Asianet Suvarna News Asianet Suvarna News

ಲೀಲಾವತಿ ನಿಧನ, ಸಿಎಂ ಸಿದ್ಧರಾಮಯ್ಯ, ಬಿಎಸ್‌ವೈ, ಕುಮಾರಸ್ವಾಮಿ ಸಂತಾಪ!


ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದೆ ಲೀಲಾವತಿ ಅವರ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್‌ ಯಡಿಯೂರಪ್ಪ, ಎಚ್‌ಡಿ ಕುಮಾರಸ್ವಾಮಿ, ನಟಿ ಹಾಗೂ ಸಂಸದೆ ಸುಮಲತಾ ಅಂಬರೀಷ್‌ ಸಂತಾಪ ವ್ಯಕ್ತಪಡಿಸಿದ್ದಾರೆ.
 

CM Siddaramaiah BSY HD Kumaraswamy reacts sandalwood veteran actress leelavati Death san
Author
First Published Dec 8, 2023, 8:21 PM IST

ಬೆಂಗಳೂರು (ಡಿ.8): ಕನ್ನಡ ಹಾಗೂ ದಕ್ಷಿಣ ಭಾರತದ ಚಿತ್ರರಂಗದ ಹೆಸರಾಂತ ಕಲಾವಿದೆ ಲೀಲಾವತಿ ತಮ್ಮ 85ನೇ ವರ್ಷದಲ್ಲಿ ಶುಕ್ರವಾರ ನಿಧನರಾದರು. ಕಳೆದ ಒಂದು ತಿಂಗಳಿನಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಲೀಲಾವತಿ ಅವರ ಆರೋಗ್ಯ ಶುಕ್ರವಾರ ಮಧ್ಯಾಹ್ಬದ ವೇಳೆಗೆ ಇನ್ನಷ್ಟು ಬಿಗಡಾಯಿಸಿತು. ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡುವ ಪ್ರಯತ್ನ ಮಾಡಿದರಾದರೂ ಮಾರ್ಗಮಧ್ಯೆಯೇ ಇಹಲೋಕ ತ್ಯಜಿಸಿದರು. ನಟಿಯ ಸಾವಿಗೆ ಸಿಎಂ ಸಿದ್ಧರಾಮಯ್ಯ, ಮಾಜಿ ಸಿಎಂಗಳಾದ ಬಿಎಸ್‌ ಯಡಿಯೂರಪ್ಪ, ಎಚ್‌ಡಿ ಕುಮಾರಸ್ವಾಮಿ, ನಟಿ ಹಾಗೂ ಸಂಸದೆ ಸುಮಲತಾ ಅಂಬರೀಷ್‌, ಡಿಸಿಎಂ ಡಿಕೆ ಶಿವಕುಮಾರ್‌ ಸಂತಾಪ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ.

'ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ. ಹಲವು ದಶಕಗಳ ಕಾಲ ತಮ್ಮ‌ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಸಿಎಂ ಸಿದ್ಧರಾಮಯ್ಯ ಟ್ವೀಟ್‌ ಮಾಡಿದ್ದಾರೆ.

'ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ' ಎಂದು ಎಚ್‌ಡಿ ದೇವೇಗೌಡ ಟ್ವೀಟ್‌ ಮಾಡಿದ್ದಾರೆ.

'ಕನ್ನಡ ಚಿತ್ರರಂಗದ ಶ್ರೇಷ್ಠ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನದ ವಾರ್ತೆ ಕೇಳಿ ಬಹಳ ನೋವುಂಟಾಯಿತು. ನಾಯಕಿಯಾಗಿ ಮಾತ್ರವಲ್ಲದೆ, ಪೋಷಕ ಪಾತ್ರಗಳಿಗೂ ಜೀವ ತುಂಬಿ ಬೆಳ್ಳಿತೆರೆಯ ಮೇಲೆ ಅವುಗಳ ಹೆಜ್ಜೆಗುರುತುಗಳು ಮೂಡುವಂತೆ ಮಾಡಿದವರು ಅವರು. ಅಮ್ಮ, ಅಕ್ಕ, ಅತ್ತೆ ಸೇರಿ ಅನೇಕ ಪಾತ್ರಗಳಲ್ಲಿ ಪರಕಾಯ ಪ್ರವೇಶ ಮಾಡಿ ನಟಿಸುತ್ತಿದ್ದರು. ಭಕ್ತ ಕುಂಬಾರ, ವೀರ ಕೇಸರಿ, ಭಾಗ್ಯದೇವತೆ, ಸೋತು ಗೆದ್ದವಳು, ನಂದಾದೀಪ, ವಿಧಿ ವಿಲಾಸ, ಸಂತ ತುಕಾರಾಂ, ರಣಧೀರ ಕಂಠೀರವ ಸೇರಿ ಅವರು ನಟಿಸಿದ್ದ ಅನೇಕ ಚಿತ್ರಗಳು ಕನ್ನಡಿಗರ ಮನೆ ಮನಗಳನ್ನು ತುಂಬಿರುತ್ತವೆ. ಲೀಲಾವತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಪುತ್ರ ವಿನೋದ್ ರಾಜ್ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ' ಎಂದು ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಬಿಎಸ್‌ ಯಡಿಯೂರಪ್ಪ ಟ್ವೀಟ್‌ ಮಾಡಿ, 'ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಲೀಲಾವತಿ ಅವರು ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ದಕ್ಷಿಣ ಭಾರತದ ಸುಮಾರು 600ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ, ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ ಅವರ ಅಗಲಿಕೆಯಿಂದ ಕಲಾಪ್ರಪಂಚ ತನ್ನ ಮಾತೃಸದೃಶ ಕಲಾವಿದೆಯನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಕುಟುಂಬ ಹಾಗೂ ಅಭಿಮಾನಿ ವರ್ಗದವರಲ್ಲಿ ಸಂತಾಪಗಳನ್ನು ಸಲ್ಲಿಸುತ್ತೇನೆ. ಓಂ ಶಾಂತಿ' ಎಂದು ಬರೆದುಕೊಂಡಿದ್ದಾರೆ.

'ಕನ್ನಡದ ಹೆಸರಾಂತ ಹಿರಿಯ ನಟಿ ಡಾ.ಲೀಲಾವತಿ ಅವರ ನಿಧನದ ಸುದ್ದಿ ತೀವ್ರ ಆಘಾತ ತಂದಿದೆ. ದಕ್ಷಿಣದ ಸಿನಿಮಾ ರಂಗಕ್ಕೆ ಇದು ತುಂಬಲಾರದ ನಷ್ಟ. ಆರನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಲೀಲಾವತಿ ಅವರು ನಾನಾ ಭಾಷೆಗಳಲ್ಲಿ ನಟಿಸುವ ಮೂಲಕ ದಕ್ಷಿಣ ಯಶಸ್ವಿ ನಟಿಯಾಗಿದ್ದರು. ಅವರೊಂದಿಗೆ ನನಗೂ ಕಥಾನಾಯಕ ಸಿನಿಮಾದಲ್ಲಿ ಪಾತ್ರ ಮಾಡಲು ಅವಕಾಶ ಸಿಕ್ಕಿತ್ತು. ಅಗಲಿಕೆ ನೋವನ್ನು ಭರಿಸುವಂತಹ ಶಕ್ತಿಯನ್ನು ಲೀಲಾವತಿ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುವೆ' ಎಂದು ಸುಮಲತಾ ಬರೆದುಕೊಂಡಿದ್ದಾರೆ.

'ಯಾರೂ ಇಲ್ಲ, ನೀವೇ ಬಂಧುಬಳಗ..' ತಾಯಿಯ ನಿಧನದ ಬಳಿಕ ವಿನೋದ್‌ ರಾಜ್‌ ಕಣ್ಣೀರು

' ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ಅತೀವ ದುಃಖ ಉಂಟುಮಾಡಿದೆ. ಇತ್ತೀಚೆಗಷ್ಟೇ ಅವರು ನೆಲಮಂಗಲ ಬಳಿಯ ಸೋಲದೇವನಹಳ್ಳಿಯಲ್ಲಿ ನಿರ್ಮಿಸಿದ್ದ ಪಶು ಆಸ್ಪತ್ರೆಯನ್ನು ಉದ್ಘಾಟಿಸಿದ್ದೆ. ಸಂಕಷ್ಟದಲ್ಲಿದ್ದರೂ ಸಮಾಜ ಸೇವೆ ಮಾಡಬೇಕೆನ್ನುವ ಅವರ ಕಳಕಳಿ ನನ್ನ ಹೃದಯ ಮುಟ್ಟಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಪುತ್ರ ವಿನೋದ್‌ ರಾಜ್‌ ಕುಟುಂಬವರ್ಗದವರು ಹಾಗೂ ಅಭಿಮಾನಿಗಳ ನೋವಿನಲ್ಲಿ ನಾನೂ ಕೂಡ ಭಾಗಿ' ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಬರೆದುಕೊಂಡಿದ್ದಾರೆ.

'ದೇವ್ರೇ..ದೇವೇ..' ಎನ್ನುತ್ತಲೇ ರಂಜಿಸಿದ್ದ ಲೀಲಾವತಿಗೆ ಸಿಕ್ಕಿದ್ದು ಬರೀ ಅಳುಮುಂಜಿ ಪಾತ್ರಗಳು!

Follow Us:
Download App:
  • android
  • ios