ತಮಿಳುನಾಡು ಏಜೆಂಟ್ ರೀತಿ ಕಾಂಗ್ರೆಸ್ ವರ್ತನೆ: ಯಡಿಯೂರಪ್ಪ ಕಿಡಿ
ತಮಿಳುನಾಡಿಗೆ ನೀರು ಬಿಡುವುದರಿಂದ ಬೆಂಗಳೂರು ಮತ್ತು ಮೈಸೂರಿಗೆ ಕುಡಿಯುವ ನೀರಿಗೆ ಅಭಾವವಾಗಲಿದೆ. ಆದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ಹಗಲು-ರಾತ್ರಿ ಕಾವೇರಿ ನೀರು ಬಿಟ್ಟು ನಮ್ಮನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ. ಈ ಮೂಲಕ ತಮಿಳುನಾಡನ್ನು ಸಂತುಷ್ಟಿಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಯೋಗ್ಯತೆ ಇದ್ದರೆ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದರೆ, ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಆಗ್ರಹಿಸಿದ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು(ಸೆ.24): ಕಾಂಗ್ರೆಸ್ ಪಕ್ಷ ತಮಿಳುನಾಡಿನ ಏಜೆಂಟ್ ರೀತಿ ವರ್ತಿಸುತ್ತಿದೆ. ಸುಪ್ರೀಂ ಕೋರ್ಟ್ ಹೇಳುವ ಮೊದಲೇ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿದ್ದು ಅಕ್ಷಮ್ಯ ಅಪರಾಧ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ.
ಕಾವೇರಿ ನೀರಿನ ವಿಚಾರ ಸೇರಿದಂತೆ ವಿವಿಧ ರಂಗಗಳಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಶನಿವಾರ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಕಾವೇರಿ ಜಲಾನಯನ ಪ್ರದೇಶದ ಯಾವುದೇ ಜಲಾಶಯಗಳಲ್ಲಿ ನೀರು ಇಲ್ಲ. ಸುಪ್ರೀಂ ಕೋರ್ಟ್ ತಜ್ಞರ ಸಮಿತಿಯನ್ನು ಕಳುಹಿಸಿ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ಎಷ್ಟು ನೀರಿದೆ ಎಂಬುದನ್ನು ನೋಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡುವಲ್ಲಿ ವಿಫಲರಾಗಿದ್ದಾರೆ. ಕಾಂಗ್ರೆಸ್ ಪಕ್ಷ ತಮಿಳುನಾಡಿನ ಏಜೆಂಟ್‌ನಂತೆ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ನದಿ ನೀರು ಹೋರಾಟ, ಮಾಜಿ ಸಿಎಂ ಬಿಎಸ್‌ವೈ ಮತ್ತು ಬೊಮ್ಮಾಯಿ ಅರೆಸ್ಟ್
ತಮಿಳುನಾಡಿಗೆ ನೀರು ಬಿಡುವುದರಿಂದ ಬೆಂಗಳೂರು ಮತ್ತು ಮೈಸೂರಿಗೆ ಕುಡಿಯುವ ನೀರಿಗೆ ಅಭಾವವಾಗಲಿದೆ. ಆದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ಹಗಲು-ರಾತ್ರಿ ಕಾವೇರಿ ನೀರು ಬಿಟ್ಟು ನಮ್ಮನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ. ಈ ಮೂಲಕ ತಮಿಳುನಾಡನ್ನು ಸಂತುಷ್ಟಿಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಯೋಗ್ಯತೆ ಇದ್ದರೆ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದರೆ, ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಆಗ್ರಹಿಸಿದರು.
ಜನರ ಹಿತ ಕಡೆಗಣಿಸಿ ಚೆಲ್ಲಾಟವಾಡುತ್ತಿರುವ ರಾಜ್ಯ ಸರ್ಕಾರದ ಆಡಳಿತ ವೈಖರಿ ಖಂಡಿಸಿ ಇಂದು ಸಾಂಕೇತಿಕ ಹೋರಾಟ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಬೆಂಗಳೂರಿನಾದ್ಯಂತ ಹೋರಾಟ ಮಾಡಲಿದ್ದೇವೆ. ಪಕ್ಷದ ಶಾಸಕರು, ಸಂಸದರು, ಮುಖಂಡರು ಸೇರಿ ಬೆಂಗಳೂರಿನಲ್ಲಿ ದೊಡ್ಡ ಹೋರಾಟ ಮಾಡುತ್ತೇವೆ. ತಮಿಳುನಾಡಿಗೆ ಒಂದು ಹನಿ ನೀರನ್ನೂ ಬಿಡಬಾರದು. ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡಬೇಕು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಇದನ್ನೇ ಹೇಳಿದ್ದಾರೆ. ತಮಿಳುನಾಡಿಗೆ ಒಂದೇ ಒಂದು ಹನಿ ನೀರು ಬಿಡುವ ಸ್ಥಿತಿಯಲ್ಲಿ ನಾವು ಇಲ್ಲ. ಜಲಾಶಯಗಳು ಖಾಲಿಯಾಗಿವೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡುವುದು ಸರಿಯಲ್ಲ ಎಂದರು.