ಭ್ರಷ್ಟಾಚಾರವು ಪ್ರಜಾಪ್ರಭುತ್ವಕ್ಕೆ ಬೆದರಿಕೆಯಾಗಿದೆ. ಇಂಥ ಸಂದರ್ಭದಲ್ಲಿ ನ್ಯಾಯಾಲಯಗಳು ತಮ್ಮ ಹೊಣೆಗಾರಿಕೆ ಗಮನದಲ್ಲಿಕೊಂಡು ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಬೆಂಗಳೂರು (ಅ.04): ಭ್ರಷ್ಟಾಚಾರವು ಪ್ರಜಾಪ್ರಭುತ್ವಕ್ಕೆ ಬೆದರಿಕೆಯಾಗಿದೆ ಮತ್ತು ಅದು ಕಾನೂನು ಸುವ್ಯವಸ್ಥೆ ದುರ್ಬಲಗೊಳಿಸುತ್ತದೆ. ಇಂಥ ಸಂದರ್ಭದಲ್ಲಿ ನ್ಯಾಯಾಲಯಗಳು ತಮ್ಮ ಹೊಣೆಗಾರಿಕೆ ಗಮನದಲ್ಲಿಕೊಂಡು ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಲಂಚ ಸ್ವೀಕರಿಸಿದ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆಳವಡಿ ಗ್ರಾಮದಲ್ಲಿ ಗ್ರಾಮ ಲೆಕ್ಕಿಗನಾಗಿದ್ದ ಶಿವನಗೌಡ ವಸಂದ್ ಅವರನ್ನು ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೆಎಟಿ ರದ್ದುಪಡಿಸಿತ್ತು.
ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರ ನೇತೃತ್ವದ ಪೀಠ, ಭ್ರಷ್ಟಾಚಾರ ಆರೋಪದ ಮೇಲಿನ ದುರ್ನಡತೆ ಪ್ರಕರಣಗಳನ್ನು ನ್ಯಾಯಾಲಯಗಳು ಮತ್ತು ನ್ಯಾಯಾಧಿಕರಣಗಳು ಹಗುರವಾಗಿ ಪರಿಗಣಿಸಬಾರದು ಎಂದು ಮಾರ್ಮಿಕವಾಗಿ ನುಡಿದಿದೆ. ಅಲ್ಲದೆ, ಶಿವನಗೌಡ ವಸಂದ್ ಅವರನ್ನು ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸಿದ್ದ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಪ್ರಕರಣವೇನು?
ಕೆಳವಡಿ ಗ್ರಾಮದಲ್ಲಿ 2011ರಲ್ಲಿ ಗ್ರಾಮ ಲೆಕ್ಕಿಗನಾಗಿ ಶಿವನಗೌಡ ವಸಂದ್, ಕಂದಾಯ ದಾಖಲೆ ಸರಿಪಡಿಸಲು ವಿಜಯಕುಮಾರ್ ಹನಮಪ್ಪ ಎಂಬುವರಿಂದ 2,500 ರು. ಲಂಚ ಕೇಳಿದ್ದರು. ಈ ಬಗ್ಗೆ ವಿಜಯ್ ಕುಮಾರ್ ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ಶಿವನಗೌಡ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿ ಬಂಧಿಸಿದ್ದರು. ಪ್ರಕರಣ ಕುರಿತು ಜಿಲ್ಲಾಧಿಕಾರಿ ಸಲ್ಲಿಸಿದ್ದ ಇಲಾಖಾ ವಿಚಾರಣಾ ವರದಿ ಆಧರಿಸಿ 2020ರ ಅ.21ರಂದು ಶಿವನಗೌಡ ಅವರನ್ನು ಸೇವೆಯಿಂದ ಕಡ್ಡಾಯವಾಗಿ ನಿವೃತ್ತಿಗೊಳಿಸಿ ಸರ್ಕಾರ ಆದೇಶಿಸಿತ್ತು. ಈ ಆದೇಶವನ್ನು ಕೆಎಟಿ ರದ್ದುಪಡಿಸಿತ್ತು.
