ವಿದ್ಯುತ್‌ ಉತ್ಪಾದನೆ ಕುಸಿತ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತರಾಟೆ

ರಾಜ್ಯದಲ್ಲಿ ವಿದ್ಯುತ್‌ ಉತ್ಪಾದನೆ ಪ್ರಮಾಣ ಸ್ಥಾಪಿತ ಸಾಮರ್ಥ್ಯಕ್ಕಿಂತ ಕಡಿಮೆಯಾಗಿರುವುದಕ್ಕೆ ಇಂಧನ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಾಮರ್ಥ್ಯಕ್ಕೆ ಅನುಸಾರವಾಗಿ ವಿದ್ಯುತ್‌ ಉತ್ಪಾದನೆಗೆ ಕ್ರಮ ವಹಿಸುವಂತೆ ತಾಕೀತು ಮಾಡಿದ್ದಾರೆ.

CM Siddaramaiah Scolds Energy Department Officers for Power Generation Decline gvd

ಬೆಂಗಳೂರು (ಸೆ.23): ರಾಜ್ಯದಲ್ಲಿ ವಿದ್ಯುತ್‌ ಉತ್ಪಾದನೆ ಪ್ರಮಾಣ ಸ್ಥಾಪಿತ ಸಾಮರ್ಥ್ಯಕ್ಕಿಂತ ಕಡಿಮೆಯಾಗಿರುವುದಕ್ಕೆ ಇಂಧನ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಾಮರ್ಥ್ಯಕ್ಕೆ ಅನುಸಾರವಾಗಿ ವಿದ್ಯುತ್‌ ಉತ್ಪಾದನೆಗೆ ಕ್ರಮ ವಹಿಸುವಂತೆ ತಾಕೀತು ಮಾಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ನಮ್ಮ ಮೊದಲ ಅವಧಿಯ ಸರ್ಕಾರದಲ್ಲಿ ಎಲ್ಲಾ ಸಮಸ್ಯೆಗಳ ನಡುವೆಯೇ ವಿದ್ಯುತ್ ಉತ್ಪಾದನೆ ದುಪ್ಪಟ್ಟಾಗಿತ್ತು. 2013 -14ರಲ್ಲಿ 14,048 ಮೆಗಾವ್ಯಾಟ್‌ ಇದ್ದ ಉತ್ಪಾದನಾ ಪ್ರಮಾಣ 2017-18ರ ವೇಳೆಗೆ 27,780 ಮೆಗಾವ್ಯಾಟ್‌ಗೆ ಏರಿಕೆಯಾಗಿತ್ತು. ಬಹುತೇಕ ದುಪ್ಪಟ್ಟಾಗಿತ್ತು. ಆದರೆ, ಕಳೆದ ನಾಲ್ಕು ವರ್ಷಗಳಿಂದ ಉತ್ಪಾದನೆ ಪ್ರಮಾಣ ಹೆಚ್ಚಳವಾಗಿಲ್ಲ. ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತ ಕಂಡಿರುವುದು ಯಾವ ಕಾರಣಕ್ಕೆ ಎಂದು ತರಾಟೆಗೆ ತೆಗೆದುಕೊಂಡರು.

ಡಿಸಿಎಂ ಹುದ್ದೆ ಆಸೆ ಪಡೋರಿಗೆ ನಾನು ಉತ್ತರ ಕೊಡೋದಿಲ್ಲ: ಡಿಕೆಶಿ

ಕಲ್ಲಿದ್ದಲು ಸರಿಯಿಲ್ಲ- ಅಧಿಕಾರಿಗಳ ಸ್ಪಷ್ಟನೆ: ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆಯಾಗಿರುವ ಕಲ್ಲಿದ್ದಲಿನ ಗುಣಮಟ್ಟ ಉತ್ತಮವಾಗಿಲ್ಲ. ಅಗತ್ಯ ಗುಣಮಟ್ಟದಲ್ಲಿ ಇಲ್ಲದಿರುವುದರಿಂದ ವಿದ್ಯುತ್‌ ಉತ್ಪಾದನೆಯ ಪ್ರಮಾಣದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಕೇಂದ್ರದ ಗಮನಕ್ಕೆ ತರಲಾಗಿದ್ದು, ಪ್ರತಿದಿನ ಎರಡು ರೇಕುಗಳಷ್ಟು ಹೆಚ್ಚುವರಿ ಕಲ್ಲಿದ್ದಲು ಹಂಚಿಕೆಗೆ ಕೋರಿದ್ದೇವೆ. ಇದಲ್ಲದೆ ಕಲ್ಲಿದ್ದಲು ಆಮದು ಮಾಡಲೂ ಸಹ ಟೆಂಡರ್‌ ಕರೆಯಲಾಗಿದೆ ಎಂದು ಸಮರ್ಥನೆ ನೀಡಿದರು.

ಅಧಿಕಾರಿಗಳ ವಿರುದ್ಧ ಸಿಎಂ ಗರಂ: ಇದಕ್ಕೆ ಸಮಾಧಾನಗೊಳ್ಳದ ಮುಖ್ಯಮಂತ್ರಿ ಅವರು, ಇದನ್ನು ಸರ್ಕಾರದ ಗಮನಕ್ಕೆ ಮೊದಲೇ ತರಬೇಕಿತ್ತು. ವಿದ್ಯುತ್‌ ಉತ್ಪಾದನೆ ಕುಸಿತದಿಂದಾಗಿ ವಿವಿಧ ಜಿಲ್ಲೆಗಳಲ್ಲಿ ಅದರಲ್ಲೂ ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಬಗ್ಗೆ ರೈತ ಸಂಘಟನೆಗಳು, ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಇದರಿಂದ ಅನಧಿಕೃತ ಲೋಡ್‌ ಶೆಡ್ಡಿಂಗ್‌ ಮಾಡಲಾಗುತ್ತಿದೆ ಎಂದು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನಗಳು ನಡೆಯುತ್ತಿವೆ. ಯಾವುದೆ ಕಾರಣಕ್ಕೂ ಇದನ್ನು ಸಹಿಸುವುದಿಲ್ಲ. ಉಷ್ಣವಿದ್ಯುತ್‌ ಸ್ಥಾವರಗಳಲ್ಲಿ ತೇವಗೊಂಡ ಕಲ್ಲಿದ್ದಲು ಬಳಕೆ ಮಾಡಕೂಡದು. ಸ್ಥಾಪಿತ ಸಾಮರ್ಥ್ಯಕ್ಕೆ ಅನುಸಾರವಾಗಿ ವಿದ್ಯುತ್‌ ಉತ್ಪಾದನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ನಿತ್ಯ 7 ಗಂಟೆ ತ್ರೀಫೇಸ್‌ ಸೇರಿದಂತೆ ಎಲ್ಲೆಡೆ ಸಮರ್ಪಕವಾಗಿ ವಿದ್ಯುತ್‌ ಪೂರೈಕೆಗೆ ಕ್ರಮ ವಹಿಸಬೇಕು ಎಂದು ತಾತೀಕು ಮಾಡಿದರು.

ಗೃಹಜ್ಯೋತಿಗೆ 1400 ಕೋಟಿ ರು.: "ಗೃಹ ಜ್ಯೋತಿ" ಗ್ಯಾರಂಟಿ ಯೋಜನೆಯಡಿ ಆಗಸ್ಟ್‌ನಲ್ಲಿ 1.26 ಕೋಟಿ ಗ್ರಾಹಕರಿಗೆ ಹಾಗೂ ಸೆಪ್ಟೆಂಬರ್‌ನಲ್ಲಿ 1.35 ಕೋಟಿ ಗ್ರಾಹಕರಿಗೆ ಶೂನ್ಯ ಮೊತ್ತದ ವಿದ್ಯುತ್‌ ಬಿಲ್‌ ನೀಡಲಾಗಿದೆ. ಇದಕ್ಕಾಗಿ 1,400 ಕೋಟಿ ರು. ಒದಗಿಸಲಾಗಿದೆ ಎನ್ನುವ ವಿವರ ನೀಡಿದರು. ಎಸ್ಕಾಂಗಳ ಆರ್ಥಿಕ ಸ್ಥಿತಿಗತಿ ಕುರಿತೂ ಸಹ ಸಭೆಯಲ್ಲಿ ಚರ್ಚಿಸಲಾಯಿತು. ಇದಕ್ಕೆ ಮುಖ್ಯಮಂತ್ರಿಗಳು, ಪ್ರಸಕ್ತ ವರ್ಷದಲ್ಲಿ ವಿದ್ಯುತ್‌ ಉಪಕೇಂದ್ರಗಳ ಸ್ಥಾಪನೆಗಾಗಿ 2500 ಕೋಟಿ ರು. ಒದಗಿಸಲಾಗಿದೆ. ರಾಜ್ಯದ ಪ್ರಸಕ್ತ ವಿದ್ಯುತ್‌ ಪರಿಸ್ಥಿತಿ ಕುರಿತು ಹಾಗೂ ಎಸ್ಕಾಂಗಳ ಆರ್ಥಿಕ ಸ್ಥಿತಿಗತಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸೋಣ. 

ಬಿಜೆಪಿ-ಜೆಡಿಎಸ್‌ ಮೈತ್ರಿ ಈಗ ಅಧಿಕೃತ: ದಸರಾ ಬಳಿಕ ಲೋಕಸಭೆ ಸೀಟು ಹಂಚಿಕೆ ನಿರ್ಧಾರ

ವಿದ್ಯುತ್‌ ಸೋರಿಕೆ ಕುರಿತಂತೆ ರಾಜ್ಯದ ಎಲ್ಲ ಎಸ್ಕಾಂ ಗಳೂ ಹೆಚ್ಚಿನ ಗಮನ ಹರಿಸಬೇಕು. ಅಗತ್ಯವಿರುವಲ್ಲಿ ಟ್ರಾನ್ಸ್‌ಫಾರ್ಮರ್‌ ಅಳವಡಿಕೆ ಹಾಗೂ ವಿದ್ಯುತ್‌ ಉಪಕೇಂದ್ರಗಳ ಸ್ಥಾಪನೆಗೆ ಕ್ರಮ ವಹಿಸಿ ಯಾವುದೇ ಶಾಸಕರಿಂದ ಈ ಸಂಬಂಧ ದೂರುಗಳು ಬರಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್‌ ಗೋಯಲ್‌, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಆರ್ಥಿಕ ಇಲಾಖೆ ಕಾರ್ಯದರ್ಶಿ (ವೆಚ್ಚ) ಡಾ. ಎಂ.ಟಿ. ರೇಜು ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios