ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ದಾವಣಗೆರೆಯ ಇಂಜಿನಿಯರ್ ಹಾಗೂ ಬೆಂಗಳೂರಿನ ಆಟೋ ಚಾಲಕನನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ.

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಪ್ರಕಟಿಸಿ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಪೊಲೀಸರು ತನಿಖೆಯಲ್ಲಿ ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತಷ್ಟು ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಸೊಂಟದ ಕೆಳಗಿನ ಪದ ಬಳಸಿ ಕಮೆಂಟ್

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ಹೆಸರನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ, ನಿಂದನಾತ್ಮಕ ಹಾಗೂ ಮಾನಹಾನಿಕರ ಸಂದೇಶಗಳನ್ನು ನಿರಂತರವಾಗಿ ಹರಡಲಾಗುತ್ತಿತ್ತು. ಈ ಸಂದೇಶಗಳು ಮಹಿಳೆಯ ಗೌರವಕ್ಕೆ ಧಕ್ಕೆ ತರುವಂತಿದ್ದು, ಸಾರ್ವಜನಿಕವಾಗಿ ಅವಮಾನ ಮಾಡುವ ಉದ್ದೇಶದಿಂದಲೇ ಪೋಸ್ಟ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಇದರಿಂದ ಬೇಸರಗೊಂಡ ವಿಜಯಲಕ್ಷ್ಮೀ ಸೈಬರ್ ಪೊಲೀಸ್ ಠಾಣೆ ಮೆಟ್ಟಲೇರಿದ್ದರು.

ದೂರು ದಾಖಲಿಸಿಕೊಂಡ ಬಳಿಕ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸೈಬರ್ ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿದರು. ಸಾಮಾಜಿಕ ಜಾಲತಾಣಗಳ ಖಾತೆಗಳು, ಮೊಬೈಲ್ ಸಂಖ್ಯೆ, ತಾಂತ್ರಿಕ ಮಾಹಿತಿಗಳನ್ನು ಪರಿಶೀಲಿಸಿದ ವೇಳೆ ಈ ಕೃತ್ಯದಲ್ಲಿ ಚಂದ್ರು ಮತ್ತು ನಿಖಿಲ್ ಎಂಬ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಓರ್ವ ದಾವಣಗೆರೆ, ಮತ್ತೋರ್ವ ಬೆಂಗಳೂರು

ಇಬ್ಬರು ಆರೋಪಿಗಳ ಬಂಧನದಲ್ಲಿ ಓರ್ವ ದಾವಣಗೆರೆ ಮೂಲದ ನಿತಿನ್ ಮತ್ತೊಬ್ಬ ಬೆಂಗಳೂರಿನ ಚಿಕ್ಕಬಾಣಾವರ ಮೂಲದ ಚಂದ್ರು ಎಂಬವರಾಗಿದ್ದಾರೆ. ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದ ನಿತಿನ್, ಅಶ್ಲೀಲ ಪದ ಬಳಸಿ ನಿಂದಿಸಿದ್ದ. ಮತ್ತೊಬ್ಬ ಆರೋಪಿ ಚಂದ್ರು ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದಾನೆ. ಸದ್ಯ ಇಬ್ಬರನ್ನ ಬಂಧಿಸಿ ಸೈಬರ್ ಕ್ರೈಮ್ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅಶ್ಲೀಲ ಪದಗಳಿಂದ ನಿಂದನೆ ಬಳಿಕ ಪೋಸ್ಟ್ ಡಿಲಿಟ್ ಮಾಡಲಾಗಿದ್ದು, ಐಪಿ ಅಡ್ರೆಸ್ ಟ್ರೇಸ್ ಮಾಡಿ ಬಂಧನವಾಗಿದೆ.

ಆರೋಪಿಗಳು ಸಾಮಾಜಿಕ ಜಾಲತಾಣಗಳ ದುರುಪಯೋಗ ಮಾಡಿಕೊಂಡು ಅಶ್ಲೀಲ ಹಾಗೂ ಅವಹೇಳನಕಾರಿ ಪದಗಳನ್ನು ಬಳಸಿ ನಿಂದನೆ ನಡೆಸಿರುವುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಆರೋಪಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.

ಪ್ರಕರಣದ ತನಿಖೆ ಮುಂದುವರಿದಿದ್ದು, ಇನ್ನೂ ಹಲವರನ್ನು ಸೈಬರ್ ಪೊಲೀಸರು ಬಂಧಿಸಲು ಬಲೆ ಬೀಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಗಳ ಗೌರವಕ್ಕೆ ಧಕ್ಕೆ ತರುವ, ಅಶ್ಲೀಲ ಹಾಗೂ ನಿಂದನಾತ್ಮಕ ಸಂದೇಶಗಳನ್ನು ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೈಬರ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳ ಬಳಕೆದಾರರು ಜವಾಬ್ದಾರಿಯಿಂದ ವರ್ತಿಸಬೇಕು. ಆನ್‌ಲೈನ್‌ ಮೂಲಕ ಯಾರನ್ನಾದರೂ ನಿಂದಿಸುವುದು, ಅವಮಾನಿಸುವುದು ಕಾನೂನುಬಾಹಿರವಾಗಿದ್ದು, ಇಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಬಿಡಲಾಗುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.