ಧರ್ಮಸ್ಥಳ ಅಸ್ಥಿಪಂಜರ ಹುಡುಕಾಟ ಪ್ರಕರಣದ ತನಿಖೆಯ ಪ್ರಗತಿ ಪರಿಶೀಲಿಸಲು ಗೃಹ ಸಚಿವ ಡಾ. ಜಿ. ಪರಮೇಶ್ವರ್, ಎಸ್ಐಟಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದಾರೆ. ಉತ್ಖನನ ಮುಂದುವರಿಕೆ ಬಗ್ಗೆ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಬೆಂಗಳೂರು (ಆ.13): ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಧರ್ಮಸ್ಥಳ ಅಸ್ಥಿಪಂಜರ ಹುಡುಕಾಟ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ ಮತ್ತು ಮುಂದಿನ ಕ್ರಮಗಳೇನು ಎಂಬುದರ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಈ ಸಭೆಯಲ್ಲಿ, ತನಿಖೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಪರಮೇಶ್ವರ್, ಉತ್ಖನನ ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಎಸ್ಐಟಿ ಮುಖ್ಯಸ್ಥರ ಅಭಿಪ್ರಾಯ ಪಡೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉತ್ಖನನ ಮುಂದುವರಿಕೆ ಬಗ್ಗೆ ಕುತೂಹಲ:

ಅನಾಮಿಕ ದೂರುದಾರನ ಹೇಳಿಕೆಯ ಆಧಾರದ ಮೇಲೆ ಆರಂಭವಾದ 'ಆಪರೇಷನ್ ಅಸ್ಥಿಪಂಜರ'ದಲ್ಲಿ ಇದುವರೆಗೆ ಸಾಮೂಹಿಕ ಸಮಾಧಿಗಳ ಯಾವುದೇ ಕುರುಹು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ, ಉತ್ಖನನ ಕಾರ್ಯಾಚರಣೆಯನ್ನು ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ಮತ್ತು ಪೊಲೀಸರ ಮಧ್ಯೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರೊಂದಿಗೆ ಚರ್ಚಿಸಿದ ಗೃಹ ಸಚಿವರು, ಈವರೆಗಿನ ತನಿಖೆಯ ಎಲ್ಲಾ ಅಂಶಗಳನ್ನು ಅವರಿಂದ ಪಡೆದುಕೊಂಡಿದ್ದಾರೆ.

ಸರ್ಕಾರದ ಮುಂದಿನ ನಡೆ ಏನು?

ಗೃಹ ಸಚಿವ ಪರಮೇಶ್ವರ್ ಅವರು ಮುಖ್ಯಮಂತ್ರಿಗಳೊಂದಿಗೆ ಈ ವಿಚಾರದ ಬಗ್ಗೆ ಚರ್ಚಿಸಿದ ನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. 'ಧರ್ಮಸ್ಥಳದಲ್ಲಿನ ಉತ್ಖನನಕ್ಕೆ ಬ್ರೇಕ್ ಬೀಳುತ್ತದೆಯೇ ಅಥವಾ ಮುಂದುವರಿಯುತ್ತದೆಯೇ' ಎಂಬ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಸೂಚನೆ ನೀಡುವ ಸಾಧ್ಯತೆ ಇದೆ. ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಎಸ್ಐಟಿಗೆ ಸೂಚನೆ ನೀಡುವ ನಿರೀಕ್ಷೆಯಿದೆ. ಈ ನಿರ್ಧಾರವು ಧರ್ಮಸ್ಥಳ ಪ್ರಕರಣದ ಮುಂದಿನ ಹಂತವನ್ನು ನಿರ್ಧರಿಸಲಿದ್ದು, ಸತ್ಯದ ಬೆನ್ನತ್ತಿದ ತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದನ್ನು ಕಾದು ನೋಡಬೇಕು.