ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಸರ್ವ ಪಕ್ಷಗಳ ಸಭೆ ಕರೆದ ಸಿಎಂ, ಲಾಕ್‌ಡೌನ್ ಆಗುತ್ತಾ?
ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸರ್ವಪಕ್ಷ ಸಭೆ ಕರೆದಿದ್ದಾರೆ.
ಬೆಂಗಳೂರು, (ಏ.12): ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಕೊರೋನಾ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಸಿಎಂ ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಇಂದು (ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ವಪಕ್ಷ ಸಭೆ ಕರೆಯಲಾಗುವುದು. ಏಪ್ರಿಲ್ 18, 19ರಂದು ಸಭೆ ಕರೆದು ಚರ್ಚಿಸಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
Fact Check; ಏ. 19ರವರೆಗೆ ಭಾರತದಲ್ಲಿ ಲಾಕ್‌ಡೌನ್?
ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲರೊಂದಿಗೂ ಚರ್ಚಿಸಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಕೊರೋನಾ ಕುರಿತಾಗಿ ಜನರು ಹೆಚ್ಚು ಜಾಗೃತರಾಗಿರಬೇಕು. ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲಿಸಬೇಕು. ಜನರು ಸಹಕರಿಸದಿದ್ದರೆ ಅನಿವಾರ್ಯವಾಗಿ ಲಾಕ್ ಡೌನ್ ಮೊರೆ ಹೋಗಬೇಕಾದ ಸ್ಥಿತಿ ಬರಬಹುದು ಎಂದು ಸಿಎಂ ಎಚ್ಚರಿಕೆ ಕೊಟ್ಟರು.
ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ದಿನಕ್ಕೆ ಕನಿಷ್ಠ 10 ಸಾವಿರ ಪ್ರಕರಣಗಳು ಪತ್ತೆಯಾಗುತ್ತಿವೆ. ಇದರಿಂದ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಈ ಸರ್ವ ಪಕ್ಷಗಳ ಸಭೆ ಕರೆದಿದ್ದು, ಲಾಕ್‌ಡೌನ್ ಮಾಡುವ ಬಗ್ಗೆಯೂ ಚರ್ಚೆಗಳು ನಡೆಯುವ ಸಾಧ್ಯತೆಗಳಿವೆ.
ಒಟ್ಟಿನಲ್ಲಿ ಸಾರ್ವಜನಿಕರು ಎಚ್ಚರದಿಂದ ಇರಬೇಕು. ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಹಾಗೂ ಅನಗತ್ಯವಾಗಿ ಸುತ್ತಾಡುವುದನ್ನು ಬಿಡಬೇಕು.