ಬೆಳಗಾವಿ(ಏ.15): ಕೋವಿಡ್‌ ನಿಯಂತ್ರಣಕ್ಕೆ ಅಗತ್ಯಬಿದ್ದರೆ ಮತ್ತಷ್ಟುಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆಯೇ ಹೊರತು ಮತ್ತೆ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿಗೊಳಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ವಾರಾಂತ್ಯ ಲಾಕ್‌ಡೌನ್‌ ಜಾರಿ ಬಗ್ಗೆಯೂ ಚಿಂತನೆ ಇಲ್ಲ ಎಂದೂ ಅವರು ತಿಳಿಸಿದ್ದಾರೆ.

ಬುಧವಾರ ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್‌ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಬದ್ಧವಿದೆ. ಆದರೆ, ಲಾಕ್‌ಡೌನ್‌ ಜಾರಿ ಮಾಡಲಾಗುವುದು ಎಂಬ ಸುದ್ದಿ ಕೇವಲ ವದಂತಿ. ಈ ತಿಂಗಳ 18ರಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಸಭೆಯಲ್ಲಿ ಲಾಕ್‌ಡೌನ್‌ ವಿಚಾರ ಬಿಟ್ಟು ಇನ್ನುಳಿದ ಕ್ರಮಗಳ ಕುರಿತು ಚರ್ಚಿಸಲಾಗುವುದು’ ಎಂದರು.

‘ಸಭೆಯಲ್ಲಿ ಮಹಾರಾಷ್ಟ್ರದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಸಮಾಲೋಚನೆ ನಡೆಸಲಾಗುವುದು. ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳ ಪರಿಸ್ಥಿತಿ ಕುರಿತು ಚರ್ಚೆ ನಡೆಸಲಾಗುತ್ತದೆ. ಪ್ರತಿಪಕ್ಷದವರು ಯಾವ ಸಲಹೆ ನೀಡುತ್ತಾರೆಯೋ ಅವುಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಾಗುವುದು’ ಎಂದು ಮುಖ್ಯಮಂತ್ರಿಗಳು ಹೇಳಿದರು.

‘ಈಗಾಗಲೇ ಅಧಿಕಾರಿಗಳ ಜತೆ ಸಭೆ ನಡೆಸಿ ಪರಿಸ್ಥಿತಿ ಕುರಿತು ಚರ್ಚೆ ಮಾಡಲಾಗಿದೆ. ಲಾಕ್‌ಡೌನ್‌ ಬಿಟ್ಟು ಉಳಿದೆಲ್ಲಾ ಕೆಲಸ ಮಾಡಬೇಕು ಎನ್ನುವ ವಿಚಾರ ಮನಸ್ಸಲ್ಲಿದೆ. ಲಾಕ್‌ಡೌನ್‌ ಜಾರಿ ಮಾಡುವಂತೆ ಕೊರೋನಾ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿಲ್ಲ. ಕೆಲವು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಿದೆ. ಸರ್ವಪಕ್ಷದ ಸಭೆಯಲ್ಲಿ ಎಲ್ಲರ ಅಭಿಪ್ರಾಯಗಳನ್ನು ಪಡೆದುಕೊಂಡ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

‘ಯಾವ ಪುರುಷಾರ್ಥಕ್ಕಾಗಿ ಸರ್ವಪಕ್ಷಗಳ ಸಭೆ ಮಾಡುತ್ತಿದ್ದಾರೆ?’ ಎಂಬ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಭೆಗೆ ಬಂದಾಗ ಚರ್ಚೆ ಮಾಡುತ್ತೇನೆ. ಸಭೆಯಲ್ಲಿ ಕುಮಾರಸ್ವಾಮಿ ಅವರ ಪ್ರಶ್ನೆಗೆ ಉತ್ತರ ಕೊಡುತ್ತೇನೆ ಎಂದು ತೀಕ್ಷ$್ಣವಾಗಿ ಹೇಳಿದರು.

ಅಗತ್ಯವಾದರೆ ರಾತ್ರಿ ಕರ್ಫ್ಯೂ ವಿಸ್ತರಣೆ:

‘ಸದ್ಯ ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಹಾಕಲಾಗಿದೆ. ಅಗತ್ಯವಾದರೆ ಇನ್ನೂ ಕೆಲವು ಜಿಲ್ಲೆಗಳಿಗೆ ಇದನ್ನು ವಿಸ್ತರಣೆ ಮಾಡಲಾಗುವುದು’ ಎಂದು ಇದೇ ವೇಳೆ ಯಡಿಯೂರಪ್ಪ ಮಾಹಿತಿ ನೀಡಿದರು.

‘ಕೊರೋನಾ ನಿಯಂತ್ರಣ ಕೇವಲ ಸರ್ಕಾರದ ಜವಾಬ್ದಾರಿಯಲ್ಲ. ಇದು ಪ್ರತಿಯೊಬ್ಬರ ಕರ್ತವ್ಯ’ ಎಂದ ಅವರು, ‘ಕೊರೋನಾ ಕಫä್ರ್ಯವನ್ನು ಯಾವ ಜಿಲ್ಲೆಯಲ್ಲಿ ಹೇರಬಹುದು ಎಂಬುದರ ಬಗ್ಗೆ ತಜ್ಞರ ಜತೆ ಚರ್ಚೆ ನಡೆಸಲಾಗುವುದು. ರಾಜ್ಯದ ಜನರು ದಯವಿಟ್ಟು ಕಡ್ಡಾಯವಾಗಿ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ವಾರಾಂತ್ಯ ಲಾಕ್‌ಡೌನ್‌ ಜಾರಿ ಬಗ್ಗೆಯೂ ಚಿಂತನೆ ಇಲ್ಲ’ ಎಂದು ಹೇಳಿದರು.

ರಾಜಧಾನಿಯಲ್ಲಿ 10 ಕೋವಿಡ್‌ ಸೆಂಟರ್‌:

ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಹತ್ತು ಹೊಸ ಕೋವಿಡ್‌ ಆರೈಕೆ ಕೇಂದ್ರಗಳನ್ನು ತೆರೆಯಲು ತೀರ್ಮಾನ ಮಾಡಿದ್ದೇವೆ. ಈ ಹತ್ತು ಕೇಂದ್ರಗಳಲ್ಲಿ ಒಟ್ಟು 1500 ಬೆಡ್‌ ವ್ಯವಸ್ಥೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.