Dr K Sudhakar assault case: ಸಂಸದ ಡಾ.ಕೆ.ಸುಧಾಕರ್ ಅವರ ಮೇಲೆ ವಿಧಾನಸೌಧದಲ್ಲಿ ನಡೆದ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮ್ಮದ್ ಅವರಿಗೆ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ. ಪ್ರಕರಣದ ಹಿನ್ನೆಲೆ ಏನು? ತಿಳಿಯಿರಿ.
ಬೆಂಗಳೂರು (ಅ.12): ವಿಧಾನಸೌಧದಲ್ಲಿ ಸಂಸದ ಡಾ.ಕೆ.ಸುಧಾಕರ್ ಮೇಲೆ ಹಲ್ಲೆ ಆರೋಪದ ಪ್ರಕರಣ ಸಂಬಂಧ ಆರೋಪಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮ್ಮದ್ ಅವರಿಗೆ ಅ.27ರಂದು ವಿಚಾರಣೆಗೆ ಹಾಜರಾಗುವಂತೆ ನಗರದ 42ನೇ ಎಸಿಜೆಎಂ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ಸಂಬಂಧ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು, ವಿಚಾರಣೆಗೆ ಹಾಜರಾಗುವಂತೆ ಆರೋಪಿ ನಜೀರ್ ಅಹಮ್ಮದ್‌ಗೆ ಸಮನ್ಸ್ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಅ.27ಕ್ಕೆ ಮುಂದೂಡಿತು.
ಇದನ್ನೂ ಓದಿ: ಸಂಸದ ಸುಧಾಕರ್ ಗೆ ಜಯ, 4.8 ಕೋಟಿ ರೂ. ನಗದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್!
ಪ್ರಕರಣದ ಹಿನ್ನೆಲೆ:
ಚಿಕ್ಕಬಳ್ಳಾಪುರದಿಂದ ಶಾಸಕರಾಗಿದ್ದ ಹಾಗೂ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹುದ್ದೆಯಲ್ಲಿದ್ದ ಡಾ। ಕೆ.ಸುಧಾಕರ್ ಅವರು 2019ರ ಜು.10ರಂದು ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ವಿಧಾನಸೌಧಕ್ಕೆ ಬಂದಿದ್ದರು. ಈ ಸಮಯದಲ್ಲಿ ರಾಜೀನಾಮೆ ನೀಡಲು ಸ್ಪೀಕರ್ ಕಚೇರಿ ಕಡೆಗೆ ತೆರಳುವಾಗ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮ್ಮದ್ ಹಾಗೂ ಇತರರು ವಿಧಾನಸೌಧದ ಉತ್ತರದ ಕಡೆ ಇರುವ ಲಿಫ್ಟ್ ಬಳಿ ಡಾ। ಕೆ.ಸುಧಾಕರ್ ಅವರನ್ನು ಅಡ್ಡಗಟ್ಟಿ ಬಲವಂತವಾಗಿ ಹಿಡಿದು ಎಳೆದಾಡಿದ್ದಾರೆ. ಹಲ್ಲೆ ಸಹ ಮಾಡಿದ್ದಾರೆ. ಹೀಗಾಗಿ ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವಕೀಲ ಎನ್.ಪಿ.ಅಮೃತೇಶ್ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ದೂರಿನ ಮೇರೆಗೆ ಡಾ। ಕೆ.ಸುಧಾಕರ್ ಅವರನ್ನು ವಿಚಾರಣೆ ಮಾಡಿ ಹೇಳಿಕೆ ಪಡೆದಿದ್ದ ಪೊಲೀಸರು, 2019ರ ಆ.8ರಂದು ನಜೀರ್ ಅಹಮ್ಮದ್ ವಿರುದ್ಧ ಐಪಿಸಿ ಸೆಕ್ಷನ್ 323 ಮತ್ತು 341ರ ಅಡಿ ಎಫ್‌ಐಆರ್ ದಾಖಲಿಸಿದ್ದರು. ಬಳಿಕ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅದರಂತೆ ಇದೀಗ ನ್ಯಾಯಾಲಯವು ಪ್ರಕರಣದ ವಿಚಾರಣೆ ಆರಂಭಿಸಿದೆ.
