ಕಾಂಗ್ರೆಸ್ ಸರ್ಕಾರ ಡಿಎಂಕೆಯ ಬಿ ಟೀಂ: ಮಾಜಿ ಸಿಎಂ ಕುಮಾರಸ್ವಾಮಿ
ಕಾವೇರಿ ಹೋರಾಟವನ್ನು ಹತ್ತಿಕ್ಕುತ್ತಿರುವ ಸರ್ಕಾರದ ಕ್ರಮ ಸರಿಯಲ್ಲ. ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಈಗ ಕಾವೇರಿ ನೀರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಸರ್ಕಾರದ ಕಿಡಿಗೇಡಿತನದ ಪರಮಾವಧಿ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು(ಸೆ.27): ಕಾಂಗ್ರೆಸ್ ಸರ್ಕಾರ ಕನ್ನಡಿಗರ ಸರ್ಕಾರವೋ ಅಥವಾ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರ್ಕಾರವೋ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ. ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಕಾಂಗ್ರೆಸ್ ಪಕ್ಷವು ತಮಿಳುನಾಡಿನ ಡಿಎಂಕೆ ಪಕ್ಷದ ಬಿ ಟೀಂ ಎಂದು ಅವರು ಪ್ರಕಟಣೆ ಮೂಲಕ ಟಾಂಗ್ ನೀಡಿದ್ದಾರೆ.
ಕಾವೇರಿ ಹೋರಾಟವನ್ನು ಹತ್ತಿಕ್ಕುತ್ತಿರುವ ಸರ್ಕಾರದ ಕ್ರಮ ಸರಿಯಲ್ಲ. ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಈಗ ಕಾವೇರಿ ನೀರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಸರ್ಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾವೇರಿ ಕಿಚ್ಚು: ಇಂಡಿಯಾ ಮೈತ್ರಿಕೂಟದ ಹಿತ ಕಾಪಾಡಲು ರಾಜ್ಯದ ರೈತರ ಹಿತ ಬಲಿ, ಬೊಮ್ಮಾಯಿ
ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗಾರರನ್ನು ಬಂಧಿಸಿರುವುದು ಖಂಡನೀಯ. ಇದೇನು ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಯಾರಿಗೆ ಎಂದು ಕಿಡಿಕಾರಿದ್ದಾರೆ.