ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್, ಮೂತ್ರಪಿಂಡ ಸಮಸ್ಯೆ ಇರುವ ಪುರುಷರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದಾರೆ. ಡಯಾಲಿಸಿಸ್‌ಗಾಗಿ ನಗರಗಳಿಗೆ ಹೋಗುವ ಬಡ ರೋಗಿಗಳಿಗೆ ಅನುಕೂಲವಾಗುವಂತೆ ಕೋರಿದ್ದಾರೆ.
ಬೆಂಗಳೂರು (ಫೆ.26): ರಾಜ್ಯದಲ್ಲಿ ಶಕ್ತಿ ಯೋಜನೆಯ ಮೂಲಕ ಎಲ್ಲ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಸಂಸ್ಥೆಗಳ ಸಾಮಾನ್ಯ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅದೇ ರೀತಿ ರಾಜ್ಯದಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಪುರುಷರು ಡಯಾಲಿಸಿಸ್‌ಗಾಗಿ ವಾರಕ್ಕೊಮ್ಮೆ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಿಗೆ ಹೋಗಬೇಕಿದೆ. ಹೀಗಾಗಿ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಪುರುಷರಿಗೂ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಪತ್ರ ಬರೆದಿದ್ದಾರೆ.
ನಗರ ಪ್ರದೇಶಗಳಲ್ಲಿ ಹಾಗೂ ರಾಜ್ಯದಾದ್ಯಂತ ಕಡು ಬಡ ಕುಟುಂಬಕ್ಕೆ ಸೇರಿರುವ ಸಾವಿರಾರು ಮಂದಿ ಮೂತ್ರಪಿಂಡದ ಸಮಸ್ಯೆಯಿಂದ ಬಳಲಿ ಡಯಾಲಿಸೀಸ್‌ಗಾಗಿ ನೂರಾರು ಕಿಲೋಮೀಟರ್ ಪ್ರಯಾಣ ಕೈಗೊಂಡು ಬೆಂಗಳೂರಿನಂತಹ ನಗರದಲ್ಲಿ ಚಿಕಿತ್ಸೆಯನ್ನು ಪಡೆಯಲು ಪುರುಷ ರೋಗಿಗಳು ಹಣಕಾಸಿನ ತೊಂದರೆಯಿಂದ ಬಳಲುತ್ತಿದ್ದಾರೆ. ಅವರುಗಳಿಗೆ ನಗರ ಸಾರಿಗೆ ಬಸ್ಸುಗಳಲ್ಲಿ ಹಾಗೂ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆಯನ್ನು ಜಾರಿಗೊಳಿಸಬೇಕೆಂದು ಕೋರಿರುತ್ತಾರೆ.
ಇದನ್ನೂ ಓದಿ: ಗಣಿ ಕೇಸ್: ಎಚ್.ಡಿ.ಕುಮಾರಸ್ವಾಮಿಗೆ ಮತ್ತೆ ಪ್ರಾಸಿಕ್ಯೂಷನ್ ಸಂಕಷ್ಟ
ಆದ್ದರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಗೂ ರಾಜ್ಯ ನಗರ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಬಡ ಕುಟುಂಬದ ರೋಗಿಗಳಿಗೆ ಉಚಿತ ಪ್ರಯಾಣ ವ್ಯವಸ್ಥೆಯನ್ನು ಕಲ್ಪಿಸಬೇಕು. ಈ ಮೂಲಕ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವವರ ಚಿಕಿತ್ಸೆಗೆ ಅನುಕೂಲ ಮಾಡಿಕೊಡಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ತಮ್ಮಲ್ಲಿ ಕೋರುತ್ತೇನೆ. ಜೊತೆಗೆ, ಸಾಮಾಜಿಕ ಕಾರ್ಯಕರ್ತ ಸೈಯದ್ ಮೆಹೀಬುರ್ ರೆಹಮಾನ್ ಸಮೀನ್ ನೀಡಿರುವ ಮನವಿಯನ್ನು ತಮ್ಮ ಅವಗಾಹನೆಗಾಗಿ ಲಗತ್ತಿಸಲಾಗಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ಷರೀಫ್ ಮನವಿ ಮಾಡಿದ್ದಾರೆ.

