ಯುವನಿಧಿ ಯೋಜನೆ ನೋಂದಣಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ: ಅರ್ಹತೆ, ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ ನೋಡಿ..

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ  ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯ ಚಾಲನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

CM Siddaramaiah launched Yuva Nidhi Scheme registration and Money deposit on January 12 sat

ಬೆಂಗಳೂರು (ಡಿ.26): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ  ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯ ಚಾಲನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ನಂತರ ವೇದಿಕೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರೇ ಕರ್ನಾಟಕ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಗ್ಯಾರಂಟಿ ಜಾರಿಯಾದರೆ ರಾಜ್ಯ ಸರ್ಕಾರ ದಿವಾಳಿಯಾಗುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಮಾತು ಸುಳ್ಳಾಗಿದೆ. ಯುವನಿಧಿ ಜತೆಗೆ ಉಚಿತ ತರಬೇತಿ, ಅರ್ಜಿ ಶುಲ್ಕವೂ ಉಚಿತ. ರಾಜ್ಯದ ಜನರಿಗೆ ಇದು ಮುಟ್ಟಿದೆ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದ ಮೋದಿಯವರೇ ನೀವು ಉದ್ಯೋಗ ಸೃಷ್ಟಿಸಿದ್ರಾ? ವರ್ಷಕ್ಕೆ ಎರಡು ಕೋಟಿ ಉದ್ಯೋಗ ಅಂದ್ರೆ ಇಷ್ಟೊತ್ತಿಗೆ 20 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಎಲ್ಲಿ ಸೃಷ್ಟಿಯಾಯ್ತು ಮೋದಿಯವರೇ? ನೀವು ಮಾತಿಗೆ ತಪ್ಪಿದ ಮೋದಿ ಆಗಿದ್ದೀರಿ ಎಂದು ಕಿಡಿಕಾರಿದರು.

ಕಿವುಡ ಸರ್ಕಾರಕ್ಕೆ ಸಡ್ಡು, ಸದನದಲ್ಲಿ ಹೋರಾಟ: ಕೋಟ ಎಚ್ಚರಿಕೆ

ಭಾರತದ ಇತಿಹಾಸದಲ್ಲಿ ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಇವತ್ತಿನವರೆಗೂ ಬಂದಿಲ್ಲ. ಮೋದಿಯವರೇನು ಆರ್ಥಿಕ ತಜ್ಞರಾ? ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೆ ರಾಜ್ಯ ದಿವಾಳಿ ಆಗುತ್ತದೆ ಎಂದು ಭಾಷಣ ಮಾಡಿದ್ರು. ಈಗ ಐದೂ ಯೋಜನೆ ಜಾರಿಯಾಗಿ ರಾಜ್ಯ ಆರ್ಥಿಕವಾಗಿ ಸದೃಢವಾಗಿದೆ. ವಿವೇಕಾನಂದ ಜಯಂತಿಯಂದು ಲಕ್ಷಾಂತರ ಯುವಕ ಯುವತಿಯರ ಸಮ್ಮುಖದಲ್ಲಿ ಯುವನಿಧಿಯನ್ನು ನೇರವಾಗಿ ಅರ್ಹರ ಖಾತೆಗೆ ಜಮೆ ಮಾಡುವ ಕಾರ್ಯಕ್ರಮ ನಡೆಸುತ್ತೇವೆ. ರಾಜ್ಯದಲ್ಲಿ ಖಾಲಿ ಇರುವ ಉದ್ಯೋಗಗಳನ್ನೂ ಭರ್ತಿ ಮಾಡಲಾಗುವುದು. ಮಾತು ತಪ್ಪಿದ ಮೋದಿಯವರೇ ನಿಮ್ಮ ಮಾತು ಏನಾಯ್ತು? ರಾಜ್ಯದ ಯುವ ಸಮೂಹ ನಿಮ್ಮನ್ನು ಪ್ರಶ್ನಿಸುತ್ತಿದೆ ಎಂದು ಹೇಳಿದರು.

ಅರ್ಜಿ ಸಲ್ಲಿಕೆ ಹೇಗೆ? 
ಈ ಯುವನಿಧಿ ಯೋಜನೆಗೆ 2023-24ನೇ ಸಾಲಿನಲ್ಲಿ ಪದವಿ/ಡಿಪ್ಲೊಮಾ ಪಾಸಾಗಿಯೂ ಉದ್ಯೋಗ ದೊರೆಯದವರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನಿರುದ್ಯೋಗ ಭತ್ಯೆಗೆ ಅರ್ಜಿ ಸಲ್ಲಿಸಬಹುದು. ಜತೆಗೆ, ಗ್ರಾಮ ಒನ್‌, ಕರ್ನಾಟಕ ಒನ್‌, ಬೆಂಗಳೂರು ಒನ್‌ ಕೇಂದ್ರಗಳ ಮೂಲಕವೂ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಜನವರಿ 12ರ ಸ್ವಾಮಿ ವಿವೇಕಾನಂದರ ಜಯಂತಿಯಂದು ಅರ್ಹ ಪದವೀಧರರಿಗೆ ಮಾಸಿಕ 3000 ರು. ಹಾಗೂ ಡಿಪ್ಲೊಮಾ ತೇರ್ಗಡೆಯಾದವರಿಗೆ ಮಾಸಿಕ 1500 ರು. ನಿರುದ್ಯೋಗ ಭತ್ಯೆ ನೇರ ನಗದು ವರ್ಗಾವಣೆ(ಡಿಬಿಟಿ) ಮೂಲಕ ಜಮೆಯಾಗಲಿದೆ.

ಷರತ್ತುಗಳೇನು?:
ಪದವಿ/ ಡಿಪ್ಲೊಮಾ ವ್ಯಾಸಂಗದ ಅವಧಿಯಲ್ಲಿ ಕರ್ನಾಟಕದಲ್ಲಿ ಕನಿಷ್ಠ 6 ವರ್ಷದವರೆಗೆ ವಾಸವಾಗಿರಬೇಕು ಎಂಬ ಷರತ್ತನ್ನು ಅರ್ಜಿದಾರರಿಗೆ ವಿಧಿಸಲಾಗಿದೆ. ಇದಲ್ಲದೆ, ಫಲಾನುಭವಿಗಳು ಪ್ರತಿ ತಿಂಗಳ 25ರೊಳಗೆ ಸ್ವಯಂಘೋಷಣೆ ಮೂಲಕ ನಿರುದ್ಯೋಗ ಭತ್ಯೆ ಪಡೆಯಬಹುದು. ಇದರ ನಡುವೆ ಸ್ವಂತ ಉದ್ಯೋಗ ಆರಂಭಿಸಿದರೆ, ಉದ್ಯೋಗ ಸಿಕ್ಕರೆ ಭತ್ಯೆ ಪಡೆಯುವಂತಿಲ್ಲ.

ಯಾವೆಲ್ಲಾ ದಾಖಲೆ ಬೇಕು?: 
ಪದವೀಧರರು ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ ಅಥವಾ ತಾತ್ಕಾಲಿಕ ಪ್ರಮಾಣ ಪತ್ರ (ಪಿಡಿಸಿ), ಡಿಪ್ಲೊಮಾ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಡಿಪ್ಲೊಮಾ ಪ್ರಮಾಣ ಪತ್ರ ಅಥವಾ ತಾತ್ಕಾಲಿಕ ಪ್ರಮಾಣ ಪತ್ರ. ಕರ್ನಾಟಕ ವಾಸಿಯಾಗಿರುವ ಬಗ್ಗೆ ಸೂಕ್ತ ದಾಖಲೆ ಇರಬೇಕು.

ರೈತರ ಹಾಲು ಖರೀದಿ ದರ 4 ರೂ. ತಗ್ಗಿಸಿದ ಕೆಎಂಎಫ್: ಬರದ ನಡುವೆಯೂ ರೈತರಿಗೆ ಬರೆ ಎಳೆದ ಸರ್ಕಾರ!

ಅನರ್ಹರು ಭತ್ಯೆ ಪಡೆದರೆ ಕ್ರಮ:
ಈ ಯೋಜನೆಯ 4.81 ಲಕ್ಷ ಪದವೀಧರರು, 48,153 ಡಿಪ್ಲೊಮಾ ತೇರ್ಗಡೆಯಾದವರು ಸೇರಿ ಒಟ್ಟು 5.29 ಲಕ್ಷ ಮಂದಿ ನೋಂದಣಿಯಾಗುವ ನಿರೀಕ್ಷೆ ಇದೆ. ಯೋಜನೆಗೆ ಪ್ರಸಕ್ತ ಸಾಲಿನಲ್ಲಿ 250 ಕೋಟಿ ರು., ಮುಂದಿನ ಹಣಕಾಸು ವರ್ಷದಲ್ಲಿ 1250 ಕೋಟಿ ರು. ಅಂದಾಜು ವೆಚ್ಚದ ನಿರೀಕ್ಷೆ ಮಾಡಲಾಗಿದೆ. ಅನರ್ಹರು ಭತ್ಯೆ ಪಡೆದರೆ ಅಷ್ಟೂ ಮೊತ್ತ ವಾಪಾಸ್‌ ಪಡೆಯುವ ಜತೆಗೆ ಕಾನೂನು ಕ್ರಮವೂ ಆಗಲಿದೆ ಎಂದು ಸರ್ಕಾರ ಎಚ್ಚರಿಸಿದೆ.

Latest Videos
Follow Us:
Download App:
  • android
  • ios