ನ್ಯಾಶನಲ್ ಹೆರಾಲ್ಡ್ ಪತ್ರಿಕೆಯ ವಿಚಾರದಲ್ಲಿ ಜಾರಿ ನಿರ್ದೇಶನಾಲಯದಿಂದ ಕಾಂಗ್ರೆಸ್ ಹೈಕಮಾಂಡ್ ನಾಯಕ ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಆಹ್ವಾನಿಸಿದ್ದನ್ನು ಖಂಡಿಸಿ ಶುಕ್ರವಾರ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಗ್ರ ಪ್ರತಿಭಟನೆ ನಡೆಸಿದರು.
ಬೆಂಗಳೂರು (ಜೂ.18): ನ್ಯಾಶನಲ್ ಹೆರಾಲ್ಡ್ ಪತ್ರಿಕೆಯ ವಿಚಾರದಲ್ಲಿ ಜಾರಿ ನಿರ್ದೇಶನಾಲಯದಿಂದ ಕಾಂಗ್ರೆಸ್ ಹೈಕಮಾಂಡ್ ನಾಯಕ ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಆಹ್ವಾನಿಸಿದ್ದನ್ನು ಖಂಡಿಸಿ ಶುಕ್ರವಾರ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಗ್ರ ಪ್ರತಿಭಟನೆ ನಡೆಸಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಜಕೀಯ ವಿರೋಧಿಗಳ ಹತ್ತಿಕ್ಕಲು ಇಡಿ, ಆದಾಯ ತೆರಿಗೆ ಇಲಾಖೆ, ಸಿಬಿಐ ಸೇರಿದಂತೆ ಕೇಂದ್ರ ಏಜೆನ್ಸಿಗಳ ದುರುಪಯೋಗ ಮಾಡಿಕೊಳ್ಳುತ್ತಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ವಿರುದ್ಧ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಈ ವೇಳೆ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ಹಾವೇರಿ, ಕೊಪ್ಪಳ, ಗದಗ, ವಿಜಯನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಬೀದರ್, ಮೈಸೂರು, ಚಾಮರಾಜನಗರ, ರಾಯಚೂರು, ಶಿವಮೊಗ್ಗ ಸೇರಿದಂತೆ ಅನೇಕ ಕಡೆಗಳಲ್ಲಿ ನಡೆದ ಪ್ರತಿಭಟನೆಗಳಲ್ಲಿ ಕಾಂಗ್ರೆಸ್ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಹುಬ್ಬಳ್ಳಿ-ಧಾರವಾಡ, ಮೈಸೂರು, ಮಂಗಳೂರು, ವಿಜಯಪುರ, ಚಿತ್ರದುರ್ಗ, ಶಿವಮೊಗ್ಗ ಸೇರಿದಂತೆ ಹಲವು ಕಡೆ ಪ್ರತಿಭಟನಾನಿರತರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿರುವ ಘಟನೆಗಳು ನಡೆದವು.
'ಬಿಜೆಪಿ ದುರಾಡಳಿತ, ಜೆಡಿಎಸ್ ಕಿತ್ತಾಟದಿಂದ ಕಾಂಗ್ರೆಸ್‌ಗೆ ಅಧಿಕಾರ'
ಚಿತ್ರದುರ್ಗದಲ್ಲಿ ಚಕಮಕಿ: ಚಿತ್ರದುರ್ಗದಲ್ಲಿ ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಮತ್ತೊಂದು ಗುಂಪು ನೇರವಾಗಿ ಜಿಲ್ಲಾಧಿಕಾರಿ ಕಚೇರಿಯತ್ತ ತೆರಳಿ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಬಾಗಿಲಲ್ಲೇ ತಡೆದರು. ಇದರಿಂದ ಕೆಲ ಸಮಯ ತಳ್ಳಾಟ, ನೂಕಾಟ ನಡೆದಿದ್ದು ಪೊಲೀಸರು ಹಾಕಿದ ಬ್ಯಾರಿಕೇಡ್ ತಳ್ಳಿ ಪ್ರತಿಭಟನಾಕಾರರು ಒಳ ಹೋದರು. ವಿಷಯ ತಿಳಿದ ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸುವ ಮೂಲಕ ಪರಿಸ್ಥಿತಿ ತಿಳಿಗೊಳಿಸಿದರು.
ಶಿವಮೊಗ್ಗದಲ್ಲೂ ಹೈಡ್ರಾಮಾ: ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ತಡೆದರು. ಈ ವೇಳೆ ಭಾರಿ ಹೈಡ್ರಾಮ, ನೂಕಾಟ, ತಳ್ಳಾಟ ಉಂಟಾಗಿದ್ದು ಹಲವು ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು. ಇದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಬಸ್‌ಗೆ ಅಡ್ಡಲಾಗಿ ಕುಳಿತು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇದರಿಂದಾಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಸಿದ್ದರಾಮಯ್ಯ ವಿರುದ್ಧ ಅಟ್ರಾಸಿಟಿ ಕೇಸ್, ಬಂಧಿಸಿ ನ್ಯಾಯ ಒದಗಿಸುವಂತೆ ಒತ್ತಾಯ
ಮೈಸೂರಿನಲ್ಲಿ ಶಾಸಕ ತನ್ವೀರ್ ಸೇಠ್, ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು ನೇತೃತ್ವದಲ್ಲಿ ಆದಾಯ ತೆರಿಗೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಮೆರವಣಿಗೆ ತೆರಳುತ್ತಿದ್ದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು. ಇನ್ನು ಬೀದರ್‌ನಲ್ಲಿ ಪ್ರತಿಭಟನೆ ನಡೆಸಿದ ಶಾಸಕ ಅರವಿಂದಕುಮಾರ ಅರಳಿ, ಡಾ. ಚಂದ್ರಶೇಖರ ಪಾಟೀಲ್, ಭೀಮರಾವ್ ಪಾಟೀಲ್, ಶರಣು ಮೋದಿ ಸಹ ಬಂಧಿಸಿ ಬಿಡುಗಡೆಗೊಳಿಸಿದರು. ಚಾಮರಾಜನಗರದಲ್ಲಿ ಶಾಸಕ ಪುಟ್ಟರಂಗಶೆಟ್ಟಿನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಮಾನವ ಸರಪಳಿ ರಚಿಸಿದ ಪ್ರತಿಭಟನಾಕಾರರು ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.
