ಧರ್ಮಸ್ಥಳದಲ್ಲಿ 1990ರಿಂದ 2021ರ ನಡುವೆ ನಡೆದ 74 ಅಸಹಜ ಸಾವುಗಳ ಕುರಿತು ಸೌಜನ್ಯಾ ತಾಯಿ ಕುಸುಮಾವತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಈ ಪ್ರಕರಣಗಳ ಕುರಿತು ತೆಗೆದುಕೊಂಡ ಕ್ರಮಗಳ ಬಗ್ಗೆ ಎರಡು ವಾರಗಳಲ್ಲಿ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ.

 ಬೆಂಗಳೂರು (ಫೆ.4): ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳ ಕುರಿತು ಈವರೆಗೆ ತೆಗೆದುಕೊಂಡಿರುವ ಕ್ರಮಗಳು ಹಾಗೂ ಮುಂದೆ ಕೈಗೊಳ್ಳಲಿರುವ ಕ್ರಮಗಳ ಕುರಿತು ಎರಡು ವಾರಗಳಲ್ಲಿ ವಿವರಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

Add Asianetnews Kannada as a Preferred SourcegooglePreferred

ಸೌಜನ್ಯ ತಾಯಿ ಕುಸುಮಾವತಿ ಅರ್ಜಿ

ಈ ಕುರಿತು ಧರ್ಮಸ್ಥಳದಲ್ಲಿ 2012ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೀಡಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಾ ತಾಯಿ ಕುಸುಮಾವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ ಪರ ಅಡ್ವೋಕೆಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ಅರ್ಜಿಯು 74 ಪ್ರಕರಣಗಳ ವಿಚಾರವಾಗಿದೆ. ಯಾವ ಪ್ರಕರಣ ಯಾವ ಹಂತದಲ್ಲಿದೆ, ಈವರೆಗೆ ಏನಾಗಿದೆ ಎಂಬ ಬಗ್ಗೆ ಮಾಹಿತಿ ಪಡೆದುಕೊಂಡು ಒಂದು ವಾರದಲ್ಲಿ ನ್ಯಾಯಾಲಯಕ್ಕೆ ಸಂಪೂರ್ಣ ವಿವರ ನೀಡಲಾಗುವುದು ಎಂದು ಹೇಳಿದರು.

ಅರ್ಜಿದಾರರ ಪರ ಹಿರಿಯ ವಕೀಲ ಎಸ್‌ ಬಾಲನ್ ವಾದ

ಅರ್ಜಿದಾರರ ಪರ ಹಿರಿಯ ವಕೀಲ ಎಸ್.ಬಾಲನ್, ಎಲ್ಲ 74 ಪ್ರಕರಣಗಳು ಗಂಭೀರ ಸ್ವರೂಪದ ಪ್ರಕರಣಗಳಾಗಿದೆ. ಅವುಗಳ ತನಿಖೆ ನಡೆಯಲೇಬೇಕಿದೆ ಎಂದರು. ಅದಕ್ಕೆ ಪ್ರತಿಕ್ರಿಯಿಸಿದ ಪೀಠ, ಅದಕ್ಕೂ ಮೊದಲು ಸರ್ಕಾರದಿಂದ ಮಾಹಿತಿ ಬರಲಿ ಎಂದು ಹೇಳಿತು.

ನಂತರ ಅರ್ಜಿಯಲ್ಲಿ ಪ್ರಸ್ತಾಪಿಸಲಾದ ಪ್ರಕರಣಗಳ ಈಗಿನ ವಸ್ತುಸ್ಥಿತಿ, ಈವರೆಗೆ ತೆಗೆದುಕೊಂಡಿರುವ ಕ್ರಮಗಳು ಹಾಗೂ ಮುಂದೆ ಕೈಗೊಳ್ಳಬೇಕೆಂದಿರುವ ಕ್ರಮಗಳ ಕುರಿತು ಎರಡು ವಾರಗಳಲ್ಲಿ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ ಪೀಠ, ವಿಚಾರಣೆಯನ್ನು ಫೆ.19ಕ್ಕೆ ಮುಂದೂಡಿತು. ಇದೇ ವೇಳೆ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.