ರಾಜ್ಯದ ಮತದಾರರ ಪಟ್ಟಿ ಅಕ್ರಮಗಳ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರಿಯಲಿದೆ. ಚುನಾವಣಾ ಆಯೋಗವು ಅಗತ್ಯವಿದ್ದರೆ ವರುಣಾ ಮತ್ತು ಚಾಮರಾಜಪೇಟೆ ಕ್ಷೇತ್ರಗಳಲ್ಲಿಯೂ ತನಿಖೆ ನಡೆಸಲಿ ಎಂದು ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. ಚಿಲುಮೆ ಸಂಸ್ಥೆಯ ಮೂಲಕ ಬಿಜೆಪಿ ಅಕ್ರಮ ಎಸಗಿದೆ ಎಂದು ಆರೋಪಿಸಿದ್ದಾರೆ.
ಬೆಂಗಳೂರು (ಆ.08): ರಾಜ್ಯದಲ್ಲಿ ನಡೆದ ಮತದಾರರ ಪಟ್ಟಿ ಅಕ್ರಮಗಳ ವಿರುದ್ಧ ಕಾಂಗ್ರೆಸ್ ಪಕ್ಷದ ಹೋರಾಟ ಮುಂದುವರಿಯಲಿದೆ. ಯಾವುದೇ ಕ್ಷೇತ್ರದಲ್ಲಿ ಡಬಲ್ ಎಂಟ್ರಿ ಆಗಿದ್ದರೂ ಅದು ತಪ್ಪು. ವರುಣಾ, ಚಾಮರಾಜಪೇಟೆ ಸೇರಿದಂತೆ ಯಾವುದೇ ಕ್ಷೇತ್ರದ ಬಗ್ಗೆ ತನಿಖೆಯಾಗಲಿ, ಅದನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಚುನಾವಣಾ ಆಯೋಗದ ಮುಖ್ಯ ಅಧಿಕಾರಿಯನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯದಲ್ಲಿ ತನಿಖೆ ಆಗಬೇಕು ಎಂದು ಒತ್ತಾಯಿಸಿದರು. ನಾನು ಇಂದು ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿ ಮಾಡಿದ್ದೇನೆ. ಮತದಾರರ ಪಟ್ಟಿಯಲ್ಲಿ ನಡೆದ ಅನ್ಯಾಯದ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ. ಕಾಂಗ್ರೆಸ್ ಪಕ್ಷದ ಪರವಾಗಿ ಬಂದವರಿಗೆ ನಾನು ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.
ಮಹಾದೇವಪುರ ಕ್ಷೇತ್ರದಲ್ಲಿ ನಡೆದ ಅಕ್ರಮಗಳ ಬಗ್ಗೆ ಇಂದು ದಾಖಲೆಗಳನ್ನು ನೀಡಿಲ್ಲ. ಆದರೆ, ಎಲ್ಲೆಲ್ಲಿ ಅಕ್ರಮಗಳ ನಡೆದಿವೆಯೋ ಅಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. 'ನಂತರ ನಾವು ವಿವರಗಳನ್ನು ತಂದುಕೊಡುತ್ತೇವೆ. ಇದು ನಮ್ಮ ರಾಜ್ಯದಷ್ಟೇ ಹೋರಾಟವಲ್ಲ, ಈ ನಿಟ್ಟಿನಲ್ಲಿ ಹೋರಾಟ ಮುಂದುವರಿಯಲಿದೆ' ಎಂದು ತಿಳಿಸಿದರು.
ಡಬಲ್ ಎಂಟ್ರಿ ದೋಷ ತಪ್ಪು:
ಯಾವುದೇ ಕ್ಷೇತ್ರದಲ್ಲಿ ಡಬಲ್ ಎಂಟ್ರಿ ಆಗಿದ್ದರೂ ಅದು ತಪ್ಪು. ವರುಣಾ, ಚಾಮರಾಜಪೇಟೆ ಸೇರಿದಂತೆ ಯಾವುದೇ ಕ್ಷೇತ್ರದ ಬಗ್ಗೆ ತನಿಖೆಯಾಗಲಿ, ಅದನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಈ ಹಿಂದೆ ಡಿ.ಕೆ. ಸುರೇಶ್ ಅವರು ಬೆಂಗಳೂರು ನಗರ ವ್ಯಾಪ್ತಿಯ ಮತದಾರರ ಪಟ್ಟಿಯ ದೋಷಗಳ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರೂ ಅದನ್ನು ಪರಿಗಣಿಸಿರಲಿಲ್ಲ ಎಂದು ಅವರು ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷವು ಮುಂದಿನ ದಿನಗಳಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಹಂತ ಹಂತವಾಗಿ ಹೋರಾಟ ನಡೆಸಲಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಚಿಲುಮೆ ಸಂಸ್ಥೆ ಮೂಲಕ ಬಿಜೆಪಿ ಅಕ್ರಮ:
ಇದಕ್ಕೂ ಮುನ್ನ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ 'ನಮ್ಮ ಮತ - ನಮ್ಮ ಹಕ್ಕು - ನಮ್ಮ ಹೋರಾಟ' ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮಹಕ್ಕು, ನಮ್ಮ ಪ್ರಜಾಪ್ರಭುತ್ವವನ್ನು ನಾವು ಕಾಪಾಡಬೇಕು. ದೇಶದ ಪ್ರಜಾಪ್ರಭುತ್ವ, ಚುನಾವಣಾ ವ್ಯವಸ್ಥೆ, ಮತದಾರರ ರಕ್ಷಣೆಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅಧ್ಯಯನ ಮಾಡಿಸಿದ್ದಾರೆ. ಬಿಜೆಪಿಯವರು ಚಿಲುಮೆ ಸಂಸ್ಥೆ ಮೂಲಕ ತಮ್ಮ 8 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಿಎಲ್‌ಓ ಗಳಾಗಿ ನೇಮಿಸಿದ್ದರು. ಜವಾಬ್ದಾರಿಯುತ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಈ ಅಕ್ರಮಗಳಿಗೆ ಯಾರು ಹೊಣೆ? ಎಂದು ಪ್ರಶ್ನಿಸುತ್ತಿದ್ದಾರೆ. ಈ ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ತಂದುಕೊಟ್ಟ ಪಕ್ಷದ ಮುಖಂಡರಾಗಿ ಧ್ವನಿ ಎತ್ತುತ್ತಿದ್ದಾರೆ. ನಮ್ಮ ಹಕ್ಕು, ನಮ್ಮ ಪ್ರಜಾಪ್ರಭುತ್ವವನ್ನು ನಾವು ಕಾಪಾಡಬೇಕು ಎಂದು ತಿಳಿಸಿದರು.
ಮತ ಅಕ್ರಮ ಬಯಲಿಗೆಳೆಯಲು ಕರ್ನಾಟಕ ಮುನ್ನುಡಿ:
ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ದೇಶದ ಸಂವಿಧಾನ, ನಮ್ಮ ಮತ, ನಮ್ಮ ಹಕ್ಕು ರಕ್ಷಣೆಗೆ ದೊಡ್ಡ ಸಂದೇಶ ರವಾನಿಸಿದ್ದಾರೆ. ದೇಶಾದ್ಯಂತ ಮತ ಅಕ್ರಮ ಬಯಲಿಗೆಳೆಯಲು ಕರ್ನಾಟಕದಿಂದ ಮುನ್ನುಡಿ ಬರೆಯುತ್ತಿದ್ದು ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ. ಆಸ್ಪತ್ರೆಗಳಲ್ಲಿ ಬ್ಲಡ್ ಬ್ಯಾಂಕ್ ಇರುವಂತೆ ಸಂವಿಧಾನ ಉಳಿಸಿ ಪ್ರಜಾಪ್ರಭುತ್ವ ರಕ್ಷಣೆ ಮಾಡಲು ಪ್ರತಿ ಕ್ಷೇತ್ರದಲ್ಲಿ ಲೀಗಲ್ ಬ್ಯಾಂಕ್ ಸ್ಥಾಪನೆ ಮಾಡಬೇಕೆಂದು ರಾಹುಲ್ ಗಾಂಧಿ ಅವರು ಮಾರ್ಗದರ್ಶನ ನೀಡಿದ್ದಾರೆ. ಅವರ ಮಾರ್ಗದರ್ಶನದಂತೆ ಪ್ರತಿ ಕ್ಷೇತ್ರದಲ್ಲಿ ಲೀಗಲ್ ಬ್ಯಾಂಕ್ ರಚಿಸಿ, ಮತದಾರರ ಹಕ್ಕು ರಕ್ಷಿಸಲು ನಾವೆಲ್ಲರೂ ಬದ್ಧ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
