ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ರಾಜ್ಯಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ವಿಧಾನಸೌಧದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಹಲವು ನಿರ್ದೇಶನಗಳನ್ನು ನೀಡುವ ಸಾಧ್ಯತೆ.
ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ರಾಜ್ಯಮಟ್ಟದ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ.
ಆಡಳಿತದಲ್ಲಿ ವೇಗ ಹೆಚ್ಚಿಸಲು ಸೂಚನೆ
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಆಡಳಿತದಲ್ಲಿ ವೇಗ ತರುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಶಿವಕುಮಾರ್ ಅವರು ವಿವಿಧ ನಿರ್ದೇಶನಗಳನ್ನು ನೀಡುವ ಸಾಧ್ಯತೆಯಿದೆ. ಮುಂಗಾರು ಮಳೆ, ಪ್ರವಾಹ, ಬೆಳೆ ಹಾನಿ, ರಸಗೊಬ್ಬರ, ಬಿತ್ತನೆ ಬೀಜ ಕೊರತೆ, ಕಾನೂನು ಸುವ್ಯವಸ್ಥೆ, ಪ್ರಮುಖ ಯೋಜನೆಗಳ ಸ್ಥಿತಿಗತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.
ಸಭೆಯಲ್ಲಿ ಯಾರರು ಭಾಗಿ?
ಇದೇ ವೇಳೆ ಸಲಹೆ ಸೂಚನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಲ್ಲಾ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಮಾಹಿತಿಗಳೊಂದಿಗೆ ಈ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಜಿಲ್ಲಾಮಟ್ಟದ ಅಧಿಕಾರಿಗಳ ಜತೆ ಸಭೆ ನಡೆಸುತ್ತಿದ್ದು, ಈ ವೇಳೆ ಯಾವೆಲ್ಲಾ ನಿರ್ದೇಶನಗಳನ್ನು ನೀಡಲಿದ್ದಾರೆ ಎಂಬ ಬಗ್ಗೆ ಕುತೂಹಲ ಮೂಡಿದೆ.


