ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ವಾರ್ಡ್‌ಗಳಲ್ಲಿ ರೋಗಿಗಳ ಆರೋಗ್ಯ ವಿಚಾರಿಸಿ, ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದ ಅವರು, ಗುಣಮಟ್ಟದ ಸೇವೆ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಾವಣಗೆರೆ (ಮೇ.17): ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಶನಿವಾರ ಇಲ್ಲಿನ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳು ಹಾಗೂ ವಾರ್ಡ್‌ಗಳಲ್ಲಿ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಸ್ಪತ್ರೆಯ ಪ್ರತಿಯೊಂದು ವಾರ್ಡ್‌ಗೆ ಭೇಟಿ ನೀಡಿದ ಸಂಸದರು, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿ, ಅವರಿಗೆ ನೀಡಲಾಗುತ್ತಿರುವ ವೈದ್ಯಕೀಯ ಸೇವೆಗಳ ಕುರಿತು ಮಾಹಿತಿ ಪಡೆದರು. ಜೊತೆಗೆ ರೋಗಿಗಳ ಸಮಸ್ಯೆಗಳು ಹಾಗೂ ಆಸ್ಪತ್ರೆಯಲ್ಲಿನ ಮೂಲ ಸೌಲಭ್ಯಗಳು, ಸೇವಾವೈಖರಿ ಬಗ್ಗೆ ತಿಳಿದುಕೊಂಡರು.

ಆಸ್ಪತ್ರೆಯಲ್ಲಿ ಸ್ವಚ್ಛತೆ, ಔಷಧಿಗಳ ಲಭ್ಯತೆ, ವೈದ್ಯರು ಹಾಗೂ ಸಿಬ್ಬಂದಿ ಕಾರ್ಯವೈಖರಿ ಸೇರಿದಂತೆ ವಿವಿಧ ವ್ಯವಸ್ಥೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಸರ್ಕಾರಿ ಆಸ್ಪತ್ರೆಗಳಿಗೆ ಆಗಮಿಸುವ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಉತ್ತಮ ಚಿಕಿತ್ಸೆ ಮತ್ತು ಮಾನವೀಯ ಸೇವೆ ದೊರಕುವುದು ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಆಸ್ಪತ್ರೆಯ ಆಡಳಿತ ಹೆಚ್ಚಿನ ಗಮನಹರಿಸಬೇಕು ಎಂದು ತಿಳಿಸಿದರು. ಆಸ್ಪತ್ರೆಯ ಕ್ಯಾಂಟೀನ್‌ಗೆ ಭೇಟಿ ನೀಡಿ, ಸ್ವಚ್ಛತೆ ಪರಿಶೀಲನೆ ನಡೆಸಿದರು.

ಸಂಸದರ ದಿಢೀರ್ ಭೇಟಿ ಹಿನ್ನೆಲೆ ಆಸ್ಪತ್ರೆ ಸಿಬ್ಬಂದಿ ಹಾಗೂ ಅಧಿಕಾರಿಗಳಲ್ಲಿ ಚಟುವಟಿಕೆ ಕಂಡುಬಂದಿತು. ರೋಗಿಗಳು ಹಾಗೂ ಸಾರ್ವಜನಿಕರು ಸಂಸದರ ಈ ಪರಿಶೀಲನಾ ಕ್ರಮವನ್ನು ಸ್ವಾಗತಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.