ಧರ್ಮಸ್ಥಳ ದೇವಸ್ಥಾನದ ವಿರುದ್ಧ ಷಡ್ಯಂತ್ರದ ಆರೋಪದ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ವಿರುದ್ಧ ಸಸಿಕಾಂತ್ ಸೆಂಥಿಲ್ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿದ್ದಾರೆ. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಬೆಂಗಳೂರು (ಸೆ.6): ಧರ್ಮಸ್ಥಳ ದೇವಸ್ಥಾನದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದಲ್ಲಿ ತಮಿಳುನಾಡಿನ ಕಾಂಗ್ರೆಸ್ ಸಂಸದ ಮತ್ತು ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರ ಕೈವಾಡವಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಈ ಆರೋಪಕ್ಕೆ ಪ್ರತಿಕ್ರಿಯೆಯಾಗಿ, ಸಂಸದ ಶಶಿಕಾಂತ್ ಸೆಂಥಿಲ್ ಅವರು ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ನಿರ್ಧರಿಸಿದ್ದಾರೆ. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಮಾನನಷ್ಟ ಅರ್ಜಿ ಸಲ್ಲಿಸಲು ಸೆಂಥಿಲ್ ಮುಂದಾಗಿದ್ದಾರೆ.

ಆರೋಪದ ಹಿನ್ನೆಲೆ:

ಜನಾರ್ದನ ರೆಡ್ಡಿ ಅವರು ಬೆಂಗಳೂರಿನಲ್ಲಿ ಮಾತನಾಡುತ್ತಾ, ಧರ್ಮಸ್ಥಳ ದೇವಸ್ಥಾನಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಶಶಿಕಾಂತ್ ಸೆಂಥಿಲ್ ದಕ್ಷಿಣ ಕನ್ನಡದ ಇಬ್ಬರು ವ್ಯಕ್ತಿಗಳೊಂದಿಗೆ ಸೇರಿ ಷಡ್ಯಂತ್ರದ ರೂಪರೇಷೆ ಸಿದ್ಧಪಡಿಸಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೇ ಈ ಪ್ರಕರಣದಲ್ಲಿ ಸೆಂಥಿಲ್ ಅವರೇ ಮಾಸ್ಟರ್‌ಮೈಂಡ್ ಎಂದು ರೆಡ್ಡಿ ದೂಷಿಸಿದ್ದರು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಈ ವಿಷಯದಲ್ಲಿ ಆಸಕ್ತಿ ಇಲ್ಲದಿದ್ದರೂ, ಹೈಕಮಾಂಡ್‌ನ ಒತ್ತಡದಿಂದ ಎಸ್‌ಐಟಿ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ಹೇಳಿದ್ದರು. ಜೊತೆಗೆ, ಎಡಪಂಥೀಯ ನಿಲುವು ಹೊಂದಿರುವ ಸೆಂಥಿಲ್ ಅವರನ್ನು ತನಿಖೆಗೆ ಒಳಪಡಿಸಬೇಕೆಂದು ರೆಡ್ಡಿ ಆಗ್ರಹಿಸಿದ್ದರು.

ಇದೀಗ ಜನಾರ್ದನ ರೆಡ್ಡಿಯ ಆರೋಪಗಳನ್ನು ತೀವ್ರವಾಗಿ ಖಂಡಿಸಿರುವ ಶಶಿಕಾಂತ್ ಸೆಂಥಿಲ್, ಈ ಆರೋಪಗಳು ತಮ್ಮ ಗೌರವಕ್ಕೆ ಧಕ್ಕೆ ತಂದಿವೆ ಎಂದು ಹೇಳಿದ್ದಾರೆ. ಈ ಕಾರಣಕ್ಕಾಗಿ, ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವೆ ಎಂದಿದ್ದಾರೆ. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ತೀರ್ಮಾನಿಸಿರುವ ಸೆಂಥಿಲ್, ಖುದ್ದು ಕೋರ್ಟ್‌ಗೆ ಹಾಜರಾಗಿ ತಮ್ಮ ಕಾನೂನು ಹೋರಾಟ ಮುಂದುವರಿಸಲಿದ್ದಾರೆ.

ಈ ಪ್ರಕರಣವು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಧರ್ಮಸ್ಥಳ ದೇವಸ್ಥಾನದ ಗೌರವವನ್ನು ಕಾಪಾಡುವ ಸಂಬಂಧವಾಗಿ ಎರಡೂ ಕಡೆಯಿಂದ ತೀವ್ರ ವಾಗ್ವಾದ ನಡೆಯುವ ಸಾಧ್ಯತೆಯಿದೆ. ಮಾನನಷ್ಟ ಮೊಕದ್ದಮೆಯ ಫಲಿತಾಂಶದ ಮೇಲೆ ಎಲ್ಲರ ಗಮನ ನೆಟ್ಟಿದೆ. ಮುಂದಿನ ಅಪ್ಡೇಟ್‌ಗಾಗಿ ಸಂಪರ್ಕದಲ್ಲಿರಿ.