ಮಡಿಕೇರಿ :  ಉತ್ತರ ಕರ್ನಾಟಕದ ಹಲವು ಭಾಗದಲ್ಲಿ ಅನಾವೃಷ್ಟಿಯಂತೆ, ಕೊಡಗು ಜಿಲ್ಲೆಯಲ್ಲಿ ಸಂಭವಿಸಿರುವ ಅತಿವೃಷ್ಟಿಯ ಸಮಸ್ಯೆಗಳಿಗೂ ಸರ್ಕಾರ ಸ್ಪಂದಿಸಬೇಕಿದೆ. ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಶೀಘ್ರದಲ್ಲೇ ಮನೆ ನಿರ್ಮಾಣ ಮಾಡಿಕೊಡಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಆಗ್ರಹಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ ಗುರುವಾರ, ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ತೊಂದರೆಗೊಳಗಾದ ಸಂತ್ರಸ್ತರಿಗೆ 8 ಕೋಟಿ ರು. ಪರಿಹಾರ ಧನವನ್ನು ಸಾಂಕೇತಿಕವಾಗಿ ವಿತರಿಸಿ ಮಾತನಾಡಿದರು.

ಜೋಡುಪಾಲ, ಮಕ್ಕಂದೂರಿಗೆ ಭೇಟಿ: ಪ್ರಕೃತಿ ವಿಕೋಪಕ್ಕೆ ತುತ್ತಾದ ಕೊಡಗು ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಡಾ.ವೀರೇಂದ್ರ ಹೆಗ್ಗಡೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಡಿಕೇರಿ ತಾಲೂಕಿನ ಜೋಡುಪಾಲ, ಎರಡನೇ ಮೊಣ್ಣಂಗೇರಿ, ಮದೆನಾಡು, ಮಕ್ಕಂದೂರು, ಎಮ್ಮೆತ್ತಾಳು ಗ್ರಾಮಕ್ಕೆ ಭೇಟಿ ನೀಡಿ ಆ ಭಾಗದ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ಜೋಡುಪಾಲ ಬಳಿ ಪ್ರಕೃತಿ ವಿಕೋಪಕ್ಕೆ ಸಿಲುಕಿ ಕಣ್ಮರೆಯಾಗಿರುವ ಮಂಜುಳಾ ಕುಟುಂಬಸ್ಥರೊಂದಿಗೆ ವೀರೇಂದ್ರ ಹೆಗ್ಗಡೆ ಅವರು ಮಾತುಕತೆ ನಡೆಸಿದರು. ಮಂಜುಳಾ ಸಹೋದರನಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.