ತಮಿಳುನಾಡು ಸಂಸದ ಸಸಿಕಾಂತ ಸೆಂಥಿಲ್ ಧರ್ಮಸ್ಥಳ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ. ಸೆಂಥಿಲ್ ತಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರೂ, ರೆಡ್ಡಿ ತಮ್ಮ ಹೇಳಿಕೆಗೆ ಬದ್ಧ ಎಂದು ಹೇಳಿದ್ದಾರೆ.
ಬಳ್ಳಾರಿ (ಸೆ.7): ಎಡಪಂಥೀಯ ಚಿಂತನೆಯ ತಮಿಳುನಾಡು ಸಂಸದ ಸಸಿಕಾಂತ ಸೆಂಥಿಲ್ ಹಿಂದೂ ಧರ್ಮದ ಧಾರ್ಮಿಕ ನಂಬಿಕೆಗಳನ್ನು ನಾಶ ಮಾಡಲೆಂದೇ ರಾಜಕಾರಣಕ್ಕೆ ಬಂದಿದ್ದು, ಕರಾವಳಿ ಭಾಗದಲ್ಲಿ ಬಿಜೆಪಿ ಪ್ರಬಲವಾಗಿದೆ ಎಂಬ ಕಾರಣಕ್ಕಾಗಿಯೇ ಧರ್ಮಸ್ಥಳ ಪ್ರಕರಣದಲ್ಲಿ ಹುನ್ನಾರ ನಡೆಸಿದ್ದಾರೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಪುನರುಚ್ಛರಿಸಿದ್ದಾರೆ.
ಶಶಿಕಾಂತ ಸೆಂಥಿಲ್ ತಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ದೂರು ನೀಡಿದ ಕುರಿತು ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಧರ್ಮಸ್ಥಳ ಪ್ರಕರಣದಲ್ಲಿ ಸೆಂಥಿಲ್ ಕೈವಾಡವಿದೆ ಎಂಬ ಹೇಳಿಕೆಗೆ ಬದ್ಧನಾಗಿದ್ದೇನೆ. ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಗೊತ್ತಾಯಿತು. ಅವರ ಎಷ್ಟೇ ಮೊಕದ್ದಮೆ ದಾಖಲಿಸಲಿ. ನಾನೂ ಸಹ ಕಾನೂನು ಹೋರಾಟ ಮಾಡುವೆ. ಈ ಪ್ರಕರಣದಿಂದ ನಾನೇನು ವಿಚಲಿತನಾಗುವುದಿಲ್ಲ. ಕಾನೂನು ಹೋರಾಟಕ್ಕೆ ಅವರೇ ದಾರಿ ಮಾಡಿಕೊಟ್ಟಿದ್ದಾರೆ ಎಂದರು.
ಸೆಂಥಿಲ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಬಲಗೈ ಆಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಸೆಂಥಿಲ್‌ರನ್ನು ವಿಚಾರಣೆಗೆ ಕರೆಯುವ ಸಾಧ್ಯತೆಗಳಿಲ್ಲ. ಧರ್ಮಸ್ಥಳ ಪ್ರಕರಣದಲ್ಲಿ ತನ್ನದೇನೂ ಪಾತ್ರವಿಲ್ಲ ಎನ್ನುವ ಸಸಿಕಾಂತ ಸೆಂಥಿಲ್, ಪ್ರಕರಣವನ್ನು ಸಿಬಿಐ ಅಥವಾ ಎನ್‌ಐಎ ನೀಡುವಂತೆ ಸಿಎಂಗೆ ಒತ್ತಾಯಿಸಲಿ ಎಂದು ಸವಾಲು ಹಾಕಿದರು.
