ನವರಾತ್ರಿಗೆ ಮೊದಲು ಕರ್ನಾಟಕಕ್ಕೆ ಕತ್ತಲೆ ಭಾಗ್ಯ: ಕುಮಾರಸ್ವಾಮಿ ವ್ಯಂಗ್ಯ
ಸರ್ಕಾರದ ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣಾ ವೈಫಲ್ಯದಿಂದ ಕರ್ನಾಟಕವನ್ನು ಇತಿಹಾಸದಲ್ಲಿ ಹಿಂದೆಂದೂ ಕಂಡೂ ಕೇಳರಿಯದ ವಿದ್ಯುತ್ ಕ್ಷಾಮಕ್ಕೆ ದೂಡುತ್ತಿದೆ ಎಂದು ಹರಿಹಾಯ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು(ಅ.11): ನವರಾತ್ರಿಗೆ ಮೊದಲಿಗೆ ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ಖಾತರಿಪಡಿಸಿರುವ ಕಾಂಗ್ರೆಸ್ ಸರ್ಕಾರ ಹೊಸ ವರ್ಷಕ್ಕೆ ಅದನ್ನು ಜಾರಿ ಮಾಡಲು ಹುನ್ನಾರ ನಡೆಸಿದೆ. ಇದು ಸರ್ಕಾರದ ಆರನೇ ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ರಾಜ್ಯಕ್ಕೆ ವಿದ್ಯುತ್ ಸಂಕಷ್ಟ ಹಿನ್ನೆಲೆಯಲ್ಲಿ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ. ಸರ್ಕಾರದ ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣಾ ವೈಫಲ್ಯದಿಂದ ಕರ್ನಾಟಕವನ್ನು ಇತಿಹಾಸದಲ್ಲಿ ಹಿಂದೆಂದೂ ಕಂಡೂ ಕೇಳರಿಯದ ವಿದ್ಯುತ್ ಕ್ಷಾಮಕ್ಕೆ ದೂಡುತ್ತಿದೆ ಎಂದು ಅವರು ಸಾಮಾಜಿಕ ಜಾಲತಾಣದ ಮೂಲಕ ಹರಿಹಾಯ್ದಿದ್ದಾರೆ.
ಅಧಿಕಾರದ ಮದದಿಂದ ಮಿದುಳಿಗೂ ಗೆದ್ದಲು ಹಿಡಿದಿದೆ: ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಜೆಡಿಎಸ್
ಸರ್ಕಾರ ರಾಜ್ಯದ ಉದ್ದಗಲಕ್ಕೂ ಅನಧಿಕೃತ ಲೋಡ್‌ಶೆಡ್ಡಿಂಗ್ ಹೇರಿ ದಿನಕ್ಕೆ 2 ಗಂಟೆ ವಿದ್ಯುತ್ತಿಗೂ ದಿಕ್ಕಿಲ್ಲದ ದುಸ್ಥಿತಿ ನಿರ್ಮಾಣ ಮಾಡಿದೆ. ನಮ್ಮ ರೈತರಿಗೆ ಲೋಡ್‌ಶೆಡ್ಡಿಂಗ್ ನೀಡಲು ಮುಂದಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿದ್ಯುತ್ ಅಭಾವದಿಂದ ಬೆಳೆಗಳು ಒಣಗುತ್ತಿವೆ. ನಾಲೆಗಳಲ್ಲೂ ನೀರಿಲ್ಲ, ಬೋರ್ ವೆಲ್ ಗಳಿಂದ ಪಂಪ್ ಮಾಡಲು ವಿದ್ಯುತ್ ಇಲ್ಲ. ಮೊದಲೇ ಕಷ್ಟದಲ್ಲಿರುವ ರೈತನ ಬೆನ್ನಿನ ಮೇಲೆ ಬರೆಯ ಮೇಲೆ ಬರೆ ಎಳೆಯಲಾಗುತ್ತಿದೆ. ಜಲ, ಪವನ, ಸೌರ ವಿದ್ಯುತ್ ಉತ್ಪಾದನೆ ಕುಸಿತವಾಗಿದೆ. ಇದು ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣೆಯ ವೈಫಲ್ಯ ಎಂದು ಹೇಳಿದ್ದಾರೆ..
ಜಲಾಶಯಗಳು ಖಾಲಿಯಾಗಿದ್ದು, ವಿದ್ಯುತ್ ಉತ್ಪಾದನೆ ಮಿತವಾಗಿ ಮಾಡುವಂತೆ ಸರ್ಕಾರವೇ ಆದೇಶಿಸಿದೆ. ಇನ್ನೊಂದೆಡೆ ಉಷ್ಣ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲು ಬವಣೆಯಿಂದ ಅಲ್ಪಸ್ವಲ್ಪ ಉತ್ಪಾದಿಸುತ್ತಿವೆ. ರಾಜ್ಯದ ಒಟ್ಟಾರೆ ಬೇಡಿಕೆಯಲ್ಲಿ ಶೇ.20ರಷ್ಟು ವಿದ್ಯುತ್ತನ್ನು ಸರ್ಕಾರ ಹೊರಗಿನಿಂದಲೇ ಪಡೆಯುತ್ತಿದೆ. ರಾಜ್ಯವನ್ನು ವಿದ್ಯುತ್ ಸಾಲಕ್ಕೆ ತಳ್ಳಿ, ಕರುನಾಡನ್ನು ಬರ್ಬಾದ್ ಮಾಡಲಿದೆ ಎಂದು ಟೀಕಿಸಿದ್ದಾರೆ.