ಹಲವು ದಿನಗಳಿಂದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಸಮುದಾಯಕ್ಕೆ ಇದೀಗ ಬಿ ಎಸ್ ಯಡಿಯೂರಪ್ಪ ಗುಡ್ ನ್ಯೂಸ್ ನೀಡಿದ್ದಾರೆ. ಸಮುದಾಯದ ಒಳಿತಿಗೆ ತಾವು ಬದ್ಧ ಎಂದು ಸಿಎಂ ಹೇಳಿದ್ದಾರೆ.
ಬೆಂಗಳೂರು (ಫೆ.06): ಲಿಂಗಾಯತ ಪಂಚಮಸಾಲಿ ಜನಾಂಗದ ಸ್ಥಿತಿಗತಿ ಬಗ್ಗೆ ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚಿಸಿದ್ದಾರೆ.
ಪಂಚಮಸಾಲಿ ಜನಾಂಗಕ್ಕೆ ಹಿಂದುಳಿದ ವರ್ಗ 2ಎ ಮೀಸಲು ನೀಡುವಂತೆ ಒತ್ತಾಯಿಸಿ ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಮುಖಂಡರು ಹಾಗೂ ಜನರು ಬೆಂಗಳೂರಿಗೆ ಪಾದಯಾತ್ರೆ ನಡೆಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ.
'ಮೀಸಲಾತಿ ಕೊಡಿ.. ಇಲ್ಲಾ ರಾಜೀನಾಮೆ ಕೊಡಿ' ಸಿಎಂಗೆ ಪಂಚಮಸಾಲಿ ಸ್ವಾಮೀಜಿ ಸವಾಲ್ ..
‘ರಾಜ್ಯದ ಲಿಂಗಾಯತ ಪಂಚಮಸಾಲಿ ಜನಾಂಗದವರು ತಮ್ಮ ಸಮಾಜವು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಹಿಂದುಳಿದಿದೆ ಮತ್ತು ಸಮಾಜದ ಕಡುಬಡವರಿಗೆ ತೊಂದರೆಯಾಗಿರುವುದರಿಂದ ತಮ್ಮ ಸಮಾಜವನ್ನು ಹಿಂದುಳಿದ ವರ್ಗ 2ಎ ಮೀಸಲಾತಿಗೆ ಒಳಪಡಿಸುವಂತೆ ಮನವಿ ಮಾಡಿದ್ದಾರೆ. ಕಾರಣ ಈ ಬಗ್ಗೆ ಸಮಗ್ರ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ಕೋರಿದೆ’ ಎಂದು ಯಡಿಯೂರಪ್ಪ ಅವರು ಶುಕ್ರವಾರ ಸಂಜೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಅಧಿಕೃತ ಟಿಪ್ಪಣಿ ರವಾನಿಸಿದ್ದಾರೆ.
ಸಮುದಾಯಗಳ ಒಳತಿಗೆ ಬದ್ಧ- ಸಿಎಂ:
ಇದಕ್ಕೂ ಮೊದಲು ಶುಕ್ರವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರ ನೀಡುವ ವೇಳೆ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಆಡಳಿತಾರೂಢ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪ್ರಸ್ತಾಪಿಸಿದರು. ಆಗ ಈ ವಿಷಯದಲ್ಲಿ ತರಾತುರಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂಬ ಮಾತನ್ನು ಯಡಿಯೂರಪ್ಪ ಹೇಳಿದ್ದರು. ಈ ಹೇಳಿಕೆ ಬೆನ್ನಲ್ಲೇ ಜಯಮೃತ್ಯುಂಜಯ ಸ್ವಾಮೀಜಿ ಅವರು ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿದ್ದರು.
ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಸಂಜೆ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿ, ರಾಜ್ಯದ ಎಲ್ಲ ಸಮುದಾಯಗಳ ಒಳಿತಿಗೆ ನಾನು ಬದ್ಧನಾಗಿದ್ದೇನೆ. ಇಂಥ ಗಂಭೀರ ವಿಷಯಗಳ ಬಗ್ಗೆ ತರಾತುರಿಯಲ್ಲಿ ನಿರ್ಧಾರ ತೆಗೆದುಕೊಳ್ಳದೆ, ತಜ್ಞರೊಂದಿಗೆ ಸಮಗ್ರವಾಗಿ ಚರ್ಚಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯಬೇಕಾಗುತ್ತದೆ. ಹಾಗಾಗಿ ಈ ನಿಟ್ಟಿನಲ್ಲಿ ನಾನು ತಮ್ಮೆಲ್ಲರ ಸಹಕಾರ ಕೋರುತ್ತೇನೆ ಎಂದಿದ್ದಾರೆ.
ನನ್ನ ಹೇಳಿಕೆ ಅಪಾರ್ಥ- ಬಿಎಸ್‌ವೈ:
ವಿಧಾನಸಭೆಯ ಅಧಿವೇಶನದಲ್ಲಿ ನಾನು ನೀಡಿದ ಹೇಳಿಕೆಯನ್ನು ಜಯಮೃತ್ಯುಂಜಯ ಸ್ವಾಮೀಜಿಗಳು ಅಪಾರ್ಥ ಮಾಡಿಕೊಂಡಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ನಾನು ಈಗಾಗಲೇ ಸಮುದಾಯದ ಸಚಿವರಾದ ಮುರುಗೇಶ್ ನಿರಾಣಿ, ಸಿ.ಸಿ.ಪಾಟೀಲ್ ಅವರನ್ನು ಒಳಗೊಂಡಂತೆ ಶಾಸಕರ ಜೊತೆ ಚರ್ಚಿಸಿದ್ದೇನೆ. ಅಲ್ಲದೆ, ಸಮುದಾಯದ ಸ್ವಾಮೀಜಿಗಳು ಹಾಗೂ ಮುಖಂಡರನ್ನು ಭೇಟಿ ಮಾಡಿ ಮನವರಿಕೆ ಮಾಡಿಕೊಡುವಂತೆ ಗುರುವಾರ ಸಚಿವರಿಬ್ಬರನ್ನೂ ಕಳುಹಿಸಿಕೊಟ್ಟಿದ್ದೆ ಎಂದು ಯಡಿಯೂರಪ್ಪ ವಿವರಣೆ ನೀಡಿದರು.
ಅಧಿವೇಶನದಲ್ಲಿ ನಾನು ಹೇಳಿದ್ದು ಇಷ್ಟು. ನಮ್ಮದೊಂದು ರಾಷ್ಟ್ರೀಯ ಪಕ್ಷವಾಗಿದ್ದರಿಂದ ಎಲ್ಲ ಸಂಸತ್ ಸದಸ್ಯರ ಜೊತೆ ಚರ್ಚಿಸಿ ಮುಂದೆ ರಾಷ್ಟ್ರೀಯ ನಾಯಕರೊಂದಿಗೆ ಈ ವಿಷಯದ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ. ನಮ್ಮ ಸರ್ಕಾರ ಈ ಹಿಂದೆ ಪಂಚಮಸಾಲಿ ಸಮಾಜವನ್ನು 3ಬಿಗೆ ಸೇರಿಸಿರುವುದನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬೇಕು ಎಂದು ಹೇಳಿದರು.
ಸಮುದಾಯದ ಒಳಿತಿಗೆ ಬದ್ಧ
ಜಯ ಮೃತ್ಯುಂಜಯ ಸ್ವಾಮೀಜಿಗಳು ನನ್ನ ಹೇಳಿಕೆಯನ್ನು ಅಪಾರ್ಥ ಮಾಡಿಕೊಂಡಿದ್ದಾರೆ. ರಾಜ್ಯದ ಎಲ್ಲ ಸಮುದಾಯಗಳ ಒಳಿತಿಗೆ ನಾನು ಬದ್ಧನಾಗಿದ್ದೇನೆ. ಇಂಥ ಗಂಭೀರ ವಿಷಯಗಳ ಬಗ್ಗೆ ತರಾತುರಿಯಲ್ಲಿ ನಿರ್ಧಾರ ತೆಗೆದುಕೊಳ್ಳದೆ, ತಜ್ಞರೊಂದಿಗೆ ಸಮಗ್ರವಾಗಿ ಚರ್ಚಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯಬೇಕಾಗುತ್ತದೆ. ಹಾಗಾಗಿ ಈ ನಿಟ್ಟಿನಲ್ಲಿ ನಾನು ತಮ್ಮೆಲ್ಲರ ಸಹಕಾರ ಕೋರುತ್ತೇನೆ.
- ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 6, 2021, 8:01 AM IST