ನಾನು ಆರೋಗ್ಯದಿಂದ ಇದ್ದೇನೆ, ಕೆಲ ದಿನ ನನ್ನನ್ನು ಯಾರೂ ಭೇಟಿ ಮಾಡಬೇಡಿ: ದೇವೇಗೌಡ
ನನ್ನ ಆರೋಗ್ಯ ಉತ್ತಮವಾಗಿದೆ. ಶೀಘ್ರದಲ್ಲೇ ನಾನು ಖುದ್ದಾಗಿ ಪಕ್ಷದ ಕಚೇರಿಗೆ ಭೇಟಿ ನೀಡುವುದರ ಜತೆಗೆ ಪಕ್ಷದ ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಬೆಂಗಳೂರು (ಸೆ.23): ನನ್ನ ಆರೋಗ್ಯ ಉತ್ತಮವಾಗಿದೆ. ಶೀಘ್ರದಲ್ಲೇ ನಾನು ಖುದ್ದಾಗಿ ಪಕ್ಷದ ಕಚೇರಿಗೆ ಭೇಟಿ ನೀಡುವುದರ ಜತೆಗೆ ಪಕ್ಷದ ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಗುರುವಾರ ಪತ್ರಿಕಾ ಹೇಳಿಕ ಬಿಡುಗಡೆ ಮಾಡಿರುವ ಅವರು, ವೈದ್ಯರ ಸಲಹೆಯಂತೆ ಸದ್ಯಕ್ಕೆ ಕೆಲವು ದಿನಗಳ ಕಾಲ ಮನೆಯಿಂದಲೇ ನನ್ನ ಎಲ್ಲ ರಾಜಕೀಯ, ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಿಸುತ್ತೇನೆ.
ಹೀಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೆಲವು ದಿನಗಳ ಮಟ್ಟಿಗೆ ನನ್ನ ಭೇಟಿಗೆ ಬರುವುದು ಬೇಡ ಎಂದು ಅವರು ಮನವಿ ಮಾಡಿದ್ದಾರೆ. ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ಮಾಡಿದ್ದರು. ಆದಕಾರಣ ಕೆಲ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯಬೇಕಾಯಿತು. ಇನ್ನು ಕೆಲ ದಿನ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಮುಖಂಡರು, ಕಾರ್ಯಕರ್ತರು ಅನ್ಯಥಾ ಭಾವಿಸಬಾರದು ಎಂದಿದ್ದಾರೆ.
BS Yediyurappaಗೆ ಸಿದ್ದು, ಎಚ್‌ಡಿಕೆ ಮುಖಾಮುಖಿ: ಏನು ಸರ್.. ಹೇಗಿದ್ದೀರಿ..? ಎಂದ ಕುಮಾರಸ್ವಾಮಿ
ನನ್ನ ನಿವಾಸಕ್ಕೆ ಭೇಟಿ ನೀಡಿ ನನ್ನ ಆರೋಗ್ಯ ವಿಚಾರಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಂದಾಯ ಸಚಿವ ಆರ್.ಅಶೋಕ್ ಸೇರಿದಂತೆ ಇತರ ಎಲ್ಲ ಸಚಿವರು, ಮುಖಂಡರಿಗೆ ನಾನು ಆಭಾರಿಯಾಗಿದ್ದೇನೆ. ಹಾಗೆಯೇ ನನ್ನ ಆರೋಗ್ಯಕ್ಕಾಗಿ ನಾಡಿನ ದೇವಾಲಯಗಳಲ್ಲಿ ಪೂಜೆ, ಹರಕೆ ಮಾಡಿಕೊಂಡು ಅನ್ನದಾನ ಇತ್ಯಾದಿಗಳನ್ನು ಮಾಡಿದ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಪ್ರೀತಿ ವಿಶ್ವಾಸಕ್ಕೆ ನನ್ನ ಹೃದಯ ತುಂಬಿ ಬಂದಿದೆ. ಅವರೆಲ್ಲರಿಗೂ ನನ್ನ ಶುಭ ಹಾರೈಕೆಗಳು ಎಂದು ಗೌಡರು ಹೇಳಿದ್ದಾರೆ.
ದೇವೇಗೌಡರನ್ನು ಭೇಟಿ ಮಾಡಿದ್ದ ಬೊಮ್ಮಾಯಿ ಸಂಪುಟ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಸಂಪುಟ ಸಹುದ್ಯೋಗಿಗಳು ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಮಂತ್ರಿ ನಿವಾಸಕ್ಕೆ ಬುಧವಾರ ಭೇಟಿ ನೀಡಿ ದೇವೇಗೌಡರ ಆರೋಗ್ಯ ವಿಚಾರಿಸಿದರು. ಈ ವೇಳೆ ಬೊಮ್ಮಾಯಿ ಮತ್ತು ಅವರ ಟೀಮ್‌ಗೆ ಭರ್ಜರಿ ಆತಿಥ್ಯವೂ ದೊರೆತಿತ್ತು. ಇನ್ನು, ಅದಕ್ಕೂ ಮುನ್ನ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.
ದೇವೇಗೌಡರ ಮನೆಗೆ ಅಶೋಕ್: ಫೋನ್‌ನಲ್ಲಿ ಸಿಎಂ ಬೊಮ್ಮಾಯಿ ಕೂಡ ಮಾತು
ಸಿದ್ದರಾಮಯ್ಯ ಅವರಿಗಿಂತ ಮೊದಲು ಸಚಿವ ಅಶೋಕ್ ಸಹ ದೇವೇಗೌಡರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸುವುದರ ಜತೆಗೆ ಪ್ರಸಕ್ತ ರಾಜಕೀಯ ವಿದ್ಯಮಾನವನ್ನೂ ವಿಚಾರಿಸಿದ್ದರು. ಈಗ ಅದೇ ರೀತಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಮಾಜಿ ಸಿಎಂಗಳಾದ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಮಾತನಾಡಿಸಿದ್ದು, ಉಭಯ ಕುಶಲೋಪರಿ ವಿಚಾರಿಸಿದ್ದಾರೆ. ಆ ವೇಳೆಯಲ್ಲಿ ಸಹ ಸಿಎಂ ಬೊಮ್ಮಾಯಿ ದೂರವಾಣಿಯಲ್ಲಿ ದೇವೇಗೌಡರ ಜತೆಯಲ್ಲಿ ಮಾತನಾಡಿದ್ದರು.