ಭ್ರಷ್ಟಾಚಾರದ ಪಿಡುಗು ಕಡಿಮೆ ಆಗುವ ಬದಲು ಹೆಚ್ಚಾಗುತ್ತಿದೆ: ಸಿಎಂ ಸಿದ್ದರಾಮಯ್ಯ
ಸಮಾಜದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಯುತ್ತಿದ್ದರೂ ಭ್ರಷ್ಟಾಚಾರದ ಪಿಡುಗು ಕಡಿಮೆ ಆಗುವ ಬದಲು ಹೆಚ್ಚಾಗುತ್ತಿದೆ. ಚುನಾವಣಾ ವ್ಯವಸ್ಥೆಯೇ ಕೆಟ್ಟು ಹೋಗಿದೆ. ಹೀಗಾಗಿ ನಾನು ಭ್ರಷ್ಟಾಚಾರ ವ್ಯವಸ್ಥೆ ಬಗ್ಗೆ ಮಾತನಾಡಲ್ಲ. ಆದರೆ ನಾವೆಲ್ಲರೂ ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಪ್ರಾಮಾಣಿಕವಾಗಿ ನಡೆದುಕೊಳ್ಳೋಣ ಎಂದ ಸಿದ್ದರಾಮಯ್ಯ
ಬೆಂಗಳೂರು(ಜ.02): ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಿ ಅಸಮಾನತೆ ಹಾಗೂ ಪ್ರಾದೇಶಿಕ ಅಸಮತೋಲನ ತೊಡೆದು ಹಾಕಲು ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಹಿಂದಿನ ವರ್ಷಗಳ ಅನುಭವದಿಂದ ಪಾಠ ಕಲಿತು ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳಬೇಕು ಎಂದು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಐಎಎಸ್, ಐಪಿಎಸ್ ಹಾಗೂ ಐಎಫ್ಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭಾಶಯ ಕೋರಿ ಮಾತನಾಡಿದರು.
ಆಡಳಿತ ರಂಗದಲ್ಲಿ ಐಎಎಸ್, ಐಪಿಎಸ್, ಐಎಫ್ಎಸ್, ಐಆರ್ಎಸ್, ಕೆಎಎಸ್ ಅಧಿಕಾರಿಗಳ ಜವಾಬ್ದಾರಿ ಹೆಚ್ಚು. ಎಲ್ಲಾ ವರ್ಗಗಳಿಗೆ ಸಾಮಾಜಿಕ-ಆರ್ಥಿಕ ಸ್ವಾತಂತ್ರ್ಯ ಒದಗಿಸದಿದ್ದರೆ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುವುದಿಲ್ಲ. ಆರ್ಥಿಕತೆ ವೇಗವಾಗಿ ಬೆಳೆದಷ್ಟೂ ಅದು ಎಲ್ಲರಿಗೂ ಹಂಚಿಕೆಯಾಗಬೇಕು. ಇಲ್ಲದಿದ್ದರೆ ಅಸಮಾನತೆ ಹೆಚ್ಚಾಗಿ ಆರ್ಥಿಕತೆ ಎಂಬುದು ಸಾರ್ಥಕತೆ ಇಲ್ಲದಂತಾಗುತ್ತದೆ ಎಂದು ಹೇಳಿದರು.
ಪ್ರಿಯಾಂಕ್ ಖರ್ಗೆ ರಾಜೀನಾಮೆ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
ಈ ನಿಟ್ಟಿನಲ್ಲಿ ಮನಮೋಹನ್ಸಿಂಗ್ ಅವರ ಆರ್ಥಿಕ ನೀತಿ ನಮಗೆ ಆದರ್ಶವಾಗಬೇಕು. ಈ ಕಾರಣದಿಂದಲೇ ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಜನರ ಕೈಯಲ್ಲಿ ಹಣ ಇರಬೇಕು, ಜನರಿಗೆ ಕೊಳ್ಳುವ ಶಕ್ತಿ ಹೆಚ್ಚಾಗಬೇಕು. ಹೀಗಾಗಿ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಜವಾಬ್ದಾರಿ ನಿಮ್ಮೆಲ್ಲರ ಮೇಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಪ್ರಾದೇಶಿಕ ಅಸಮತೋಲನ ನಿವಾರಿಸಬೇಕು: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 35 ಸಾವಿರ ಕೋಟಿ ರು. ಖರ್ಚು ಮಾಡಿದ್ದೇವೆ. ಈಗಲಾದರೂ ನಂಜುಂಡಪ್ಪ ಅವರ ವರದಿಯಲ್ಲಿನ ಪ್ರಾದೇಶಿಕ ಅಸಮಾನತೆ ಕಡಿಮೆಯಾಗಿದೆಯಾ ಎನ್ನುವುದನ್ನು ಅಧ್ಯಯನ ನಡೆಸಿ ವರದಿ ನೀಡಲು ಗೋವಿಂದರಾವ್ ಸಮಿತಿ ರಚಿಸಲಾಗಿದೆ. ಏಕೆ ಉತ್ತರ ಕರ್ನಾಟಕದ ಅಸಮಾನತೆ ಕಡಿಮೆ ಆಗಿಲ್ಲ ಎಂಬುದನ್ನು ನೀವು ಗಂಭೀರವಾಗಿ ಪರಿಗಣಿಸಿ ಅಸಮತೋಲನ ತೊಡೆದು ಹಾಕಲು ಶ್ರಮಿಸಬೇಕು ಎಂದು ಅಧಿಕಾರಿಗಳಿಗೆ ಕರೆ ನೀಡಿದರು.
ಆರ್ಥಿಕ ಶಿಸ್ತು ಕಾಪಾಡಬೇಕಿದೆ: ಕಳೆದ ಸರ್ಕಾರ ಸುಮಾರು 39 ಸಾವಿರ ಕೋಟಿ ಗುತ್ತಿಗೆ ಬಿಲ್ ಬಾಕಿ ಉಳಿಸಿ ಹೋಗಿದ್ದರು. ಜತೆಗೆ ಕೇಂದ್ರ ಸರ್ಕಾರದಿಂದಲೂ ನಮಗೆ ಅನ್ಯಾಯ ಮುಂದುವರೆದಿದೆ. ಇದರ ನಡುವೆಯೂ ಹಣ ಸಂಗ್ರಹಿಸುವ ಇಲಾಖೆ ಮತ್ತು ಹಣ ಖರ್ಚು ಮಾಡುವ ಇಲಾಖೆಗಳೆರಡೂ ಸಮತೂಕದಿಂದ ಕರ್ತವ್ಯ ನಿರ್ವಹಿಸಿ ಆರ್ಥಿಕ ಶಿಸ್ತು ಕಾಪಾಡಬೇಕಿದೆ ಎಂದು ಸಲಹೆ ನೀಡಿದರು.
ಸಚಿವರಾದ ಜಮೀರ್ ಅಹಮದ್ ಖಾನ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಹಲವರು ಹಾಜರಿದ್ದರು.
ಡ್ರಗ್ಸ್ ಹಾವಳಿ, ಅಪರಾಧ ಹೆಚ್ಚಾಗುತ್ತಿದೆ: ಸಿಎಂ ಆತಂಕ
ಯುವ ಜನರಲ್ಲಿ ಡ್ರಗ್ಸ್ ಹಾವಳಿ, ಅಪರಾಧ ಪ್ರಕರಣಗಳತ್ತ ಆಕರ್ಷಣೆ ಹೆಚ್ಚಾಗುತ್ತಿವೆ. ಸಮಾಜ ದ್ರೋಹದ ಕೆಲಸಗಳತ್ತ ಯುವಜನತೆ ವಾಲದಂತೆ ಕಾಪಾಡುವ ಸವಾಲು ಐಪಿಎಸ್ ಅಧಿಕಾರಿಗಳು ಸ್ವೀಕರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಸಿಎಂ ಸಿದ್ದರಾಮಯ್ಯಗೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆವ ಶಕ್ತಿಯಿಲ್ಲ: ಜನಾರ್ದನ ರೆಡ್ಡಿ
ಯುವ ಜನತೆ ನಮ್ಮ ಸಮಾಜದ ಆಸ್ತಿ. ತಂತ್ರಜ್ಞಾನ ಮತ್ತು ವಿಜ್ಞಾನದ ಪ್ರಗತಿ ಆಗುತ್ತಿದೆ. ಈ ಪ್ರಗತಿ ಅಪರಾಧಗಳಿಗೆ ಬಳಕೆ ಆಗದೆ ಯುವ ಜನರ ಭವಿಷ್ಯ ರೂಪಿಸಲು ಸಹಕಾರಿ ಆಗುವಂತೆ ಕರ್ತವ್ಯ ನಿರ್ವಹಿಸಿ. ಉತ್ತಮ ಬದಲಾವಣೆ, ಸುಧಾರಣೆಗೆ ನಿಮ್ಮ ಕಾರ್ಯಕ್ಷಮತೆ ಬಳಕೆಯಾಗಲಿ ಎಂದು ಹೇಳಿದರು.
ಭ್ರಷ್ಟಾಚಾರ ಹೆಚ್ಚಾಗುತ್ತಿದೆ: ಸಿಎಂ
ಸಮಾಜದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಯುತ್ತಿದ್ದರೂ ಭ್ರಷ್ಟಾಚಾರದ ಪಿಡುಗು ಕಡಿಮೆ ಆಗುವ ಬದಲು ಹೆಚ್ಚಾಗುತ್ತಿದೆ. ಚುನಾವಣಾ ವ್ಯವಸ್ಥೆಯೇ ಕೆಟ್ಟು ಹೋಗಿದೆ. ಹೀಗಾಗಿ ನಾನು ಭ್ರಷ್ಟಾಚಾರ ವ್ಯವಸ್ಥೆ ಬಗ್ಗೆ ಮಾತನಾಡಲ್ಲ. ಆದರೆ ನಾವೆಲ್ಲರೂ ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಪ್ರಾಮಾಣಿಕವಾಗಿ ನಡೆದುಕೊಳ್ಳೋಣ ಎಂದು ಸಿದ್ದರಾಮಯ್ಯ ಹೇಳಿದರು.