ಬೆಂಗಳೂರು (ಆ.18) : ರಾಜ್ಯದ ವಿವಿಧೆಡೆ ಕೊರೋನಾ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮುಖ್ಯ ಶಿಕ್ಷಕರನ್ನು ವಾಪಸ್‌ ಕರೆಸಿಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಈ ಸಂಬಂಧ ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಇಲಾಖೆ ಆಯುಕ್ತ ಡಾ.ಕೆ.ಜಿ. ಜಗದೀಶ್‌ ಅವರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ವಿದ್ಯಾಗಮ ಹಾಗೂ ಮಧ್ಯಾಹ್ನದ ಬಿಸಿಯೂಟದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕಿರುವ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮುಖ್ಯ ಶಿಕ್ಷಕರನ್ನು ಕೊರೋನಾ ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಸೂಚಿಸಿದ್ದಾರೆ.

ಗುಡ್‌ ನ್ಯೂಸ್: ದೇಶದಲ್ಲಿ ಕೊರೋನಾ ಆಬ್ಬರ ಇಳಿಕೆ!..

ಸರ್ಕಾರಿ ಶಾಲಾ ಮತ್ತು ಮುಖ್ಯ ಶಿಕ್ಷಕರನ್ನು ಕೊರೋನಾ ತುರ್ತು ಸೇವೆಗೆ ಬಳಸಿಕೊಂಡಿರುವುದರಿಂದ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಕಲಿಕೆಯನ್ನು ಮುಂದುವರಿಸುವ ಯೋಜನೆಯಾದ ವಿದ್ಯಾಗಮ ಅನುಷ್ಠಾನ, ಮಧ್ಯಾಹ್ನದ ಉಪಾಹಾರ ಯೋಜನೆಯ ಅನುಷ್ಠಾನವು ಸಮರ್ಪಕವಾಗಿ ಅನುಷ್ಠಾನವಾಗಲು ಶಾಲೆಗಳಲ್ಲಿ ಕನಿಷ್ಠ ಮುಖ್ಯ ಶಿಕ್ಷಕರ ಲಭ್ಯತೆ ಅವಶ್ಯಕವಾಗಿದೆ.

ಈ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮುಖ್ಯ ಶಿಕ್ಷಕರನ್ನು ಕೊರೋನಾ ಜವಾಬ್ದಾರಿಯಿಂದ ಮುಕ್ತಗೊಳಿಸುವಲ್ಲಿ ಅವಶ್ಯಕ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಸೂಚಿಸುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.