ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬಕ್ಕೆ ನ್ಯಾಯಾಲಯದಿಂದ ಕ್ಲೀನ್ ಚಿಟ್ ಸಿಕ್ಕಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ 'ಬಿ-ರಿಪೋರ್ಟ್' ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿದ್ದು, ಇತರ ಆರೋಪಿಗಳ ವಿರುದ್ಧ ತನಿಖೆ ಮುಂದುವರಿಯಲಿದೆ.

ಬೆಂಗಳೂರು (ಜ.28): ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಮುಡಾ (MUDA) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನ್ಯಾಯಾಲಯದಿಂದ ದೊಡ್ಡ ಮಟ್ಟದ ನೆಮ್ಮದಿ ಸಿಕ್ಕಿದೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ 'ಬಿ-ರಿಪೋರ್ಟ್' (B-Report) ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಅಂಗೀಕರಿಸಿದೆ.

ಸಿಎಂ ಕುಟುಂಬಸ್ಥರಿಗೂ ಸಿಕ್ಕಿತು ಜಯ

ಕೇವಲ ಸಿದ್ದರಾಮಯ್ಯ ಮಾತ್ರವಲ್ಲದೆ, ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾರಾಟ ಮಾಡಿದ್ದ ದೇವರಾಜ್ ಅವರಿಗೂ ನ್ಯಾಯಾಲಯ ರಿಲೀಫ್ ನೀಡಿದೆ. ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಸಿದ್ದರಾಮಯ್ಯ ಮತ್ತು ಅವರ ಕುಟುಂಬಸ್ಥರ ವಿರುದ್ಧ ಯಾವುದೇ ಅಕ್ರಮ ನಡೆದಿಲ್ಲ ಎಂದು ಅಂತಿಮ ವರದಿ (ಬಿ-ರಿಪೋರ್ಟ್) ಸಲ್ಲಿಸಿದ್ದರು. ಈ ವರದಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಇಂದು ಮಹತ್ವದ ಆದೇಶ ಪ್ರಕಟಿಸಿದ್ದಾರೆ.

ಉಳಿದ ಆರೋಪಿಗಳಿಗೆ ತನಿಖಾ ಬಿಸಿ

ನ್ಯಾಯಾಲಯವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಯನ್ನು ಕೈಬಿಟ್ಟಿದೆಯಾದರೂ, ಪ್ರಕರಣದ ಇತರ ಆರೋಪಿಗಳ ವಿರುದ್ಧ ತನಿಖೆ ಮುಂದುವರಿಸಲು ಹಸಿರು ನಿಶಾನೆ ತೋರಿಸಿದೆ. ಮುಡಾ ಅಧಿಕಾರಿಗಳು ಮತ್ತು ಇತರ ಮಧ್ಯವರ್ತಿಗಳ ಪಾತ್ರದ ಕುರಿತು ತನಿಖೆ ನಡೆಸಲು ಪೊಲೀಸರಿಗೆ ನ್ಯಾಯಾಲಯ ಅನುಮತಿ ನೀಡಿದೆ. ಇದರಿಂದಾಗಿ ಸಿಎಂ ಕುಟುಂಬಕ್ಕೆ ಕ್ಲೀನ್ ಚಿಟ್ ಸಿಕ್ಕಂತಾಗಿದ್ದು, ವಿರೋಧ ಪಕ್ಷಗಳ ಭ್ರಷ್ಟಾಚಾರದ ಆರೋಪಗಳಿಗೆ ಕಾನೂನಾತ್ಮಕವಾಗಿ ಹಿನ್ನಡೆಯಾದಂತಾಗಿದೆ.

ಏನಿದು ಪ್ರಕರಣ?

ಮೈಸೂರಿನ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿನ 3 ಎಕರೆ 16 ಗುಂಟೆ ಜಮೀನನ್ನು ಮುಡಾ ವಶಪಡಿಸಿಕೊಂಡು, ಅದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿಗಳ ಪತ್ನಿ ಪಾರ್ವತಿ ಅವರಿಗೆ ವಿಜಯನಗರದ ಪ್ರತಿಷ್ಠಿತ ಬಡಾವಣೆಯಲ್ಲಿ 14 ಬದಲಿ ನಿವೇಶನಗಳನ್ನು ನೀಡಲಾಗಿತ್ತು. ಇದರಲ್ಲಿ ಅಕ್ರಮ ನಡೆದಿದೆ ಮತ್ತು ಅಧಿಕಾರ ದುರುಪಯೋಗವಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣವು ಹೈಕೋರ್ಟ್ ಮತ್ತು ಕೆಳಹಂತದ ನ್ಯಾಯಾಲಯಗಳಲ್ಲಿ ಸುದೀರ್ಘ ಚರ್ಚೆಗೆ ಒಳಪಟ್ಟಿತ್ತು.

ಇಂದಿನ ತೀರ್ಪಿನಿಂದಾಗಿ ಸಿಎಂ ಸಿದ್ದರಾಮಯ್ಯ ಅವರ ಮೇಲಿದ್ದ ತೂಗುಗತ್ತಿ ದೂರಾದಂತಾಗಿದ್ದು, ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ. ಲೋಕಾಯುಕ್ತ ತನಿಖೆಯ ಮೇಲೆ ನಂಬಿಕೆ ಇಟ್ಟಿದ್ದ ಸಿಎಂಗೆ ನ್ಯಾಯಾಲಯದ ಈ ಆದೇಶವು ನೈತಿಕ ಬಲ ತುಂಬಿದೆ.