ಅಂಜನಾದ್ರಿ ಸಮಗ್ರ ಅಭಿವೃದ್ಧಿ: ಭೂಸ್ವಾಧೀನಕ್ಕೆ ಸಿಎಂ ಬೊಮ್ಮಾಯಿ 1 ತಿಂಗಳ ಗಡುವು
ಕೊಪ್ಪಳ ಜಿಲ್ಲೆಯ ಕಿಷ್ಕಿಂಧೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಯೋಜನೆಗೆ ಅಗತ್ಯ ಇರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸಿ ಕಾಮಗಾರಿ ಕೆಲಸವನ್ನು ಪ್ರಾರಂಭಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾಕೀತು ಮಾಡಿದ್ದಾರೆ.
ಬೆಂಗಳೂರು (ಜೂ.26): ಕೊಪ್ಪಳ ಜಿಲ್ಲೆಯ ಕಿಷ್ಕಿಂಧೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಯೋಜನೆಗೆ ಅಗತ್ಯ ಇರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸಿ ಕಾಮಗಾರಿ ಕೆಲಸವನ್ನು ಪ್ರಾರಂಭಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾಕೀತು ಮಾಡಿದ್ದಾರೆ.
ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಯೋಜನೆ ಕುರಿತು ಸಭೆ ನಡೆಸಿ ಈ ಸೂಚನೆ ನೀಡಿದರು. ಯೋಜನೆಗಾಗಿ ಸುಮಾರು 60 ಎಕರೆ ಭೂಮಿ ಅಗತ್ಯ ಇದೆ. ಇದರಲ್ಲಿ 58 ಎಕರೆ ಖಾಸಗಿ ಜಮೀನಾಗಿದೆ. ಇದನ್ನು ರೈತರ ಒಪ್ಪಿಗೆಯ ಮೇರೆಗೆ ಭೂಸ್ವಾಧೀನ ಪಡಿಸಿಕೊಳ್ಳಬೇಕು ಅಥವಾ ಕೆಐಎಡಿಬಿ ಮೂಲಕ ಖರೀದಿಸುವ ಮೂಲಕ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.
ಯೋಜನೆಯ ಮೊದಲ ಹಂತದಲ್ಲಿ ಅಂಜನಾದ್ರಿ ಸಂಪರ್ಕ ರಸ್ತೆ ಅಭಿವೃದ್ಧಿ, ಪರ್ಯಾಯ ರಸ್ತೆಗಳನ್ನು ಗುರುತಿಸಿ ಅಭಿವೃದ್ಧಿಪಡಿಸಬೇಕು. ರಾಷ್ಟ್ರೀಯ ಹೆದ್ದಾರಿಯಿಂದ ಗಂಗಾವತಿವರೆಗಿನ ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಲೋಕೋಪಯೋಗಿ ಇಲಾಖೆಯ ಮೂಲಕ ಕ್ರಮ ಕೈಗೊಳ್ಳಬೇಕು. ಇದಕ್ಕೆ ವಿಸ್ತೃತ ಯೋಜನಾ ವರದಿಯನ್ನು ತಕ್ಷಣ ಸಿದ್ಧಪಡಿಸಬೇಕು. ಬೆಟ್ಟದ ಬುಡದಲ್ಲಿ ಯಾತ್ರಿಕರಿಗೆ ಪಾರ್ಕಿಂಗ್ ಸೇರಿದಂತೆ ಇತರೆ ಮೂಲಸೌಕರ್ಯ ಒದಗಿಸುವ ಕುರಿತು ಕಾಮಗಾರಿಗಳನ್ನು ಅನುಷ್ಠಾನಗೊಳಿಸಬೇಕು. ಯೋಜನೆಯ ಆರ್ಥಿಕ ಅನುಮೋದನೆಗಾಗಿ ಕೂಡಲೇ ಪ್ರಸ್ತಾವನೆ ಸಲ್ಲಿಸಬೇಕು ಎಂದು ಹೇಳಿದರು.
ರೈತರ ಹಿತಕ್ಕಾಗಿ ದೀರ್ಘದಂಡ ನಮಸ್ಕಾರ ಹಾಕುತ್ತಲೇ ಅಂಜನಾದ್ರಿ ಬೆಟ್ಟ ಏರಿದ ಸ್ವಾಮೀಜಿ
ಅಂಜನಾದ್ರಿ ಬೆಟ್ಟಕ್ಕೆ 430 ಮೀಟರ್ ರೋಪ್ ವೇ ನಿರ್ಮಿಸಲು ಪ್ರಸ್ತಾಪಿಸಲಾಗಿದೆ. ಈ ಯೋಜನೆ ಟೆಂಡರ್ ಪ್ರಕ್ರಿಯೆಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸಬೇಕು. ಈ ಯೋಜನೆಯಡಿ ರೋಪ್ ವೇ ಬೇಸ್‌ನಲ್ಲಿ ಪ್ರವಾಸಿಗರಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು. ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜು.15ರೊಳಗೆ ತಾವು ಖುದ್ದು ಅಂಜನಾದ್ರಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
15 ದಿನದಲ್ಲಿ ವರದಿ: ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಪ್ರವಾಸೋದ್ಯಮ ಸಚಿವ ಆನಂದ್‌ಸಿಂಗ್ ಹನುಮನ ಜನ್ಮಸ್ಥಳ ಗೊಂದಲ ವಿಚಾರವಾಗಿ ಚರ್ಚೆ ನಡೆದಿದೆ. ಕೇಂದ್ರ ಪುರಾತತ್ವ ಇಲಾಖೆ ಮತ್ತು ರಾಜ್ಯ ಪುರಾತತ್ವ ಇಲಾಖೆ 15 ದಿನದಲ್ಲಿ ಸಂಶೋಧನಾ ವರದಿ ನೀಡಿದ ಬಳಿಕ ರಾಜ್ಯ ಸರ್ಕಾರವು ಅಧಿಕೃತವಾಗಿ ಅಂಜನಾದ್ರಿ ಹನುಮನ ಜನ್ಮಸ್ಥಳ ಎಂದು ಘೋಷಣೆ ಮಾಡಲಿದೆ. ಬೆಟ್ಟದ ದಾಖಲೆಗಳ ಪರಿಶೀಲನೆ ಮತ್ತು ಸಂಶೋಧನೆ ಬಳಿಕ ಒಂದು ಅಧಿಕೃತವಾಗಿ ಅಲ್ಲಿ ನಾಮಫಲಕ ಹಾಕಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.
ಕಿಷ್ಕೆಂದೆ ಹನುಮ ಹುಟ್ಟಿದ ಸ್ಥಳ ಹೇಗಾಯಿತು? ಇತಿಹಾಸ ಪುಟದಲ್ಲಿ ಏನಿದೆ? ಕಿಷ್ಕಿಂಧೆಯಲ್ಲಿ ಇನ್ನು ಮುಂದೆ ಯಾರೂ ಚಕಾರ ಎತ್ತಬಾರದು ಎನ್ನುವುದು ಸೇರಿದಂತೆ ವಿವಿಧ ವಿಚಾರಗಳಿಗೆ ಅಂತ್ಯ ಹಾಡಬೇಕು. ಅದಕ್ಕಾಗಿ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಹೇಳಿದರು. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಈಗಾಗಲೇ ನೀಡಿರುವ 100 ಕೋಟಿ ರು. ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಬೆಟ್ಟದಲ್ಲಿ ಪಾರ್ಕಿಂಗ್, ರೋಪ್ ವೇ, ರಸ್ತೆ ನಿರ್ಮಾಣ, ಪಾದಚಾರಿ ಕಾಮಗಾರಿಗೆ ಹಣ ನೀಡುವಂತೆ ತಿಳಿಸಿದ್ದಾರೆ.
ಕೊಪ್ಪಳ: ಅಂಜನಾದ್ರಿ ಅಭಿವೃದ್ಧಿಗೆ ಭೂಮಿ ನೀಡಲ್ಲ, ರೈತರ ಆಕ್ರೋಶ
ಅಲ್ಲದೇ, ಶೀಘ್ರದಲ್ಲಿಯೇ ಎಲ್ಲಾ ಕಾಮಗಾರಿಗಳಿಗೂ ಅಡಿಗಲ್ಲು ಹಾಕಲು ಹೇಳಿದ್ದಾರೆ ಎಂದರು. ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್, ಸಂಸದ ಕರಡಿ ಸಂಗಣ್ಣ, ಶಾಸಕ ಬಸವರಾಜ ದಡೆಸೂಗುರು, ಪರಣ್ಣ ಮುನವಳ್ಳಿ, ಅಮರೇಗೌಡ ಬಯ್ಯಾಪೂರ, ರಾಘವೇಂದ್ರ ಹಿಟ್ನಾಳ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಆರ್ಥಿಕ ಇಲಾಖೆಯ ಕಾರ್ಯದರ್ಶಿ ಏಕ್‌ರೂಪ್ ಕೌರ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಪ್ರಸಾದ್ ಇತರರು ಉಪಸ್ಥಿತರಿದ್ದರು.