ಕಲುಷಿತ ನೀರಿಗೆ ಬಾಲಕ ಬಲಿ: ಅಧಿಕಾರಿಗಳಿಗೆ ಸಿದ್ದು ತರಾಟೆ
ರಾಯಚೂರು ಜಿಲ್ಲೆಯ ರೇಖಲಮರಡಿ ಬಳಿಯ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಒಬ್ಬ ಬಾಲಕ ಮೃತಪಟ್ಟಿದ್ದಾನೆ.
ಬೆಂಗಳೂರು(ಮೇ.29): ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆ ನೀಡಲು ತುರ್ತು ವ್ಯವಸ್ಥೆ ಮಾಡುವಂತೆ ಹಾಗೂ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ರೇಖಲಮರಡಿ ಬಳಿಯ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಒಬ್ಬ ಬಾಲಕ ಮೃತಪಟ್ಟಿದ್ದಾನೆ.
ಈ ಹಿನ್ನೆಲೆಯಲ್ಲಿ ದೂರವಾಣಿ ಮೂಲಕ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜತೆ ಚರ್ಚಿಸಿದ ಸಿದ್ದರಾಮಯ್ಯ, ಕಲುಷಿತ ನೀರು ಸೇವನೆಯಿಂದ ಆದ ದುರ್ಘಟನೆ ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜತೆಗೆ ಘಟನೆ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದರು ಎಂದು ತಿಳಿದುಬಂದಿದೆ.
ಕಲುಷಿತ ನೀರು ಸೇವನೆ ಪ್ರಕರಣ; ಅಸ್ವಸ್ಥ ರೋಗಿಗಳ ಭೇಟಿಯಾದ ಶಾಸಕಿ ಕರೆಮ್ಮ
ಅಸ್ವಸ್ಥರಾಗಿರುವವರಿಗೆ ಗುಣಮಟ್ಟದ ಚಿಕಿತ್ಸೆ ಸಿಗಬೇಕು. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಬೇಕು. ನೀರಿನ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿ ವರದಿ ಪಡೆಯಬೇಕು. ವರದಿ ಆಧಾರದಲ್ಲಿ ಗ್ರಾಮಸ್ಥರ ಕೂಲಂಕಷ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆಗೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಇನ್ನು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿ, ವಿಷಪೂರಿತ ನೀರಿನ ಮೂಲಗಳನ್ನು ಬಂದ್ ಮಾಡಬೇಕು. ಎಲ್ಲ ಕ್ರಮಗಳನ್ನೂ ಸಮರ್ಪಕವಾಗಿ ತೆಗೆದುಕೊಂಡು ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.