ಬೆಂಗಳೂರು [ನ.05]:  ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಕಾರ್ಯಕರ್ತರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಬೆಂಗಳೂರಿನ ಮಿಂಟೋ ಕಣ್ಣಾಸ್ಪತ್ರೆಯ ತರಬೇತಿ ವೈದ್ಯರು ಮಂಗಳವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದಾರೆ. 

ರಾಜ್ಯದ ಒಂಭತ್ತು ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಹೊರರೋಗಿ ವಿಭಾಗದಲ್ಲಿ ವೈದ್ಯರು ಮುಷ್ಕರ ನಡೆಸುವ ಸಾಧ್ಯತೆಯಿದ್ದು, ರೋಗಿಗಳಿಗೆ ಸೇವೆ ವ್ಯತ್ಯಯವಾಗಲಿದೆ. ಆದರೆ, ಜಿಲ್ಲಾಸ್ಪತ್ರೆ ಹಾಗೂ ಸಾಮಾನ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆ ಎಂದಿನಂತೆ ಲಭ್ಯವಿರಲಿದೆ. ರಾಯಚೂರು, ಮಂಡ್ಯ, ಮೈಸೂರು, ಬೆಳಗಾವಿ, ಹುಬ್ಬಳ್ಳಿ, ಬಳ್ಳಾರಿ, ಹಾಸನ, ಶಿವಮೊಗ್ಗ, ಕೊಡಗು ಮೆಡಿಕಲ್‌ ಕಾಲೇಜುಗಳಲ್ಲಿ ಪ್ರತಿಭಟನೆ ನಡೆಯಲಿದೆ.

ತರಬೇತಿ ವೈದ್ಯರ ಈ ಕ್ರಮಕ್ಕೆ ಪ್ರತಿಯಾಗಿ ಕರ್ನಾಟಕ ರಕ್ಷಣಾ ವೇದಿಕೆಯೂ ರಾಜ್ಯಾದ್ಯಂತ ಹೋರಾಟಕ್ಕೆ ಅಣಿಯಾಗಿದ್ದು, ಕನ್ನಡ ಸಂಘಟನೆಯ ಮೇಲೆ ಅನ್ಯ ರಾಜ್ಯಗಳ ತರಬೇತಿ ವೈದ್ಯರು ಸುಳ್ಳು ಆರೋಪ ಹೊರಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದು ಪ್ರತಿಭಟನೆಗೆ ಕರೆ ನೀಡಿದೆ.