ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಹಾಗೂ ದೀಪಾ ಭಾಸ್ತಿ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಸೋಮವಾರ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.

ಬೆಂಗಳೂರು (ಜೂ.02): ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಹಾಗೂ ದೀಪಾ ಭಾಸ್ತಿ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಸೋಮವಾರ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.

ಬೆಳಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಭಾಧ್ಯಕ್ಷ ಯು.ಟಿ. ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್.ತಂಗಡಗಿ ಅವರು ಬೂಕರ್ ಪ್ರಶಸ್ತಿ ವಿಜೇತರಿಗೆ ಸನ್ಮಾನಿಸಿ ಗೌರವಿಸಲಿದ್ದಾರೆ.

ಲೇಖಕಿ ಮತ್ತು ವಕೀಲರೂ ಆಗಿರುವ ಬಾನು ಮುಷ್ತಾಕ್ ಅವರ ‘ಹಾರ್ಟ್ ಲ್ಯಾಂಪ್’ ಕೃತಿಗೆ ಬುಕರ್ ಪ್ರಶಸ್ತಿ ಲಭಿಸಿದೆ. ಕಳೆದ ವಾರವಷ್ಟೇ ಲಂಡನ್‌ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದ್ದರು. 1990ರಿಂದ 2023ರ ನಡುವೆ ಬಾನು ಮುಷ್ತಾಕ್ ಅವರು ಬರೆದ 12 ಕತೆಗಳ ಸಂಗ್ರಹದ ಪುಸ್ತಕವೇ ಹಾರ್ಟ್‌ ಲ್ಯಾಂಪ್. ದಕ್ಷಿಣ ಭಾರತದ ಮುಸ್ಲಿಂ ಸಮುದಾಯದ ಮಹಿಳೆಯರ ದೈನಂದಿನ ಜೀವನದ ಅನುಭವಗಳನ್ನು ಈ ಕೃತಿ ಒಳಗೊಂಡಿದೆ.

ಬಾನು ಅವರಿಗೆ ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿ ಅನೇಕ ಪ್ರಶಸ್ತಿಗಳು ಸಂದಿವೆ. ಪ್ರತಿಷ್ಠಿತ ಪ್ರಶಸ್ತಿ ಬಂದ ಬ‍ಳಿಕ ಹಾರ್ಟ್ ಲ್ಯಾಂಪ್ ಪುಸ್ತಕ ಮಾರಾಟ ಗಣನೀಯವಾಗಿ ಏರಿಕೆಯಾಗಿದೆ. ಶಿಕ್ಷಕಿ, ಪತ್ರಕರ್ತೆ, ವಕೀಲೆಯಾಗಿರುವ ಬಾನು ಅವರ ಕನ್ನಡ ಪುಸ್ತಕಗಳು ಇಂಗ್ಲಿಷ್, ಉರ್ದು, ಹಿಂದಿ, ತಮಿಳು, ಮಲಯಾಳಂ ಭಾಷೆಗೂ ಅನುವಾದಗೊಂಡಿವೆ.