ಕೊಡಗಿನ ಹೋಂಸ್ಟೇ ಒಂದರಲ್ಲಿ ವಿದೇಶಿ ಮಹಿಳೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೋಂಸ್ಟೇ ಮಾಲೀಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ ಪ್ರತಿಕ್ರಿಯಿಸಿದ್ದು, ಹೋಂಸ್ಟೇಗಳು ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದ್ದು, ರಾಜ್ಯದ ಪ್ರವಾಸೋದ್ಯಮ ಕ್ಷೇತ್ರ ಹಾಗೂ ಸಾರ್ವಜನಿಕ ಸುರಕ್ಷತೆ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಘಟನೆಯ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಹೋಂಸ್ಟೇಗಳಿಗೆ ಈಗಾಗಲೇ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (SOP) ಜಾರಿಯಲ್ಲಿದೆ. ಹೋಂಸ್ಟೇಗಳನ್ನು ನಡೆಸುವವರು ನಿಗದಿತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಲೈಸೆನ್ಸ್ ಹೊಂದಿರುವುದರಿಂದ ಹಿಡಿದು ಸುರಕ್ಷತಾ ಕ್ರಮಗಳವರೆಗೆ ಎಲ್ಲ ನಿಯಮಗಳನ್ನು ಅನುಸರಿಸುವುದು ಕಡ್ಡಾಯ. ಈ ನಿಯಮಗಳನ್ನು ಮೀರಿ ಇಂತಹ ಘಟನೆಗಳು ನಡೆದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಘಟನೆ ತಿಳಿದ ಕೂಡಲೇ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಕಾನೂನು ಪ್ರಕಾರ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ನ್ಯಾಯಾಂಗ ಪ್ರಕ್ರಿಯೆ ನಡೆಯುತ್ತಿದೆ . ಇಂತಹ ಘಟನೆಗಳು ರಾಜ್ಯಕ್ಕಾಗಲಿ, ಸಮಾಜಕ್ಕಾಗಲಿ ಒಳ್ಳೆಯ ಸಂದೇಶ ನೀಡುವುದಿಲ್ಲ. ವಿಶೇಷವಾಗಿ ವಿದೇಶದಿಂದ ಬಂದವರ ಮೇಲೆ ಇಂತಹ ಅಪರಾಧಗಳು ನಡೆದರೆ, ದೇಶದ ಪ್ರತಿಷ್ಠೆಗೆ ಧಕ್ಕೆಯಾಗುತ್ತದೆ ಎಂದು ಪರಮೇಶ್ವರ ಆತಂಕ ವ್ಯಕ್ತಪಡಿಸಿದರು.

ಇಂತಹ ಪ್ರಕರಣಗಳಲ್ಲಿ ಯಾವುದೇ ಸಡಿಲಿಕೆ ಇಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಜೊತೆಗೆ, ಹೋಂಸ್ಟೇ ಮಾಲೀಕರು ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಚ್ಚರಿಕೆ ನೀಡಿದರು.

ಘಟನೆ ಹಿನ್ನೆಲೆ

ಕುಟ್ಟ ಪ್ರದೇಶದಲ್ಲಿರುವ ಖಾಸಗಿ ಹೋಂಸ್ಟೇಯಲ್ಲಿ ಈ ಘಟನೆ ನಡೆದಿದ್ದು, ಅಮೆರಿಕದ ವಾಷಿಂಗ್ಟನ್ ಮೂಲದ ಮಹಿಳೆ ಮೇಲೆ ಅತ್ಯಾ*ಚಾರ ನಡೆದಿರುವ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಂಸ್ಟೇ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿದಿದೆ.

ಘಟನೆ ಏಪ್ರಿಲ್ 19ರಂದು ನಡೆದಿದ್ದು, ‘ದೇವಿ ವಿಲ್ಲಾ’ ಎಂಬ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದ ವೇಳೆ ಅಲ್ಲಿನ ಸಿಬ್ಬಂದಿ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಕುರಿತು ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಮುಖ ಆರೋಪಿ ವೃಜೇಶ್ ಕುಮಾರ್ ಹಾಗೂ ಹೋಂಸ್ಟೇ ಮಾಲೀಕ ವಿಶಾಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಕರಣ ಮುಚ್ಚಿಹಾಕಲು ಪ್ರಯತ್ನ

ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಘಟನೆಯ ನಂತರ ಅದನ್ನು ಮುಚ್ಚಿಹಾಕಲು ಪ್ರಯತ್ನ ನಡೆದಿರುವ ಸಾಧ್ಯತೆಯೂ ವ್ಯಕ್ತವಾಗಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಆರೋಪಿಯು ಜಾರ್ಖಂಡ್ ಮೂಲದವನು ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಹೆಚ್ಚಿನ ವಿವರಗಳು ತನಿಖೆಯ ಬಳಿಕ ಸ್ಪಷ್ಟವಾಗಲಿವೆ.

ಒಟ್ಟಾರೆ, ಕೊಡಗಿನಂತಹ ಪ್ರವಾಸಿ ತಾಣದಲ್ಲಿ ನಡೆದ ಈ ಘಟನೆ ಸುರಕ್ಷತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದ್ದು, ಮುಂದಿನ ದಿನಗಳಲ್ಲಿ ಪ್ರವಾಸಿಗರ ಭದ್ರತೆಗಾಗಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರಬೇಕಾದ ಅಗತ್ಯವನ್ನು ಒತ್ತಿ ಹೇಳುತ್ತಿದೆ.