ಬೆಂಗಳೂರು (ಜೂ.08):  ಶಾಸಕ ಮತ್ತು ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತವರ ಮೂವರು ಬೆಂಬಲಿಗರ ವಿರುದ್ಧದ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗದ ಅನುಮತಿ ಪಡೆಯದೆ ಸಕಲೇಶಪುರ ತಾಲೂಕು ಬಾಗೇಹಳ್ಳಿಯಲ್ಲಿ ಕಾರ್ಯಕರ್ತರನ್ನು ಸೇರಿಸಿ ಸಭೆ ನಡೆಸುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಇವರ ಮೇಲಿತ್ತು. ಪ್ರಕರಣ ರದ್ದುಪಡಿಸುವಂತೆ ಕೋರಿ ಸಿ.ಟಿ.ರವಿ ಮತ್ತವರ ಮೂವರು ಬೆಂಬಲಿಗರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್‌ದತ್‌ ಯಾದವ್‌, ಅವರಿದ್ದ ಏಕ ಸದಸ್ಯ ನ್ಯಾಯಪೀಠ ಅರ್ಜಿಗಳನ್ನು ಪುರಸ್ಕರಿಸಿ ಈ ಆದೇಶ ಮಾಡಿತು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ: ದಿಲ್ಲಿಯಿಂದ ಸಿಟಿ ರವಿ ಮಹತ್ವದ ಹೇಳಿಕೆ

ದೂರುದಾರರಾಗಿರುವ ಚುನಾವಣಾಧಿಕಾರಿ ಮ್ಯಾಜಿಸ್ಪ್ರೇಟ್‌ ಕೋರ್ಟ್‌ನಲ್ಲಿ ದೂರು ದಾಖಲಾಗಿಸಬೇಕಿತ್ತು. ಆದರೆ, ನೇರವಾಗಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ. ಆದ್ದರಿಂದ ದೂರು ದಾಖಲೆ ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆಯಾಗಿರುವ ಕಾರಣ ಅದು ವಿಚಾರಣೆಗೆ ಯೋಗ್ಯವಾಗಿಲ್ಲ ಎಂದು ತಿಳಿಸಿ ಅರ್ಜಿದಾರರ ವಿರುದ್ಧದ ಪ್ರಕರಣವನ್ನು ನ್ಯಾಯಪೀಠ ರದ್ದುಪಡಿಸಿತು. ಅಲ್ಲದೆ, ದೂರುದಾರರು ಹೊಸದಾಗಿ ಕಾನೂನು ಪ್ರಕಾರ ದೂರು ದಾಖಲಿಸಲು ಸ್ವತಂತ್ರರಾಗಿದ್ದಾರೆ ಎಂದು ನ್ಯಾಯಪೀಠ ಇದೇ ವೇಳೆ ಸ್ಪಷ್ಟಪಡಿಸಿದೆ.

ಪ್ರಕರಣದ ವಿವರ :  ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ 2019ರ ಏ.7ರಂದು ಮಧ್ಯಾಹ್ನ 1 ಗಂಟೆಯ ಸಮಯದಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿ ಮತ್ತವರ ಬೆಂಬಲಿಗರು ಸಕಲೇಶಪುರ ತಾಲೂಕಿನ ಬಾಗೆಹಳ್ಳಿಯಲ್ಲಿ ಸುಮಾರು 80ರಿಂದ 100 ಕಾರ್ಯಕರ್ತರನ್ನು ಸೇರಿಸಿ ಸಭೆ ನಡೆಸಿದರು. ಆದರೆ, ಸಭೆ ನಡೆಸಲು ಚುನಾವಣಾ ಆಯೋಗದಿಂದ ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ. ಇದು ನೀತಿ ಸಂಹಿತೆಯ ಉಲ್ಲಂಘನೆ ಎಂದು ಆರೋಪಿಸಿ ಚನಾವಣಾಧಿಕಾರಿ ಸಕಲೇಶಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಪ್ರಕರಣ ಜನ ಪ್ರತಿನಿಧಿಗಳ ನ್ಯಾಯಾಲಯದ ಮುಂದೆ ವಿಚಾರಣೆ ಹಂತದಲ್ಲಿತ್ತು.