ಇನ್ಮುಂದೆ ಅನೇಕ ಕಿಲೋಮೀಟರ್ ದೂರದಲ್ಲಿ ಇರುವ ಜಿಲ್ಲಾಧಿಕಾರಿ ಕಚೇರಿಗೆ ಕೆಲಸಕ್ಕಾಗಿ ಅಲೆಯುವ ಅಗತ್ಯವಿಲ್ಲ. ತಿಂಗಳಿಗೆ ಒಮ್ಮೆ ಜಿಲ್ಲಾಧಿಕಾರಿಯೇ ಹಳ್ಳಿಗಳಿಗೆ ಭೇಟಿ ನೀಡಲಿದ್ದಾರೆ. 

ಬೆಂಗಳೂರು (ಜ.21):  ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇನ್ನು ಪ್ರತಿ ತಿಂಗಳ ಮೂರನೇ ಶನಿವಾರ ಗ್ರಾಮಗಳಿಗೆ ಭೇಟಿ ನೀಡಿ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸಲು ಹಾಗೂ ಫಲಾನುಭವಿಗಳ ಅರ್ಜಿ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದರೊಂದಿಗೆ ಗ್ರಾಮೀಣ ಭಾಗದ ಜನರು ಪಡಿತರ ಚೀಟಿ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಖಾತೆ ಬದಲಾವಣೆ ಸೇರಿದಂತೆ ಯಾವುದೇ ಸರ್ಕಾರಿ ಸೌಲಭ್ಯ, ಕೆಲಸಗಳಿಗಾಗಿ ಜಿಲ್ಲೆ, ತಾಲೂಕು ಕೇಂದ್ರಗಳ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ ತಿಂಗಳಲ್ಲಿ ಒಂದು ದಿನ ಹಳ್ಳಿಗಳಿಗೇ ಕಚೇರಿಗಳನ್ನು ಸ್ಥಳಾಂತರಿಸಲು ಸರ್ಕಾರ ಮುಂದಾಗಿದೆ.

ಗೋ ಹತ್ಯೆ ನಿಷೇಧ ಕಾಯ್ದೆ‌ ಹಿನ್ನೆಲೆ; ಸರ್ಕಾರಕ್ಕೆ ವಿಶೇಷ ಮನವಿ ಮಾಡಿದ ರೈತರು! .

ಸುತ್ತೋಲೆಯ ಪ್ರಕಾರ, ಜಿಲ್ಲಾಧಿಕಾರಿಗಳು, ಭೂ ದಾಖಲೆಗಳ ಉಪನಿರ್ದೇಶಕರು, ಸಹಾಯಕ ನಿರ್ದೇಶಕರುಗಳು ಆಯಾ ಉಪ ವಿಭಾಗದ ಸಹಾಯಕ ಆಯುಕ್ತರು, ಸಂಬಂಧಪಟ್ಟತಹಶೀಲ್ದಾರರು, ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಿಗರೊಂದಿಗೆ ತಮ್ಮ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಬೇಕು. ಅಲ್ಲಿ ಬೆಳಗ್ಗೆ 10.30ರಿಂದ ಸಂಜೆ 5 ಗಂಟೆವರೆಗೂ ಸಾರ್ವಜನಿಕರಿಗೆ ಲಭ್ಯವಿದ್ದು, ಸಾರ್ವಜನಿಕರು ಸರ್ಕಾರಕ್ಕೆ ಸಲ್ಲಿಸಿರುವ ಅರ್ಜಿಗಳ ವಿಲೇವಾರಿ, ರಸ್ತೆ, ಕುಡಿಯುವ ನೀರು ಸೇರಿದಂತೆ ಜನರ ಕುಂದು ಕೊರತೆಗಳನ್ನು ಆಲಿಸಿ ಪರಿಹರಿಸಲು ತುರ್ತು ಕ್ರಮ ವಹಿಸಬೇಕು ಎಂದು ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.

ಜಿಲ್ಲಾಧಿಕಾರಿ ಯಾವ ತಾಲೂಕಿನ ಗ್ರಾಮಕ್ಕೆ ಭೇಟಿ ನೀಡುತ್ತಾರೋ ಆ ತಾಲೂಕಿನ ತಹಶೀಲ್ದಾರರನ್ನು ಹೊರತುಪಡಿಸಿ ಉಳಿದ ತಾಲೂಕುಗಳ ತಹಶೀಲ್ದಾರರು ತಮ್ಮ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಬೇಕು. ಭೇಟಿಗೂ ಒಂದು ವಾರ ಮೊದಲೇ ಕಂದಾಯ ಅಧಿಕಾರಿಗಳು ಗ್ರಾಮದ ಫಲಾನುಭವಿಗಳು ಸಲ್ಲಿಸಿರುವ ಅರ್ಜಿಗಳನ್ನು ಸಂಗ್ರಹಿಸಿ ವಿಲೇವಾರಿಗೆ ಕ್ರಮ ವಹಿಸಬೇಕು. ಗ್ರಾಮಗಳಿಗೆ ಭೇಟಿ ನೀಡಿದ ವೇಳೆ ಈ ಬಗ್ಗೆ ಫಲಾನುಭವಿಗಳಿಗೆ ಮಾಹಿತಿ ನೀಡಬೇಕು. ಗ್ರಾಮದ ಎಲ್ಲಾ ಪಹಣಿಗಳಲ್ಲಿ ಲೋಪದೋಷಗಳಿವೆಯೇ ಎಂದು ಪರಿಶೀಲಿಸಬೇಕು. ಸಮಸ್ಯೆಗಳಿದ್ದರೆ ಸರಿಪಡಿಸಲು ಸೂಕ್ತ ಆದೇಶ ಮಾಡಬೇಕು. ಗ್ರಾಮಗಳಲ್ಲಿ ಸ್ಮಶಾನ ಸೌಲಭ್ಯವಿಲ್ಲದಿದ್ದರೆ ಒದಗಿಸಿಕೊಡಲು ಕ್ರಮ ಕೈಗೊಳ್ಳಬೇಕು. ಹದ್ದು ಬಸ್ತು, ಪೋಡಿ, ಪೋಡಿ ಮುಕ್ತ ಗ್ರಾಮ, ದರಕಾಸ್ತು ಪೋಡಿ ಮಾಡುವುದು, ಕಂದಾಯ ಗ್ರಾಮಗಳನ್ನು ರಚಿಸುವುದು, ಶಾಲೆ, ಅಂಗನವಾಡಿ, ಎಸ್ಸಿ-ಎಸ್ಟಿವಸತಿ ನಿಲಯಗಳಿಗೆ ಭೇಟಿ ನೀಡಬೇಕು. ಸರ್ಕಾರಿ ಸೌಲಭ್ಯಗಳು ಎಲ್ಲಾ ಅರ್ಹ ಬಡ ಜನರಿಗೆ ತಲುಪುತ್ತಿರುವ ಬಗ್ಗೆ ಪರಿಶೀಲಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.