್ನು ಶಿಫಾರಸು ಮಾಡಲಾಗಿದ್ದು, ಎಲ್ಲ ಅರ್ಹತೆಗಳನ್ನು ಆಧರಿಸಿ ಆಯ್ಕೆ ಮಾಡುವ ಸಾಧ್ಯತೆಯಿದೆ.

ಕಳೆದ ಬಾರಿ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರ ನೇಮಕ ಪ್ರಕ್ರಿಯೆಯು ಕಾನೂನುಬದ್ಧವಾಗಿ ನಡೆಯದಿರಲಿಲ್ಲ. ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹುದ್ದೆಗೆ ಪರಿಸರ ವಿಜ್ಞಾನ ಪದವಿ ಮತ್ತು ಪರಿಸರ, ಮಾಲಿನ್ಯ ನಿಯಂತ್ರಣ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ತಜ್ಞರನ್ನು ನೇಮಕ ಮಾಡಬೇಕು ಎಂಬ ನಿಯಮ ಇದೆ. ಆದರೆ, ಸರ್ಕಾರಗಳು ಈ ನಿಯಮವನ್ನು ಪಾಲನೆ ಮಾಡಿರಲಿಲ್ಲ. ಇದೀಗ ರಾಜ್ಯ ಸರ್ಕಾರವು ನಿಯಮಬದ್ಧವಾಗಿ ತಜ್ಞರನ್ನು ನೇಮಕ ಮಾಡಲು ಮುಂದಾಗಿದ್ದು, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರ ನಾಮನಿರ್ದೇಶನ ಮಾಡಲು ಮುಂದಾಗಿದೆ.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂದೀಪ್‌ ದವೆ ಉಪಸ್ಥಿತರಿದ್ದರು.