ಬೆಂಗಳೂರು(ಆ.29): ಬಿಬಿಎಂಪಿ ಚುನಾವಣೆಯನ್ನು ಮುಂದೂಡುವ ಪ್ರಯತ್ನಗಳು ನಡೆಯುತ್ತಿರುವ ಹೊತ್ತಿನಲ್ಲೆ, ಚುನಾವಣೆ ನಡೆಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಕಾಂಗ್ರೆಸ್‌ನ ಮಾಜಿ ಮೇಯರ್‌ಗಳು ನ್ಯಾಯಾಲಯದ ಮೊರೆ ಹೋಗಲು ತೀರ್ಮಾನಿಸಿದ್ದಾರೆ.

ರಾಜ್ಯ ಸರ್ಕಾರ ಕೂಡಲೇ ಪಾಲಿಕೆಯ ಚುನಾವಣೆ ನಡೆಸುವ ಬಗ್ಗೆ ಅಧಿಸೂಚನೆ ಹೊರಡಿಸಬೇಕು. ಇಲ್ಲವಾದರೆ, ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು ಕಾಂಗ್ರೆಸ್‌ನ ಮಾಜಿ ಮೇಯರ್‌ಗಳಾದ ಎಂ.ರಾಮಚಂದ್ರಪ್ಪ ಮತ್ತು ಪಿ.ಆರ್‌.ರಮೇಶ್‌ ನಿರ್ಧರಿಸಿದ್ದಾರೆ.

ಕಾಂಗ್ರೆಸ್‌, ಜೆಡಿಎಸ್‌, ಪಕ್ಷೇತರರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ಭರ್ಜರಿ ಪ್ಲಾನ್‌..!

ಈಗಾಗಲೇ ಬಿಬಿಎಂಪಿ ಚುನಾವಣೆ ಸಂಬಂಧ ರಾಜ್ಯ ಚುನಾವಣಾ ಆಯೋಗವು ಮೀಸಲಾತಿ ಪಟ್ಟಿ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶ ನೀಡುವಂತೆ ನ್ಯಾಯಾಲಯದಲ್ಲಿ ಕೋರಿದೆ. ಇದೀಗ ಚುನಾವಣಾ ಆಯೋಗ ಯಾವ ವಿಷಯಗಳನ್ನು ಪ್ರಸ್ತಾಪ ಮಾಡಲಿದೆ ಮತ್ತು ಇದಕ್ಕೆ ಸರ್ಕಾರ ಹೇಗೆ ಸ್ಪಂದಿಸಲಿದೆ ಎಂಬುದನ್ನು ನೋಡಿಕೊಂಡು ನಂತರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲು ಇಬ್ಬರು ಮಾಜಿ ಮೇಯರ್‌ಗಳು ಕಾಯುತ್ತಿದ್ದಾರೆ.

ಈ ಹಿಂದೆ ಬಿಜೆಪಿ ಅಧಿಕಾರವಧಿಯಲ್ಲಿ ಬಿಬಿಎಂಪಿ ಅಧಿಕಾರವಧಿ ಮುಗಿದರೂ ಸಕಾಲಕ್ಕೆ ಚುನಾವಣೆ ಮಾಡದೇ ಆಡಳಿತಾಧಿಕಾರಿ ನೇಮಿಸಲಾಗಿತ್ತು. ಆ ಸಂದರ್ಭದಲ್ಲಿ ಪಿ.ಆರ್‌.ರಮೇಶ್‌ ಅವರು ಪಾಲಿಕೆಗೆ ಚುನಾವಣೆ ನಡೆಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕೊನೆಗೆ ನ್ಯಾಯಾಲಯವೂ ಚುನಾವಣೆ ನಡೆಸಲು ಸರ್ಕಾರಕ್ಕೆ ಸೂಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.