ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಮೊದಲ ಆರೋಪಿ: ಆರ್.ಅಶೋಕ್
ಈ ಹಗರಣದ ಹಿಂದೆ ಕೇವಲ ಸಚಿವರಾಗಿದ್ದ ಬಿ.ನಾಗೇಂದ್ರ ಅವರೊಬ್ಬರೇ ಇಲ್ಲ. ಇದರ ಹಿಂದೆ ದೊಡ್ಡ ನಾಯಕರೇ ಇದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತಿದ್ದೇ ಈ ಹಗರಣ ನಡೆದಿದೆ ಎಂದು ಆಪಾದಿಸಿದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್
ಬೆಂಗಳೂರು(ಜೂ.11): ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮೊದಲ ಆರೋಪಿ. ಅವರು ರಾಜೀನಾಮೆ ನೀಡುವವರೆಗೂ ಬಿಜೆಪಿ ಹೋರಾಟ ಮುಂದುವರೆಸಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಗರಣದ ಹಿಂದೆ ಕೇವಲ ಸಚಿವರಾಗಿದ್ದ ಬಿ.ನಾಗೇಂದ್ರ ಅವರೊಬ್ಬರೇ ಇಲ್ಲ. ಇದರ ಹಿಂದೆ ದೊಡ್ಡ ನಾಯಕರೇ ಇದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತಿದ್ದೇ ಈ ಹಗರಣ ನಡೆದಿದೆ ಎಂದು ಆಪಾದಿಸಿದರು. ಇದರ ಜೊತೆ ಇನ್ನಷ್ಟು ಸಚಿವರೂ ಸೇರಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ಅವರಿಗೆ ಆರ್ಥಿಕತೆಯ ಬಗ್ಗೆ ಗೊತ್ತಿದೆಯೇ? ಇಲಾಖೆಯ ಮೇಲೆ ಅವರಿಗೆ ಹಿಡಿತವಿಲ್ಲವೇ? ಈ ಹಣ ಹೈದ್ರಾಬಾದ್‌ಗೆ ಹೋಗಿದ್ದು ತಿಳಿದರೂ ಬೇರೆಯವರ ವಿರುದ್ದ ಕಠಿಣ ಕ್ರಮ ವಹಿಸಿಲ್ಲ. ದಲಿತರ ಹಣವನ್ನು ವಾಪಸ್ ಮಾಡದಿದ್ದರೆ ಜನರ ಶಾಪ ತಟ್ಟಲಿದೆ. ಈ ಅಕ್ರಮದಲ್ಲಿ ಮುಖ್ಯಮಂತ್ರಿ ಯೇ ಮೊದಲ ಆರೋಪಿಯಾಗಿದ್ದು, ಬಿಜೆಪಿಯ ಹೋರಾಟ ಮುಂದುವರಿ ಯಲಿದೆ ಎಂದು ತಿಳಿಸಿದರು.
ವಾಲ್ಮೀಕಿ ಹಗರಣ ಸಿಎಂ ಕಣ್ಣ ಕೆಳಗೇ ನಡೆದಿದೆ: ಆರ್.ಅಶೋಕ್
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅಶೋಕ್, ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳಿಂದ ಕಾಂಗ್ರೆಸ್‌ಗೆಮತ ಬಂದಿಲ್ಲ. ಸರ್ಕಾರ ಪಾಪರ್ ಆಗಿ ಅಭಿವೃದ್ಧಿಶೂನ್ಯವಾಗಿರುವುದರಿಂದಲೇ ಕಾಂಗ್ರೆಸ್ ಸೋತಿದೆ. ಕಾಂಗ್ರೆಸ್ ಸರ್ಕಾರ ಮತಕ್ಕಾಗಿ ಗ್ಯಾರಂಟಿ ಜಾರಿ ಮಾಡಿದ್ದರಿಂದ ಈಗ ಸಾಲ ಮಾಡಿ ಸಂಬಳ ಕೊಡುವ ಪರಿಸ್ಥಿತಿ ಬಂದಿದೆ. ಗ್ಯಾರಂಟಿಗಳಿಂದ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ ಎಂದರು.