ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ಉಡುಪಿ (ಆ.21): ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬೆಳಗ್ಗೆಯೇ ತಿಮರೋಡಿಯನ್ನು ವಶಕ್ಕೆ ಪಡೆದಿದ್ದ ಉಡುಪಿ ಪೊಲೀಸರು, ಇದೀಗ ಬಂಧನ ಮಾಡಲಾಗಿದೆ ಎಂಬುದನ್ನು ಖಚಿತಪಡಿಸಿದ್ದಾರೆ.

ಇದೀಗ ಬಂಧನದ ನಂತರ, ಒಂದುವರೆ ಗಂಟೆಗೂ ಹೆಚ್ಚು ಕಾಲ ಅವರ ವಿಚಾರಣೆ ನಡೆಸಲಾಗಿದೆ. ಮಹೇಶ್ ತಿಮರೋಡಿ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಿತ್ತು. ಪೊಲೀಸರು ಈ ಹಿಂದೆ ನೀಡಿದ್ದ ನೋಟಿಸ್‌ಗಳಿಗೆ ಅವರು ಸ್ಪಂದಿಸದ ಕಾರಣ, ಅವರನ್ನು ವಶಕ್ಕೆ ಪಡೆಯಲಾಗಿತ್ತು. ಇದೀಗ ತಿಮರೋಡಿಯವರನ್ನು ಬಂಧಿಸಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆತಂದಾಗ, ಅವರ ಬೆಂಬಲಿಗರು ಮತ್ತು ಸ್ಥಳೀಯರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಪರಿಸ್ಥಿತಿ ಬಿಗಡಾಯಿಸದಂತೆ ಪೊಲೀಸರು ಠಾಣೆಯ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಿದ್ದಾರೆ.

ತಿಮರೋಡಿಯನ್ಉ ಬಂಧಿಸಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ ಬಳಿಕ, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ಮುಂದಿನ ಬೆಳವಣಿಗೆಗಳ ಕುರಿತು ನಿರೀಕ್ಷೆ ಹೆಚ್ಚಿದ್ದು, ಪೊಲೀಸರ ತನಿಖೆಯ ಬಳಿಕ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.